ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ | ದ್ವಿತೀಯು ಪಿಯು ಪರೀಕ್ಷೆ–2: 1,270 ಮಂದಿ ನೋಂದಣಿ

ಏ.29ರಿಂದ ಮೇ 16ರವರೆಗೆ ಪರೀಕ್ಷೆ, ಸಿದ್ಧತೆಗೆ ಡಿ.ಸಿ. ಸೂಚನೆ
Published 24 ಏಪ್ರಿಲ್ 2024, 4:08 IST
Last Updated 24 ಏಪ್ರಿಲ್ 2024, 4:08 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿಯ 2ನೇ ವಾರ್ಷಿಕ ಪರೀಕ್ಷೆಯು ಇದೇ 29ರಿಂದ ಮೇ 16ರವರೆಗೆ ನಡೆಯಲಿದ್ದು, ಪರೀಕ್ಷೆಗಳನ್ನು ಸುಗಮ ಹಾಗೂ ಪಾರದರ್ಶಕವಾಗಿ ನಡೆಸಲು ಅಗತ್ಯವಿರುವ ಸಿದ್ದತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ದ್ವಿತೀಯ ಪಿ.ಯು.ಸಿ ಪರೀಕ್ಷೆ-2ರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಮೊದಲ ಹಂತದ ಪರೀಕ್ಷೆಯಲ್ಲಿ ಅನುತ್ತೀರ್ಣರಾದ 1099 ವಿದ್ಯಾರ್ಥಿಗಳು, ಫಲಿತಾಂಶ ಉತ್ತಮ ಪಡಿಸಿಕೊಳ್ಳಲು ನೋಂದಾಯಿಸಿಕೊಂಡಿರುವ 166 ಹಾಗೂ ಖಾಸಗಿಯಾಗಿ 5 ಮಂದಿ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 1,270 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ’ ಎಂದರು. 

‘ಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೇಗಾಲ ಹಾಗೂ ಯಳಂದೂರು ತಾಲ್ಲೂಕು ಕೇಂದ್ರಗಳ ನಾಲ್ಕು ಕಾಲೇಜುಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಅಕ್ರಮಗಳಾಗದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು’ ಎಂದು ಜಿಲ್ಲಾಧಿಕಾರಿಯವರು ಸೂಚಿಸಿದರು.

‘ಪರೀಕ್ಷಾ ಕೇಂದ್ರದ ಕೊಠಡಿಗಳಲ್ಲಿ ಹಾಗೂ ಹೊರಾಂಗಣದಲ್ಲಿ ಅಳವಡಿಸಿರುವ ಸಿ.ಸಿ ಕ್ಯಾಮೆರಾಗಳ ಕಾರ್ಯಕ್ಷಮತೆ ಸುಸ್ಥಿತಿಯಲ್ಲಿರುವುದನ್ನು ಪರಿಶೀಲಿಸಿ ಖಾತರಿ ಪಡಿಸಿಕೊಳ್ಳಬೇಕು. ಪೀಠೋಪಕರಣ, ಕುಡಿಯುವ ನೀರು, ಶೌಚಾಲಯ ಹಾಗೂ ಗಾಳಿ, ಬೆಳಕು ಇನ್ನಿತರ ಎಲ್ಲ ಮೂಲ ಸೌಕರ್ಯಗಳು ಉತ್ತಮ ಸ್ಥಿತಿಯಲ್ಲಿ ಇರಬೇಕು’ ಎಂದರು. 

‘ಪರೀಕ್ಷಾ ದಿನಗಳಂದು ವಿದ್ಯುತ್ ಸಂಪರ್ಕ ಕಡಿತಗೊಳಿಸದಿರುವ ಬಗ್ಗೆ ಸೆಸ್ಕ್‌ ಅಧಿಕಾರಿಗಳೊಂದಿಗೆ ಪತ್ರ ವ್ಯವಹಾರ ನಡೆಸಿ ಸಮರ್ಪಕ ವಿದ್ಯುತ್ ವ್ಯವಸ್ಥೆಗೆ ಕ್ರಮ ವಹಿಸಬೇಕು. ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಬಂದೋಬಸ್ತ್ ಅವಶ್ಯವಾಗಿರಬೇಕು. ಮುನ್ನೆಚ್ಚರಿಕೆಯಾಗಿ ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ ಔಷಧಿ, ಪ್ರಥಮ ಚಿಕಿತ್ಸಾ ಪೆಟ್ಟಿಗೆ ಸಹಿತವಾಗಿ ಶುಶ್ರೂಷಕಿ, ಆಶಾ ಕಾರ್ಯಕರ್ತೆಯರನ್ನು ನಿಯೋಜಿಸಬೇಕು’ ಎಂದರು. 

