ನವದೆಹಲಿ: ಸಾಲಪತ್ರ ಆಧಾರಿತ ಮ್ಯೂಚುವಲ್ ಫಂಡ್‌ಗಳನ್ನು ಸ್ಥಗಿತಗೊಳಿಸುವ ಮೊದಲು ಆ ಫಂಡ್‌ಗಳಲ್ಲಿ ಹೂಡಿಕೆ ಮಾಡಿದ ಶೇಕಡ 50ರಷ್ಟಕ್ಕಿಂತ ಹೆಚ್ಚಿನವರ ಒಪ್ಪಿಗೆ ಪಡೆಯುವುದು ಅಗತ್ಯ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಶೇಕಡ 50ಕ್ಕಿಂತ ಹೆಚ್ಚಿನ ಹೂಡಿಕೆದಾರರಿಂದ ಒಪ್ಪಿಗೆ ಪಡೆಯದೆಯೇ ಸಾಲಪತ್ರ ಆಧಾರಿತ ಆರು ಮ್ಯೂಚುವಲ್ ಫಂಡ್ ಯೋಜನೆಗಳನ್ನು ಸ್ಥಗಿತಗೊಳಿಸಿದ ಕ್ರಮಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದ್ದನ್ನು ಪ್ರಶ್ನಿಸಿ ಫ್ರ್ಯಾಂಕ್ಲಿನ್ ಟೆಂಪಲ್‌ಟನ್ ಕಂಪನಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ.
ನ್ಯಾಯಮೂರ್ತಿಗಳಾದ ಎಸ್. ಅಬ್ದುಲ್ ನಜೀರ್ ಮತ್ತು ಸಂಜೀವ್ ಖನ್ನಾ ಅವರು ಇದ್ದ ನ್ಯಾಯಪೀಠ ಈ ಅರ್ಜಿಯ ವಿಚಾರಣೆ ನಡೆಸಿದೆ. ‘ನಾವು ಕಾನೂನಿನ ಅಂಶಗಳನ್ನು ವ್ಯಾಖ್ಯಾನಿಸಿದ್ದೇವೆ. ಸಾಲಪತ್ರ ಆಧಾರಿತ ಯೋಜನೆಗಳನ್ನು ಸ್ಥಗಿತಗೊಳಿಸುವ ಮೊದಲು ಹೂಡಿಕೆದಾರರಿಂದ ಬಹುಮತದ ಒಪ್ಪಿಗೆ ಪಡೆದುಕೊಳ್ಳಬೇಕು ಎಂಬ ಬಗ್ಗೆ ಹೈಕೋರ್ಟ್ ವ್ಯಕ್ತಪಡಿಸಿದ ಅಭಿಪ್ರಾಯವನ್ನು ಒಪ್ಪಿದ್ದೇವೆ’ ಎಂದು ನ್ಯಾಯಪೀಠ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.