ನವದೆಹಲಿ: ಬ್ಯಾಂಕ್‌ಗಳ ಆಡಳಿತ ಸುಧಾರಣೆ ಮತ್ತು ಠೇವಣಿದಾರರ ಹಿತರಕ್ಷಣೆಗಾಗಿ ಲೋಕಸಭೆಯಲ್ಲಿ ಬ್ಯಾಂಕಿಂಗ್ ಕಾನೂನು (ತಿದ್ದುಪಡಿ) ಮಸೂದೆ–2024 ಮಂಡಿಸಲಾಗಿದೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ತಿಳಿಸಿದೆ.
ಕಳೆದ ವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಈ ಮಸೂದೆ ಮಂಡನೆಗೆ ಒಪ್ಪಿಗೆ ನೀಡಿತ್ತು.
ಅಲ್ಲದೆ, 1924ರ ಭಾರತೀಯ ರಿಸರ್ವ್ ಬ್ಯಾಂಕ್ ಕಾಯ್ದೆ, 1949ರ ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ, 1955ರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕಾಯ್ದೆ, 1970ರ ಬ್ಯಾಂಕಿಂಗ್ ಕಂಪನಿಗಳ (ಸಂಸ್ಥೆಗಳ ಸ್ವಾಧೀನ ಮತ್ತು ವರ್ಗಾವಣೆ) ಕಾಯ್ದೆ ಹಾಗೂ 1980ರ ಬ್ಯಾಂಕಿಂಗ್ ಕಂಪನಿಗಳ (ಸಂಸ್ಥೆಗಳ ಸ್ವಾಧೀನ ಮತ್ತು ವರ್ಗಾವಣೆ) ಕಾಯ್ದೆಗೆ ತಿದ್ದುಪಡಿ ಬಗ್ಗೆಯೂ ಒಪ್ಪಿಗೆ ಸೂಚಿಸಿತ್ತು.
ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ ತಿದ್ದುಪಡಿ ಬಗ್ಗೆ 2023–24ರ ಬಜೆಟ್ ಅಧಿವೇಶನದಲ್ಲಿಯೂ ಹಣಕಾಸು ಸಚಿವರು ಪ್ರಸ್ತಾಪಿಸಿದ್ದರು.
ಪ್ರತಿಪಕ್ಷಗಳ ವಿರೋಧ:
ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಅವರು, ಮಸೂದೆಗೆ ವಿರೋಧ ವ್ಯಕ್ತಪಡಿಸಿದರು. ‘ಸಹಕಾರ ಬ್ಯಾಂಕ್‌ಗಳಿಗೆ ಸಂಬಂಧಿಸಿದಂತೆ ಶಾಸನ ರೂಪಿಸುವ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಬೇಕಿದೆ’ ಎಂದು ಒತ್ತಾಯಿಸಿದರು. ಇದಕ್ಕೆ ಆರ್‌ಎಸ್‌ಪಿ ಸಂಸದ ಎನ್.ಕೆ. ಪ್ರೇಮಚಂದ್ರನ್ ಕೂಡ ಧ್ವನಿಗೂಡಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ‘ಸಹಕಾರ ಬ್ಯಾಂಕ್‌ಗಳಿಗೆ ಸಂಬಂಧಿಸಿದಂತೆ ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆಯಲ್ಲಿ ಕೇವಲ ಒಂದು ಅಥವಾ ಎರಡು ತಿದ್ದುಪಡಿಯನ್ನಷ್ಟೇ ಮಾಡಿಲ್ಲ. ಹಲವು ತಿದ್ದುಪಡಿಗಳನ್ನು ಮಾಡಲಾಗಿದೆ’ ಎಂದು ಸಮರ್ಥಿಸಿಕೊಂಡರು.
ಬ್ಯಾಂಕಿಂಗ್ ಹೆಸರಿನಡಿ ಸಹಕಾರ ಬ್ಯಾಂಕ್‌ಗಳ ಆಶಯಕ್ಕೆ ಧಕ್ಕೆ ತರುವುದಿಲ್ಲ. ಅವುಗಳನ್ನು ದುರ್ಬಲಗೊಳಿಸುವ ಯಾವುದೇ ಪ್ರಯತ್ನಕ್ಕೆ ಸರ್ಕಾರ ಮುಂದಾಗುತ್ತಿಲ್ಲ. ತಿದ್ದುಪಡಿಗಳು ಮತ್ತು ನ್ಯಾಯಾಲಯದ ತೀರ್ಪುಗಳು ಈ ಕಾಯ್ದೆಯನ್ನು ಮತ್ತಷ್ಟು ಬಲಪಡಿಸುತ್ತವೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.