ನವದೆಹಲಿ: ದೆಹಲಿ ಕಾಂಗ್ರೆಸ್ ಘಟಕದ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ಅವರು ಭಾನುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬೆಳವಣಿಗೆಯು, ರಾಷ್ಟ್ರದ ರಾಜಧಾನಿಯಲ್ಲಿ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ನಡೆಸುತ್ತಿದ್ದ ಸಿದ್ಧತೆಗೆ ಹಿನ್ನಡೆ ಉಂಟುಮಾಡಿದೆ.
ದೆಹಲಿ ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆಯ ವಿಚಾರದಲ್ಲಿ ಅಸಮಾಧಾನ ಮತ್ತು ಕಾಂಗ್ರೆಸ್‌ನ ದೆಹಲಿ ಉಸ್ತುವಾರಿ ದೀಪಕ್ ಬಾಬರಿಯಾ ಅವರ ನಡವಳಿಕೆಯನ್ನು ವಿರೋಧಿಸಿ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ.
‘ನಾನು ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಯಾವುದೇ ಪಕ್ಷವನ್ನು ಸೇರುತ್ತಿಲ್ಲ’ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
‘ಲವ್ಲಿ ಬಿಜೆಪಿ ಸೇರಲಿದ್ದು, ಪೂರ್ವ ದೆಹಲಿ ಲೋಕಸಭಾ ಕ್ಷೇತ್ರದಿಂದ ಪಕ್ಷವು ಅವರನ್ನು ಕಣಕ್ಕಿಳಿಸಲಿದೆ’ ಎಂದು ಕಾಂಗ್ರೆಸ್‌ನ ಮಾಜಿ ಶಾಸಕ ಆಸಿಫ್ ಮೊಹಮ್ಮದ್ ಖಾನ್ ಹೇಳಿಕೆ ನೀಡಿದ ಬೆನ್ನಲ್ಲೇ ಅವರು ಈ ಸ್ಪಷ್ಟೀಕರಣ ಕೊಟ್ಟಿದ್ದಾರೆ.
ದೆಹಲಿ ಕಾಂಗ್ರೆಸ್‌ನಲ್ಲಿ ತಲೆದೋರಿರುವ ಬಿಕ್ಕಟ್ಟು ಬಗೆಹರಿಸುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರಿಗೆ ಸೂಚಿಸಿದ್ದಾರೆ.
ಲವ್ಲಿ ಅವರು ಎಐಸಿಸಿ ಅಧ್ಯಕ್ಷರಿಗೆ ಬರೆದ ರಾಜೀನಾಮೆ ಪತ್ರದಲ್ಲಿ, ದೀಪಕ್ ಬಾಬರಿಯಾ ಅವರ ಕಾರ್ಯವೈಖರಿಯನ್ನು ಕಟುವಾಗಿ ಟೀಕಿಸಿದ್ದಾರೆ. ಅಭ್ಯರ್ಥಿಗಳ ಆಯ್ಕೆಯ ವೇಳೆ ದೆಹಲಿ ಘಟಕದ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದು ದೂರಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಎಎಪಿ ಜತೆ ಮೈತ್ರಿ ಮಾಡಿಕೊಳ್ಳುವುದಕ್ಕೆ ದೆಹಲಿ ಘಟಕದ ವಿರೋಧವಿತ್ತು ಎಂಬುದನ್ನೂ ಅವರು ನೆನಪಿಸಿದ್ದಾರೆ.
ವಾಯವ್ಯ ದೆಹಲಿ ಕ್ಷೇತ್ರದ ಅಭ್ಯರ್ಥಿ ಉದಿತ್ ರಾಜ್ ಅವರು ಪಕ್ಷದ ಕಾರ್ಯಕರ್ತರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವುದು ಮತ್ತು ಈಶಾನ್ಯ ದೆಹಲಿ ಅಭ್ಯರ್ಥಿ ಕನ್ಹಯ್ಯಾ ಕುಮಾರ್ ಅವರು ಎಎಪಿ ಸರ್ಕಾರ ಹಾಗೂ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಹೊಗಳಿರುವುದನ್ನೂ ಪತ್ರದಲ್ಲಿ ಟೀಕಿಸಿದ್ದಾರೆ.
ಈ ವಿಷಯದ ಬಗ್ಗೆ ನಾನು ಪ್ರತಿಕ್ರಿಯಿಸುವುದು ಸೂಕ್ತ ಎನಿಸುವುದಿಲ್ಲ. ದೆಹಲಿಯ ಏಳು ಕ್ಷೇತ್ರಗಳಲ್ಲೂ ಜನರು ‘ಇಂಡಿಯಾ’ ಒಕ್ಕೂಟದ ಅಭ್ಯರ್ಥಿಗಳಿಗೆ ಮತ ಹಾಕುವ ವಿಶ್ವಾಸವಿದೆ
-ಸೌರಭ್ ಭಾರದ್ವಾಜ್ ಎಎಪಿ ನಾಯಕ
Arvinder Singh Lovely resigns from the position of Delhi Congress president.
— ANI (@ANI) April 28, 2024
"The Delhi Congress Unit was against an alliance with a Party which was formed on the sole basis of leveling false, fabricated and malafide corruption charges against the Congress Party. Despite that,… https://t.co/Y1A360fuut pic.twitter.com/hLP9RtnzUE
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.