ಮುಂಬೈ: ಕ್ರೆಡಿಟ್ ಕಾರ್ಡ್‌ಗಳನ್ನು ಯುಪಿಐ (ಯೂನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್) ಜತೆ ಲಿಂಕ್ ಮಾಡುವ ಬಗ್ಗೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಪ್ರಸ್ತಾವನೆ ಸಲ್ಲಿಸಿದೆ. ಈ ವ್ಯವಸ್ಥೆ ಜಾರಿಯಾದಲ್ಲಿ ಕ್ರೆಡಿಟ್ ಕಾರ್ಡ್ ಬಳಸಿಕೊಂಡು ಯುಪಿಐ ಮೂಲಕ ಪಾವತಿ ಮಾಡುವುದು ಸಾಧ್ಯವಾಗಲಿದೆ.
ಸದ್ಯ, ಉಳಿತಾಯ ಖಾತೆ ಅಥವಾ ಕರೆಂಟ್ ಅಕೌಂಟ್‌ನ ಡೆಬಿಟ್ ಕಾರ್ಡ್‌ಗಳನ್ನು ಯುಪಿಐಗೆ ಲಿಂಕ್ ಮಾಡುವ ಮೂಲಕ ಪಾವತಿ ಮಾಡಲಾಗುತ್ತಿದೆ.
‘ಕ್ರೆಡಿಟ್ ಕಾರ್ಡ್‌ಗಳನ್ನು ಯುಪಿಐ ಜತೆ ಲಿಂಕ್ ಮಾಡುವ ಪ್ರಸ್ತಾವನೆ ಸಲ್ಲಿಸಲಾಗಿದೆ’ ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಬುಧವಾರ ಹೇಳಿದರು. ಆರ್‌ಬಿಐ ಹಣಕಾಸು ನೀತಿ ಪ್ರಕಟಿಸಿ ಅವರು ಈ ಮಾಹಿತಿ ನೀಡಿದರು.
ರಾಷ್ಟ್ರೀಯ ಪಾವತಿ ನಿಗಮ (ಎನ್‌ಪಿಸಿಐ) ನೀಡುತ್ತಿರುವ ರುಪೇ ಕ್ರೆಡಿಟ್ ಕಾರ್ಡ್‌ಗಳೊಂದಿಗೆ ಯುಪಿಐ ಲಿಂಕ್ ಯೋಜನೆ ಆರಂಭಕ್ಕೆ ಉದ್ದೇಶಿಸಲಾಗಿದೆ. ವ್ಯವಸ್ಥೆಯು ಅಭಿವೃದ್ಧಿ ಹೊಂದಿದಂತೆ ಇತರ ಕಾರ್ಡ್‌ಗಳಿಗೂ ಯೋಜನೆ ವಿಸ್ತರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಈ ವ್ಯವಸ್ಥೆಯು ಯುಪಿಐ ಮೂಲಕ ಪಾವತಿಗಳನ್ನು ಮಾಡುವಲ್ಲಿ ಗ್ರಾಹಕರಿಗೆ ನೆರವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.
ಆರ್‌ಬಿಐ ಹಣಕಾಸು ನೀತಿ ಪ್ರಕಟಗೊಂಡಿದ್ದು, ರೆಪೊ ದರವನ್ನು ಶೇ 0.50ರಷ್ಟು ಹೆಚ್ಚಿಸಿ ಶೇ 4.90ಕ್ಕೆ ನಿಗದಿಪಡಿಸಲಾಗಿದೆ. ಪ್ರಸಕ್ತ ಹಣಕಾಸು ವರ್ಷದ ಮೊದಲ ಮೂರು ತ್ರೈಮಾಸಿಕದಲ್ಲಿ ಹಣದುಬ್ಬರ ಪ್ರಮಾಣ ಶೇ 6ರ ಮೇಲಿರಲಿದೆ ಎಂದು ಅಂದಾಜಿಸಲಾಗಿದ್ದು, ಪ್ರಸಕ್ತ ಹಣಕಾಸು ವರ್ಷದ ಆರ್ಥಿಕ ವೃದ್ಧಿ ದರ ಶೇ 7.2ರಷ್ಟು ಇರಲಿದೆ ಎಂದು ಅಂದಾಜಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.