ನವದೆಹಲಿ: ಕಂಪನಿಯು ಕಾರ್ಯಾಚರಣೆ ನಡೆಸುತ್ತಿರುವ ಸ್ಥಳಗಳಲ್ಲಿ 2038ರ ವೇಳೆಗೆ ಇಂಗಾಲ ಹೊರಸೂಸುವಿಕೆ ಪ್ರಮಾಣವನ್ನು ಶೂನ್ಯಕ್ಕಿಳಿಸಲು ನಿರ್ಧರಿಸಲಾಗಿದ್ದು, ಇದಕ್ಕಾಗಿ ₹2 ಲಕ್ಷ ಕೋಟಿಗೂ ಹೆಚ್ಚು ಬಂಡವಾಳ ವಿನಿಯೋಗಿಸಲಾಗುವುದು ಎಂದು ಸರ್ಕಾರಿ ಸ್ವಾಮ್ಯದ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ಒಎನ್‌ಜಿಸಿ) ತಿಳಿಸಿದೆ.
ಈ ನಿಟ್ಟಿನಲ್ಲಿ ನವೀಕರಿಸಬಹುದಾದ ಇಂಧನ ಮತ್ತು ಹಸಿರು ಜಲಜನಕ ಘಟಕಗಳನ್ನು ಸ್ಥಾಪಿಸಲಾಗುತ್ತದೆ. ತೈಲ ಬಾವಿಗಳ ಕಾರ್ಯಾಚರಣೆಯಲ್ಲಿ ಮಿಥೇನ್ ಅನಿಲವನ್ನು ಸುಡುವ ಬದಲು ಹಸಿರು ಇಂಧನ ಬಳಕೆಗೆ ಒತ್ತು ನೀಡಲಾಗುವುದು ಎಂದು ಹೇಳಿದೆ.
ಒಎನ್‌ಜಿಸಿಯು ದೇಶದ ಒಟ್ಟಾರೆ ಉತ್ಪಾದನೆಯಲ್ಲಿ ಮೂರನೇ ಎರಡರಷ್ಟು ಕಚ್ಚಾ ತೈಲವನ್ನು ಉತ್ಪಾದಿಸುತ್ತದೆ. ಶೇ 58ರಷ್ಟು ನೈಸರ್ಗಿಕ ಅನಿಲವನ್ನು ಉತ್ಪಾದಿಸುತ್ತಿದೆ. ಹಂತ ಹಂತವಾಗಿ ಇಂಗಾಲ ಹೊರಸೂಸುವಿಕೆಯ ಪ್ರಮಾಣ ತಗ್ಗಿಸಲು ತೀರ್ಮಾನಿಸಲಾಗಿದೆ ಎಂದು ವಿವರಿಸಿದೆ.
ಅಲ್ಲದೆ, ನವೀಕರಿಸಬಹುದಾದ ಇಂಧನ ಮತ್ತು ಹಸಿರು ಜಲಜನಕ ಉತ್ಪಾದನೆಗೆ ಒತ್ತು ನೀಡುವ ಮೂಲಕ ದೇಶದ ಇಂಧನದ ಅಗತ್ಯತೆ ಪೂರೈಸಲಾಗುವುದು ಎಂದು ತಿಳಿಸಿದೆ.
2030ರೊಳಗೆ 5 ಗಿಗಾವಾಟ್ ನವೀಕರಿಸಬಹುದಾದ ಇಂಧನ ಉತ್ಪಾದನೆಗಾಗಿ ₹97 ಸಾವಿರ ಕೋಟಿ ಹೂಡಿಕೆ ಮಾಡಲಾಗುತ್ತದೆ. 2035ರ ವೇಳೆಗೆ ₹65,500 ಕೋಟಿ ಹಾಗೂ 2038ರ ವೇಳೆಗೆ ₹38 ಸಾವಿರ ಕೋಟಿ ಹೂಡಿಕೆ ಮಾಡಲಾಗುವುದು ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.