ಬೆಂಗಳೂರು: ಈ ಬಾರಿಯ ಬಜೆಟ್‌ನಲ್ಲಿ ಸರ್ಕಾರದ ಮಹಿಳಾ ಹಾಗೂ ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಏನೆಲ್ಲಾ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ ಹಾಗೂ ಪ್ರಸ್ತುತ ಚಾಲ್ತಿಯಲ್ಲಿರುವ ಯೋಜನೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ.
ಮಹಿಳೆಯರ ಆರ್ಥಿಕ ಸ್ವಾತಂತ್ರ್ಯಕ್ಕೆ ಬೆಂಬಲ ನೀಡುವ ಯೋಜನೆ ಗೃಹಲಕ್ಷ್ಮಿ. ಈ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2,000 ರೂ. ನೀಡಲಾಗುತ್ತಿದೆ. ಕುಟುಂಬ ದತ್ತಾಂಶದನ್ವಯ 1.33 ಕೋಟಿ APL, BPL, AAY ಪಡಿತರ ಚೀಟಿ ಹೊಂದಿರುವ ಯಜಮಾನಿ ಮಹಿಳೆಯರನ್ನು ಅರ್ಹ ಫಲಾನುಭವಿಗಳೆಂದು ಗುರುತಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ
ಜನವರಿ ಅಂತ್ಯದವರೆಗೆ 1.17 ಕೋಟಿ ಮಹಿಳೆಯರು ಯೋಜನೆಯಡಿ ನೋಂದಾಯಿಸಿಕೊಂಡಿದ್ದು, ಈವರೆಗೆ ₹11,726 ಕೋಟಿಯನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾಯಿಸಲಾಗಿದೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.
2024-25ನೇ ಸಾಲಿನಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ₹28,608 ಕೋಟಿಯನ್ನು ಒದಗಿಸಲಾಗಿದೆ. ಇದರಿಂದ ಕುಟುಂಬ ನಿರ್ವಹಣೆಯ ಜೊತೆಗೆ ಆದಾಯಗಳಿಸುವ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಮಹಿಳೆಯರಿಗೆ ಈ ಯೋಜನೆ ಅವಕಾಶ ಕಲ್ಪಿಸಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಪ್ರೋತ್ಸಾಹ ಧನ:
Cerebral Palsy, Muscular Dystrophy, Parkinsons ಮತ್ತು Multiple Sclerosis ಕಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ತಿಂಗಳು ₹1,000 ಪ್ರೋತ್ಸಾಹಧನ ನೀಡಲಾಗುವುದು.
ಶಸ್ತ್ರಚಿಕಿತ್ಸೆ ಶಿಬಿರ
ಆರೋಗ್ಯ ಇಲಾಖೆಯೊಂದಿಗೆ ಸಮನ್ವಯಿಸಿ ಎಲ್ಲಾ ತಾಲ್ಲೂಕುಗಳಲ್ಲಿ ಹಿರಿಯ ನಾಗರಿಕರಿಗೆ ಪ್ರತಿ ವರ್ಷ ಎರಡು Cataract ಶಸ್ತ್ರಚಿಕಿತ್ಸೆ ಶಿಬಿರಗಳನ್ನು ಆಯೋಜಿಸಲಾಗುವುದು.
ವಿಕಲಚೇತನರಿಗೆ
ನಿರಾಶ್ರಿತ ಬೌದ್ಧಿಕ ವಿಕಲಚೇತನರ ಆರೈಕೆ ಮತ್ತು ಸಂರಕ್ಷಣೆಗಾಗಿ 4 ಅನುಪಾಲನಾ ಗೃಹಗಳನ್ನು ₹2 ಕೋಟಿ ವೆಚ್ಚದಲ್ಲಿ ಪ್ರಾರಂಭಿಸಲಾಗುವುದು.
ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ಒದಗಿಸಲು ಇನ್ನೂ ಬಾಕಿಯಿರುವ 1,500 ವಿಶೇಷಚೇತನರಿಗೆ 2024-25ನೇ ಸಾಲಿನಲ್ಲಿ ದ್ವಿಚಕ್ರ ವಾಹನಗಳನ್ನು ವಿತರಿಸಲಾಗುವುದು.
2024-25ನೇ ಸಾಲಿನಲ್ಲಿ ಮಹಿಳಾ ಉದ್ದೇಶಿತ ಯೋಜನೆಗಳಿಗೆ ₹86,423 ಕೋಟಿ ಹಾಗೂ ಮಕ್ಕಳ ಉದ್ದೇಶಿತ ಯೋಜನೆಗಳಿಗೆ ₹ 54,617 ಕೋಟಿ ಒದಗಿಸಲಾಗಿಸಲಾಗಿದ ಎಂದು ಸಿದ್ದರಾಮಯ್ಯ ಬಜೆಟ್ ಮಂಡನೆ ವೇಳೆ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.