ಬೆಂಗಳೂರು: ಕರ್ನಾಟಕ ವಾಣಿಜ್ಯೋದ್ಯಮ ಮಹಾಸಂಘದ (ಎಫ್‌ಕೆಸಿಸಿಐ) ಕೌಶಲ್ಯ ಶ್ರೇಷ್ಠತಾ ಕೇಂದ್ರಕ್ಕೆ ಗುರುವಾರ ಇಲ್ಲಿ ಶಿಲಾನ್ಯಾಸ ನೆರವೇರಿಸಲಾಯಿತು.
‘ಈ ಕೇಂದ್ರಕ್ಕೆ ಅಗತ್ಯ ಇರುವ ನೆರವನ್ನು ಒದಗಿಸುವುದಾಗಿ ಕೌಶಲ್ಯಾಭಿವೃದ್ಧಿ ಸಚಿವ ಆರ್. ವಿ. ದೇಶಪಾಂಡೆ ಅವರು ಭರವಸೆ ನೀಡಿದರು. ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರ ಅನುಪಸ್ಥಿತಿಯಲ್ಲಿ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡುತ್ತಿದ್ದರು.
‘ಅತ್ಯಾಧುನಿಕ ತಂತ್ರಜ್ಞಾನದಿಂದ ಉದ್ಯೋಗ ಅವಕಾಶಗಳು ಕಡಿಮೆಯಾಗುವ ಭೀತಿ ವ್ಯಕ್ತವಾಗುತ್ತಿದೆ. ಹೊಸ ತಂತ್ರಜ್ಞಾನದ ಕೌಶಲ್ಯ ಕರಗತ ಮಾಡಿಕೊಂಡರೆ ಉದ್ಯೋಗ ಅವಕಾಶಗಳು ಹೆಚ್ಚಲಿವೆ’ ಎಂದರು.
‘ಸರಕುಗಳ ತಯಾರಿಕೆ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ, ಪರಸ್ಪರ ಸಂಪರ್ಕ ಸಾಧಿಸುವ ಡಿಜಿಟಲ್ ಸಾಧನ (ಐಒಟಿ), ರೋಬೊ ತಂತ್ರಜ್ಞಾನ ಬಳಕೆಗೆ ಸಂಬಂಧಿಸಿದ ನಾಲ್ಕನೇ ಕೈಗಾರಿಕಾ ಕ್ರಾಂತಿಯು (4.0) ತ್ವರಿತವಾಗಿ ನಡೆಯುತ್ತಿದೆ. ಇದಕ್ಕೆ ಪೂರಕವಾದ ಕೌಶಲ್ಯ ಅಭಿವೃದ್ಧಿಪಡಿಸುವುದು ಈ ಕೇಂದ್ರದ ಉದ್ದೇಶವಾಗಿದೆ. ದಾಬಸ್‌ಪೇಟೆ ಬಳಿ 1.6 ಎಕರೆ ಪ್ರದೇಶದಲ್ಲಿ ಈ ಕೇಂದ್ರ ಅಸ್ತಿತ್ವಕ್ಕೆ ಬರಲಿದೆ.
ವಿದೇಶಿ ಸಂಸ್ಥೆಗಳ ಸಹಯೋಗದಲ್ಲಿ ಇಲ್ಲಿ ಕೌಶಲ್ಯ ವೃದ್ಧಿ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು’ ಎಂದು ಎಫ್‌ಕೆಸಿಸಿಐ ಅಧ್ಯಕ್ಷ ಕೆ. ರವಿ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.