‘ಪರೀಕ್ಷಾ ಕೇಂದ್ರಕ್ಕೆ ಸಕಾಲದಲ್ಲಿ ಹಾಜರಾಗಲು ವಿದ್ಯಾರ್ಥಿಗಳಿಗೆ ಇರುವ ಸಾರಿಗೆ ವ್ಯವಸ್ಥೆಯನ್ನು ಪರಿಶೀಲಿಸಿ ಪ್ರಾಂಶುಪಾಲರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ವರದಿ ನೀಡಬೇಕು. ಅನುತ್ತೀರ್ಣರಾದ ಪ್ರತಿ ಮಕ್ಕಳು ಕೂಡ ಕಡ್ಡಾಯವಾಗಿ ಪರೀಕ್ಷೆ ಬರೆಯುವಂತೆ ಪೋಷಕರ ಮನವೊಲಿಸಿ 2ನೇ ಹಂತದ ಪರೀಕ್ಷೆಗೆ ಹಾಜರಾಗುವಂತೆ ನೋಡಿಕೊಳ್ಳಬೇಕು’ ಎಂದು ಶಿಲ್ಪಾ ನಾಗ್‌ ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ ಪ್ರಸನ್ನ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಮಚಂದ್ರರಾಜೇ ಅರಸ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಿದಂಬರ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಪರೀಕ್ಷಾ ನೋಡೆಲ್ ಅಧಿಕಾರಿಗಳು, ಇತರೆ ಅಧಿಕಾರಿಗಳು ಭಾಗವಹಿಸಿದ್ದರು. 

ಕೇಂದ್ರಗಳ ಸುತ್ತ ನಿಷೇಧಾಜ್ಞೆ

2ನೇ ಹಂತದ ದ್ವಿತೀಯ ಪಿ.ಯು.ಸಿ ಪರೀಕ್ಷೆಗಳಲ್ಲಿ ಅಕ್ರಮಗಳನ್ನು ತಡೆಗಟ್ಟಲು ಮತ್ತು ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾಗದಂತೆ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ಸಾರ್ವಜನಿಕ ನಿಷೇಧಿತ ಸ್ಥಳವೆಂದು ಘೋಷಿಸಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಆದೇಶ ಹೊರಡಿಸಿದ್ದಾರೆ. ಚಾಮರಾಜನಗರದ ಜೆ.ಎಸ್.ಎಸ್. ಮಹಿಳಾ ಪದವಿ ಪೂರ್ವ ಕಾಲೇಜು ಯಳಂದೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಗುಂಡ್ಲುಪೇಟೆಯ ದೊಡ್ಡಹುಂಡಿ ಬೋಗಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜು ಕೊಳ್ಳೇಗಾಲದ ಎಂ.ಜಿ.ಎಸ್.ವಿ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರಗಳಾಗಿವೆ. ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ ವ್ಯಾಪ್ತಿಯ ಪ್ರದೇಶವು ಬೆಳಿಗ್ಗೆ 6 ರಿಂದ ಸಂಜೆ 4 ಗಂಟೆಯವರೆಗೆ ಸಾರ್ವಜನಿಕ ನಿಷೇಧಿತ ಸ್ಥಳವೆಂದು ಘೋಷಿಸಿ ನಿಷೇಧಾಜ್ಞೆ ವಿಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಮತ್ತು ಕಂಪ್ಯೂಟರ್ ಅಂಗಡಿಗಳನ್ನು ಬೆಳಿಗ್ಗೆ 6 ರಿಂದ ಸಂಜೆ 4 ಗಂಟೆಯವರೆಗೆ ಮುಚ್ಚುವಂತೆ ಆದೇಶಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT