ADVERTISEMENT

MSP ಯೋಜನೆಯಡಿ ಹೆಸರು, ಸೂರ್ಯಕಾಂತಿ ಖರೀದಿಗೆ ಕೇಂದ್ರ ಒಪ್ಪಿಗೆ: ಸಚಿವ

ಸಚಿವ ಶಿವಾನಂದ ಪಾಟೀಲ

​ಪ್ರಜಾವಾಣಿ ವಾರ್ತೆ
Published 24 ಆಗಸ್ಟ್ 2024, 16:03 IST
Last Updated 24 ಆಗಸ್ಟ್ 2024, 16:03 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಬೆಂಗಳೂರು: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಮತ್ತು ಸೂರ್ಯಕಾಂತಿ ಖರೀದಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದ್ದು, ಶೀಘ್ರವೇ ಖರೀದಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಬಾಗಲಕೋಟೆ, ಗದಗ, ಯಾದಗಿರಿ, ಧಾರವಾಡ, ಕೊಪ್ಪಳ, ವಿಜಯಪುರ, ರಾಯಚೂರು ಜಿಲ್ಲೆಯಲ್ಲಿ ಹೆಚ್ಚಾಗಿ ಹೆಸರುಕಾಳು ಬೆಳೆಯಲಾಗುತ್ತದೆ. 2.50 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಬೆಳೆಯಲಾಗಿದೆ. ಸದ್ಯ ಮಾರುಕಟ್ಟೆಯಲ್ಲಿ ಪ್ರತಿ ಕ್ವಿಂಟಲ್‌ಗೆ ₹6,000ದಿಂದ ₹8,350 ಬೆಲೆ ಇದೆ. 

ಬಳ್ಳಾರಿ, ಚಿತ್ರದುರ್ಗ, ಗದಗ, ಚಾಮರಾಜನಗರ, ರಾಯಚೂರು, ಮೈಸೂರು ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೂರ್ಯಕಾಂತಿ ಬೆಳೆಯಲಾಗುತ್ತಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಪ್ರತಿ ಕ್ವಿಂಟಲ್‌ಗೆ ₹1,509ರಿಂದ ₹5,779 ಧಾರಣೆ ಇದೆ.  

ADVERTISEMENT

ಮಾರುಕಟ್ಟೆಯಲ್ಲಿ ಬೆಲೆ ಕುಸಿದಿದ್ದರೂ ಹೆಸರುಕಾಳು ಮತ್ತು ಸೂರ್ಯಕಾಂತಿ ಖರೀದಿಗೆ ಬೆಂಬಲ ಬೆಲೆ ಕೇಂದ್ರ ತೆರೆದಿರಲಿಲ್ಲ. ಇದರಿಂದ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದರು. ಹಾಗಾಗಿ, ಬೆಳೆಗಾರರಿಗೆ ಅನುಕೂಲ ಕಲ್ಪಿಸಲು ಬೆಂಬಲ ಬೆಲೆ ಯೋಜನೆಯಡಿ ಖರೀದಿಗೆ ಅನುಮತಿ ನೀಡುವಂತೆ ರಾಜ್ಯ ಸರ್ಕಾರವು ಸಲ್ಲಿಸಿದ್ದ ಪ್ರಸ್ತಾವಕ್ಕೆ ಕೇಂದ್ರವು ಒಪ್ಪಿಗೆ ನೀಡಿದೆ.

‘ಕೇಂದ್ರವು ಒಪ್ಪಿಗೆ ನೀಡಿರುವುದರಿಂದ ಖರೀದಿ ಏಜೆನ್ಸಿ ನೇಮಕ ಮಾಡಿ ಆದೇಶ ಹೊರಡಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ಹಾಗಾಗಿ, ರೈತರು ಆತಂಕಪಡುವ ಅಗತ್ಯವಿಲ್ಲ. ಖರೀದಿ ಕೇಂದ್ರಗಳನ್ನು ಆರಂಭಿಸುತ್ತಿದ್ದಂತೆ ಹೆಸರು ನೋಂದಣಿ ಮಾಡಿಸಿಕೊಂಡು ಬೆಂಬಲ ಬೆಲೆಯಲ್ಲಿ ಮಾರಾಟ ಮಾಡಬಹುದಾಗಿದೆ’ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.

‘ಹೆಸರುಕಾಳು ಮತ್ತು ಸೂರ್ಯಕಾಂತಿ ಬೆಳೆಯುವ ಪ್ರಮುಖ ಜಿಲ್ಲೆಗಳ ಜಿಲ್ಲಾಧಿಕಾರಿ ಅವರು ಟಾಸ್ಕ್‌ಪೋರ್ಸ್ ಸಭೆ ನಡೆಸಿ ಅಗತ್ಯ ಇರುವ ಕಡೆ ಖರೀದಿ ಕೇಂದ್ರ ತೆರೆದು ನೋಂದಣಿ ಆರಂಭಿಸಲಿದ್ದಾರೆ. ನಂತರ ಖರೀದಿ ಪ್ರಕ್ರಿಯೆ ಪ್ರಾರಂಭವಾಗಲಿದೆ. ವಿಳಂಬ ಮಾಡದೆ ಟಾಸ್ಕ್‌ಫೋರ್ಸ್ ಸಭೆ ನಡೆಸಲು ಜಿಲ್ಲಾಧಿಕಾರಿಗಳಿಗೆ ಸೂಚನೆಯನ್ನೂ ನೀಡಲಾಗಿದೆ’ ಎಂದು ಸಚಿವರು ವಿವರಿಸಿದ್ದಾರೆ.

ಬೆಲೆ ಕುಸಿದಿರುವ ಬಗ್ಗೆ ರೈತರ ಆತಂಕಪಡುವ ಅಗತ್ಯವಿಲ್ಲ. ತ್ವರಿತವಾಗಿ ನೋಂದಣಿ ಹಾಗೂ ಖರೀದಿ ಪ್ರಕ್ರಿಯೆ ಆರಂಭವಾಗಲಿದೆ.
–ಶಿವಾನಂದ ಪಾಟೀಲ, ಕೃಷಿ ಮಾರುಕಟ್ಟೆ ಸಚಿವ 

ಎಷ್ಟು ಖರೀದಿ?

ಕೇಂದ್ರ ಸರ್ಕಾರವು 22215 ಟನ್ ಹೆಸರುಕಾಳು ಹಾಗೂ 13210  ಟನ್ ಸೂರ್ಯಕಾಂತಿ ಖರೀದಿಗೆ ಒಪ್ಪಿಗೆ ನೀಡಿದೆ. ಎಫ್‌ಎಕ್ಯೂ ಗುಣಮಟ್ಟದ ಪ್ರತಿ ಕ್ವಿಂಟಲ್‌ ಹೆಸರುಕಾಳಿಗೆ ₹8682 ಹಾಗೂ ಸೂರ್ಯಕಾಂತಿಗೆ ₹7280 ಬೆಂಬಲ ಬೆಲೆ ನಿಗದಿಪಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.