ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೆ ಮೀಸಲಾತಿ ಹೆಚ್ಚಿಸುವಂತೆ ಒತ್ತಾಯಿಸಿ ಅಖಿಲ ಭಾರತ ಪರಿಶಿಷ್ಟ ಜಾತಿ-ಪಂಗಡ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ಕಾರ್ಮಿಕ ಕಲ್ಯಾಣ ಸಂಘಗಳ ಒಕ್ಕೂಟದ ಸದಸ್ಯರು ಎಂ.ಜಿ.ರಸ್ತೆಯ ಮಹಾತ್ಮಗಾಂಧಿ ಪ್ರತಿಮೆ ಎದುರು ಬುಧವಾರ ಪ್ರತಿಭಟನೆ ನಡೆಸಿದರು.
‘ಜನಸಂಖ್ಯೆಗೆ ಅನುಗುಣವಾಗಿ ಕೇಂದ್ರ ಸರ್ಕಾರ ಪರಿಶಿಷ್ಟ ವರ್ಗದವರ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುತ್ತಾ ಬಂದಿದೆ. ಆದರೆ ರಾಜ್ಯದಲ್ಲಿ ಹಲವು ವರ್ಷಗಳಿಂದ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿಲ್ಲ. ಇದರಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಅನ್ಯಾಯವಾಗುತ್ತಿದೆ’ ಎಂದು ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಡಾ.ಎನ್.ಹನುಮಂತಪ್ಪ ದೂರಿದರು.
ಪರಿಶಿಷ್ಟ ಪಂಗಡಗಳ ಕಲ್ಯಾಣ ನಿರ್ದೇಶನಾಲಯ ಮೀಸಲಾತಿ ಹೆಚ್ಚಿಸುವಂತೆ ಈ ಹಿಂದೆಯೇ ಶಿಫಾರಸು ಮಾಡಿದೆ. ಆದರೂ ಸರ್ಕಾರ ಈ ಬಗ್ಗೆ ಗಮನ ಹರಿಸುತ್ತಿಲ್ಲ. ಪರಿಶಿಷ್ಟರ ಮೇಲಿನ ದೌರ್ಜನ್ಯ ಮುಂದುವರಿದಿದ್ದು, ಅವರಿಗೆ ಭದ್ರತೆಯೇ ಇಲ್ಲವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಮೀಸಲಾತಿ ಪ್ರಮಾಣವನ್ನು ಶೇ 7ಕ್ಕೆ ಹೆಚ್ಚಿಸಬೇಕು. ದೌರ್ಜನ್ಯ ತಡೆ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಒಕ್ಕೂಟದ ರಾಷ್ಟ್ರೀಯ ಘಟಕದ ಅಧ್ಯಕ್ಷ ಎಚ್.ಎಲ್.ಹರಿತ್, ಹೆಚ್ಚುವರಿ ಪ್ರಧಾನ ಕಾರ್ಯದರ್ಶಿ ಕೆ.ನಾಗೇಶ್ವರ ರಾವ್ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.