ನವದೆಹಲಿ: ಕೇಂದ್ರ ಸರ್ಕಾರವು ಅನುಷ್ಠಾನಗೊಳಿಸಲಿರುವ ಪ್ರಧಾನ ಮಂತ್ರಿ ಇಂಟರ್ನ್‌ಶಿಪ್ ಯೋಜನೆಯಡಿ ಅಕ್ಟೋಬರ್ 12ರಿಂದ ಹೆಸರು ನೋಂದಣಿ ಮಾಡಿಕೊಳ್ಳಲು ಯುವಜನರಿಗೆ ಅವಕಾಶ ಕಲ್ಪಿಸುವ ಸಾಧ್ಯತೆಯಿದೆ.
ಡಿಸೆಂಬರ್ 2ರಿಂದ ಈ ಯೋಜನೆಯು ಪ್ರಾಯೋಗಿಕವಾಗಿ ಜಾರಿಗೆ ಬರಲಿದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಯೋಜನೆಗೆ ಒಟ್ಟು ₹800 ಕೋಟಿ ಅನುದಾನವನ್ನು ಮೀಸಲಿಡಲಾಗಿದೆ. ಮುಂದಿನ ವರ್ಷದ ಮಾರ್ಚ್ ಅಂತ್ಯದೊಳಗೆ 1.25 ಲಕ್ಷ ಯುವಜನರಿಗೆ ವಿವಿಧ ವೃತ್ತಿ ತರಬೇತಿ ನೀಡುವ ಗುರಿ ಹೊಂದಲಾಗಿದೆ.
ಜುಲೈನಲ್ಲಿ ಮಂಡಿಸಿದ್ದ ಕೇಂದ್ರ ಬಜೆಟ್‌ನಲ್ಲಿ ಸರ್ಕಾರವು ಈ ಯೋಜನೆಯನ್ನು ಘೋಷಿಸಿತ್ತು. ಮುಂದಿನ ಐದು ವರ್ಷದಲ್ಲಿ ಒಂದು ಕೋಟಿ ಯುವಜನರಿಗೆ ಇಂಟರ್ನ್‌ಶಿಪ್ ನೀಡಲಾಗುತ್ತದೆ. ಕೇಂದ್ರ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದ www.pminternship.mca.gov.in ಪೋರ್ಟಲ್ ಮೂಲಕ ಯುವಜನರು ಅರ್ಜಿ ಸಲ್ಲಿಸಬಹುದಾಗಿದೆ.
ಪೋರ್ಟಲ್‌ನಲ್ಲಿ 2,200ಕ್ಕೂ ಹೆಚ್ಚು ಇಂಟರ್ನ್‌ಶಿಪ್ ಅವಕಾಶಗಳನ್ನು ಪ್ರಕಟಿಸಲಾಗಿದೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ.
ಆಯ್ಕೆಯಾದ ಪ್ರತಿ ಅಭ್ಯರ್ಥಿಗೆ 12 ತಿಂಗಳವರೆಗೆ ವೃತ್ತಿ ತರಬೇತಿ ನೀಡಲಾಗುತ್ತದೆ. ಪ್ರತಿ ಮಾಸಿಕ ₹5 ಸಾವಿರ ಭತ್ಯೆ ನೀಡಲಾಗುತ್ತದೆ. ಅಲ್ಲದೆ, ಒಂದು ಬಾರಿಗೆ ಸರ್ಕಾರವು ₹6 ಸಾವಿರ ಧನಸಹಾಯ ನೀಡಲಿದೆ. 21ರಿಂದ 24 ವರ್ಷದ ಒಳಗಿನ ಯುವಜನರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.