ADVERTISEMENT

ಬೆಂಗಳೂರು | ರಾಜಕಾಲುವೆ ಬಳಿ ಶುಚಿರಹಿತ ಫಲೂಡಾ ತಯಾರಿಕೆ: ನೋಟಿಸ್‌

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2024, 15:50 IST
Last Updated 28 ಮಾರ್ಚ್ 2024, 15:50 IST
<div class="paragraphs"><p>ಫಲೂಡಾ</p></div>

ಫಲೂಡಾ

   

– ಸಾಂದರ್ಭಿಕ ಚಿತ್ರ

ಬೆಂಗಳೂರು: ‘ಶೇಷಾದ್ರಿಪುರ ರಾಜಕಾಲುವೆಯ ಪಕ್ಕದ ಶಿಥಿಲಾವಸ್ಥೆಯಲ್ಲಿರುವ ಕಟ್ಟಡವೊಂದರಲ್ಲಿ ಫಲೂಡಾ, ಐಸ್ ಕ್ರೀಂ, ಬಾದಾಮ್ ಹಾಲು ಉತ್ಪಾದನೆ ಘಟಕ ನಡೆಸಲಾಗುತ್ತಿದೆ’ ಎಂದು ಆಕ್ಷೇಪಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಭಾರತ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರ ಹಾಗೂ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿವಿಎಂಪಿ) ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ADVERTISEMENT

ಈ ಸಂಬಂಧ ಹೈಕೋರ್ಟ್ ವಕೀಲ ಎನ್‌.ಪಿ.ಅಮೃತೇಶ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು. ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿದೆ.

ಅರ್ಜಿಯಲ್ಲಿ ಏನಿದೆ?: ‘ಶೇಷಾದ್ರಿಪುರ ರಾಜಕಾಲುವೆ ಬಳಿಯಲ್ಲಿನ ಪಾಳುಬಿದ್ದ ಕಟ್ಟಡದಲ್ಲಿ ಫಲೂಡಾ, ಐಸ್ ಕ್ರೀಂ, ಬಾದಾಮ್ ಹಾಲು ಹಾಗೂ ಇತರೆ ಪಾನೀಯಗಳನ್ನು ತಯಾರಿಸಿ ರಸ್ತೆ ಬದಿಯಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಈ ತಯಾರಿಕಾ ಘಟಕದ ಬಳಿಯಲ್ಲೇ ಜನರು ತ್ಯಾಜ್ಯವನ್ನು ತಂದು ಸುರಿಯುತ್ತಾರೆ. ಅತ್ಯಂತ ಕಲುಷಿತ ಪರಿಸರದಲ್ಲಿ ಆಹಾರ ಸಿದ್ಧಪಡಿಸಲಾಗುತ್ತಿದೆ’ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.

‘ಈ ಕಟ್ಟಡವು ಹಲವು ವರ್ಷಗಳಷ್ಟು ಹಳೆಯದಾಗಿದ್ದು ಯಾವಾಗ ಬೇಕಾದರೂ ನೆಲಕಚ್ಚುವ ಸಂಭವ ಇದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಶಿಥಿಲಗೊಂಡ ಕಟ್ಟಡವನ್ನು ಕೆಡವುವಂತೆ ಕಟ್ಟಡದ ಮಾಲೀಕರಿಗೆ ಸೂಚಿಸಿತ್ತು. ಆದರೂ ಪ್ರಯೋಜನವಾಗಿಲ್ಲ’ ಎಂದು ಅರ್ಜಿದಾರರು ದೂರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.