ADVERTISEMENT

ಬಜೆಟ್‌ 2023| ಬೊಮ್ಮಾಯಿ ಬಜೆಟ್‌ನಲ್ಲಿ ಮಠ, ದೇಗುಲಗಳಿಗೆ ಸಿಕ್ಕಿದ್ದೇನು?

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 17 ಫೆಬ್ರುವರಿ 2023, 11:41 IST
Last Updated 17 ಫೆಬ್ರುವರಿ 2023, 11:41 IST
   

ಬೆಂಗಳೂರು: ₹1,000 ಕೋಟಿ ವೆಚ್ಚದ ಕಾಮಗಾರಿಗಳನ್ನು ಕೈಗೆತ್ತಿಕೊಂಡು ರಾಜ್ಯದ ವಿವಿಧ ದೇವಸ್ಥಾನ ಮತ್ತು ಮಠಗಳ ಜೀರ್ಣೋದ್ಧಾರ ಮಾಡಿ ಅಭಿವೃದ್ಧಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಜೆಟ್‌ನಲ್ಲಿ ಘೋಷಿಸಿದ್ದಾರೆ.

ಧಾರ್ಮಿಕ ದತ್ತಿ ಇಲಾಖೆಯ ವತಿಯಿಂದ 2022-23ನೇ ಸಾಲಿನಲ್ಲಿ ದೇವಸ್ಥಾನಗಳ ಮತ್ತು ಮಠಗಳ ಜೀರ್ಣೋದ್ಧಾರ ಕಾಮಗಾರಿಗಳಿಗೆ ಒಟ್ಟು ₹425 ಕೋಟಿ ಅನುದಾನ ನೀಡಲಾಗಿದೆ. ಮುಂದಿನ 2 ವರ್ಷಗಳಲ್ಲಿ ರಾಜ್ಯದಲ್ಲಿನ ವಿವಿಧ ದೇವಸ್ಥಾನ ಮತ್ತು ಮಠಗಳ ಜೀರ್ಣೋದ್ಧಾರಕ್ಕಾಗಿ ನಮ್ಮ ಸರ್ಕಾರ ₹1,000 ಕೋಟಿ ಮೌಲ್ಯದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಿದೆ ಎಂದು ಅವರು ತಿಳಿಸಿದರು.

ಜಗತ್ತಿಗೆ ಸಂಸತ್ತಿನ ಪರಿಕಲ್ಪನೆಯನ್ನು ಪರಿಚಯಿಸಿದ ಬಸವಾದಿ ಶರಣರು ಸ್ಥಾಪಿಸಿದ ಅನುಭವ ಮಂಟಪದ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಶೀಘ್ರದಲ್ಲಿಯೇ ಪೂರ್ಣಗೊಳಿಸಲಾಗುವುದು ಎಂದು ಇದೇ ವೇಳೆ ಅವರು ತಿಳಿಸಿದರು.

ADVERTISEMENT

ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳ ಇನಾಂ ಜಮೀನುಗಳ ವರ್ಷಾಶನವನ್ನು ₹48,000ಗಳಿಂದ ₹60,೦೦೦ಕ್ಕೆ ಹೆಚ್ಚಿಸಲಾಗುವುದು. ಈ ಸೌಲಭ್ಯದಿಂದ 3,721 ಸಂಸ್ಥೆಗಳಿಗೆ ಅನುಕೂಲವಾಗಲಿದೆ ಎಂದು ಬೊಮ್ಮಾಯಿ ತಿಳಿಸಿದರು.

ರಾಜ್ಯದಲ್ಲಿನ ಪಾರಂಪರಿಕ ತಾಣಗಳ ಪ್ರವಾಸಿ ಸರ್ಕ್ಯುಟ್ ಪ್ರಾರಂಭಿಸುವ ಉದ್ದೇಶದಿಂದ ಕಲಬುರಗಿ ಜಿಲ್ಲೆಯಲ್ಲಿರುವ ಸನ್ನತಿ-ಚಂದ್ರಲಾಂಬಾ ದೇವಾಲಯ ಹಾಗೂ ಗಾಣಗಾಪುರ ದತ್ತಾತ್ರೇಯ ದೇವಾಲಯ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಬನವಾಸಿಯ ಮಧುಕೇಶ್ವರ ದೇವಾಲಯ ಸಂಕೀರ್ಣಗಳ ಸಮಗ್ರ ಅಭಿವೃದ್ಧಿಗಾಗಿ ಅನುದಾನ ಒದಗಿಸಲಾಗುವುದು ಎಂದು ಸಿಎಂ ಹೇಳಿದರು.

ಇವುಗಳನ್ನೂ ಓದಿ















ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.