ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬರ ಪರಿಹಾರ ಬಿಡುಗಡೆ | ರಾಜ್ಯ ಸರ್ಕಾರದ ಪಾತ್ರವೇನೂ ಇಲ್ಲ: ಆರ್‌.ಅಶೋಕ

Published 27 ಏಪ್ರಿಲ್ 2024, 15:57 IST
Last Updated 27 ಏಪ್ರಿಲ್ 2024, 15:57 IST
ಅಕ್ಷರ ಗಾತ್ರ

ಬೆಂಗಳೂರು: ‘ಬರಪೀಡಿತ ಪ್ರದೇಶಗಳ ಜನರ ನೆರವಿಗಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಾಜ್ಯಕ್ಕೆ ₹ 3,454 ಕೋಟಿ ಪರಿಹಾರ ಬಿಡುಗಡೆ ಮಾಡಿದೆ. ಇದರಲ್ಲಿ ರಾಜ್ಯ ಸರ್ಕಾರದ ಪಾತ್ರವೇನೂ ಇಲ್ಲ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ ಹೇಳಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯ ಸರ್ಕಾರ ಕೇಂದ್ರಕ್ಕೆ ಸಕಾಲಕ್ಕೆ ಮಾಹಿತಿ ಒದಗಿಸದೇ ಇರುವುದರಿಂದ ಪರಿಹಾರ ಬಿಡುಗಡೆ ವಿಳಂಬವಾಗಿತ್ತು. ಸುಪ್ರೀಂ ಕೋರ್ಟ್‌ ಆದೇಶದ ಕಾರಣಕ್ಕೆ ಪರಿಹಾರ ಬಿಡುಗಡೆ ಮಾಡಲಾಗಿದೆ ಎಂಬುದು ಸರಿಯಲ್ಲ. ಹಾಗಿದ್ದರೆ ಕರ್ನಾಟಕಕ್ಕೆ ಮಾತ್ರ ಪರಿಹಾರ ಬಿಡುಗಡೆ ಆಗಬೇಕಿತ್ತು. ಉಳಿದ ರಾಜ್ಯಗಳಿಗೂ ಪರಿಹಾರ ನೀಡಿಲ್ಲವೆ’ ಎಂದು ಪ್ರಶ್ನಿಸಿದರು.

‘ಪರಿಹಾರದ ಹಣ ಬಿಡುಗಡೆಯಲ್ಲಿ ಕಾಂಗ್ರೆಸ್‌ ಪಕ್ಷದ ಶ್ರಮ ಏನೂ ಇಲ್ಲ. ಕೇಂದ್ರ ಚುನಾವಣಾ ಆಯೋಗ ಅನುಮತಿ ನೀಡಿರುವುದರಿಂದ ಕೇಂದ್ರ ಸರ್ಕಾರ ಪರಿಹಾರ ನೀಡಿದೆ. ರಾಜ್ಯ ಸರ್ಕಾರದ ಖಜಾನೆ ಬರಿದಾಗಿದೆ. ಈ ಕಾರಣದಿಂದ ಕಾಂಗ್ರೆಸ್‌ನವರು ಸುಳ್ಳು ಆರೋಪ ಮಾಡುತ್ತಿದ್ದಾರೆ’ ಎಂದರು.

ಲೂಟಿ ತಡೆಯಲು ಯತ್ನ: ‘ಇಷ್ಟು ದಿನ ಕೇಂದ್ರದ ವಿರುದ್ಧ ಆರೋಪ ಮಾಡುತ್ತಿದ್ದ ಕಾಂಗ್ರೆಸ್‌ ಪಕ್ಷದವರು ರೈತರಿಗೆ ಸಿಗಬೇಕಾದ ಬರ ಪರಿಹಾರದ ಹಣವನ್ನೂ ಲೂಟಿ ಮಾಡುವ ಪ್ರಯತ್ನ ಮಾಡಲಿದ್ದಾರೆ. ಇದನ್ನು ತಡೆಯಲು ನಾವು ಪ್ರಯತ್ನಿಸುತ್ತೇವೆ. ರೈತರಿಗೆ ಚೆಕ್‌ ಮೂಲಕ ಪರಿಹಾರ ವಿತರಿಸಬಾರದು. ನೇರ ನಗದು ವರ್ಗಾವಣೆ ಮೂಲಕವೇ ಪರಿಹಾರ ಪಾವತಿಸಬೇಕು’ ಎಂದು ಆಗ್ರಹಿಸಿದರು.

ಸೋಲಿನ ಭೀತಿಯಿಂದ ಹಲ್ಲೆ: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸೋಲಿನ ಭೀತಿಯಲ್ಲಿದ್ದಾರೆ. ಈ ಕಾರಣದಿಂದ ಶುಕ್ರವಾರ ಮತದಾನದ ಅವಧಿಯಲ್ಲಿ ಬಿಜೆಪಿ, ಜೆಡಿಎಸ್‌ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿಸಿದ್ದಾರೆ. ಕಾಂಗ್ರೆಸ್‌ ಸರ್ಕಾರದ ಕೈಗೊಂಬೆಯಂತಾಗಿರುವ ಪೊಲೀಸರು ಆರೋಪಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT