ಬೆಂಗಳೂರು: ‘ರಾಜ್ಯದಲ್ಲಿ ನಡೆಯುತ್ತಿರುವ ಎಪಿಎಂಸಿಗಳ ಡಿಜಿಟಲೀಕರಣ ಪ್ರಕ್ರಿಯೆಯು ಶೀಘ್ರವೇ ಮುಕ್ತಾಯಗೊಳ್ಳಲಿದೆ’ ಎಂದು ಕೃಷಿ ಮಾರುಕಟ್ಟೆ, ಜವಳಿ ಮತ್ತು ಸಕ್ಕರೆ ಸಚಿವ ಶಿವಾನಂದ ಪಾಟೀಲ ತಿಳಿಸಿದರು.
ಶುಕ್ರವಾರ ನಡೆದ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ (ಎಫ್‌ಕೆಸಿಸಿಐ) 107ನೇ ಸರ್ವ ಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು.
ಕೃಷಿ ಉತ್ಪನ್ನ ಮಾರುಕಟ್ಟೆಗಳನ್ನು ಪುನರುಜ್ಜೀವನಗೊಳಿಸುವ ಬಗ್ಗೆ ಪಕ್ಷದ ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಲಾಗಿತ್ತು. ಇದಕ್ಕೆ ಪೂರಕವಾಗಿ ಕಾನೂನನ್ನು ಜಾರಿಗೊಳಿಸಲಾಗಿದೆ ಎಂದು ಹೇಳಿದರು.
ಎಪಿಎಂಸಿ ವ್ಯವಸ್ಥೆಯಲ್ಲಿ ಹಲವು ಮಂದಿ ಪಾಲುದಾರರಿದ್ದಾರೆ. ಯಾರಿಗೂ ಸಮಸ್ಯೆಯಾಗದಂತೆ ಡಿಜಿಟಲೀಕರಣ ವ್ಯವಸ್ಥೆ ಅಳವಡಿಸುವ ಕಾರ್ಯ ನಡೆದಿದೆ. ಇದರಿಂದ ರೈತರು ಮತ್ತು ವರ್ತಕರಿಗೆ ಅನುಕೂಲವಾಗಲಿದೆ ಎಂದರು.
ಕೈಗಾರಿಕಾ ಸಂಸ್ಥೆಯಲ್ಲಿ ಐದು ಸಾವಿರ ಸದಸ್ಯರಿದ್ದು, ರಾಜ್ಯದ ಆರ್ಥಿಕ ಅಭಿವೃದ್ಧಿಗೆ ತನ್ನದೇ ಕೊಡುಗೆ ನೀಡುತ್ತಿದೆ ಎಂದರು.
ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಮಾತನಾಡಿ, ‘ಬೆಂಗಳೂರು ನಗರವು ಜಾಗತಿಕ ಮಟ್ಟದಲ್ಲಿ ವಿಶೇಷ ಸ್ಥಾನ ಪಡೆದುಕೊಳ್ಳುವಲ್ಲಿ ಎಫ್‌ಕೆಸಿಸಿಐ ಕೊಡುಗೆ ಹೆಚ್ಚಿದೆ’ ಎಂದು ಶ್ಲಾಘಿಸಿದರು.
ರಾಜ್ಯದಲ್ಲಿ ಬಂಡವಾಳ ಹೂಡಿಕೆ ಹೆಚ್ಚಾಗಲು ಉತ್ತಮ ವಾತಾವರಣ ಸೃಷ್ಟಿಸುವಲ್ಲಿ ಎಫ್‌ಕೆಸಿಸಿಐ ಪಾತ್ರ ಹಿರಿದು ಎಂದರು.
ಎಫ್‌ಕೆಸಿಸಿಐ ಅಧ್ಯಕ್ಷ ರಮೇಶ್ ಚಂದ್ರ ಲಹೋಟಿ ಮಾತನಾಡಿ, ‘ಎಪಿಎಂಸಿ ಡಿಜಿಟಲೀಕರಣದಿಂದ ಕೈಗಾರಿಕಾ ಸಮುದಾಯಕ್ಕೆ ಹೆಚ್ಚಿನ ಅನುಕೂಲವಾಗಲಿದೆ’ ಎಂದು ಹೇಳಿದರು.
ಟೆಕ್ಸ್‌ಟೈಲ್ ಪಾರ್ಕ್‌ಗೆ
₹390 ಕೋಟಿ ಅನುದಾನ ‘ಕಲಬುರಗಿಯಲ್ಲಿ ಸ್ಥಾಪಿಸುತ್ತಿರುವ ಪಿಎಂ ಮಿತ್ರ ಟೆಕ್ಸ್‌ಟೈಲ್ ಪಾರ್ಕ್‌ಗೆ ಮೂಲಸೌಕರ್ಯ ಕಲ್ಪಿಸಲು ಸರ್ಕಾರವು ₹390 ಕೋಟಿ ಅನುದಾನ ನೀಡಲಿದೆ’ ಎಂದು ಸಚಿವ ಶಿವಾನಂದ ಪಾಟೀಲ ತಿಳಿಸಿದರು. ಈಗಾಗಲೇ ಪಾರ್ಕ್ ನಿರ್ಮಾಣಕ್ಕೆ ಒಂದು ಸಾವಿರ ಎಕರೆ ಭೂಮಿ ಹಂಚಿಕೆ ಮಾಡಿ ಖಾತೆ ಮಾಡಿಕೊಡಲಾಗಿದೆ ಎಂದರು. ಮೂಲಸೌಕರ್ಯ ಅಭಿವೃದ್ಧಿಗೆ ಈ ಮೊದಲು ₹50 ಕೋಟಿ ಹಂಚಿಕೆ ಮಾಡಲಾಗಿತ್ತು. ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯು ಅನುದಾನ ಬಿಡುಗಡೆಗೆ ಒಪ್ಪಿಗೆ ನೀಡಿದೆ. ಈ ಯೋಜನೆಯಿಂದ ಸುಮಾರು 1.5 ಲಕ್ಷ ಉದ್ಯೋಗ ಸೃಷ್ಟಿಯಾಗಲಿವೆ ಎಂದು ವಿವರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.