ADVERTISEMENT

Share Market | ಅದಾನಿ ಪ್ರಕರಣ: ಸೆನ್ಸೆಕ್ಸ್, ನಿಫ್ಟಿ ಕುಸಿತ

ಪಿಟಿಐ
Published 21 ನವೆಂಬರ್ 2024, 13:58 IST
Last Updated 21 ನವೆಂಬರ್ 2024, 13:58 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಮುಂಬೈ: ಗೌತಮ್‌ ಅದಾನಿ ಪ್ರಕರಣವು ದೇಶದ ಷೇರುಪೇಟೆ ಮೇಲೂ ಪರಿಣಾಮ ಬೀರಿದ್ದು, ಗುರುವಾರದ ವಹಿವಾಟಿನಲ್ಲಿ ಸೂಚ್ಯಂಕಗಳು ಕುಸಿತ ಕಂಡಿವೆ. 

ವಿದೇಶಿ ಬಂಡವಾಳದ ಹೊರಹರಿವು ಹೆಚ್ಚಳ ಕೂಡ ಮಾರುಕಟ್ಟೆಯಲ್ಲಿ ನಕಾರಾತ್ಮಕ ವಹಿವಾಟಿಗೆ ಕಾರಣವಾಯಿತು. ಹೂಡಿಕೆದಾರರ ಸಂಪತ್ತು ₹5.27 ಲಕ್ಷ ಕೋಟಿ ಕರಗಿದೆ.

ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್‌ 422 ಅಂಶ ಕುಸಿತ ಕಂಡು 77,155 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿತು. ವಹಿವಾಟಿನ ಒಂದು ಸಂದರ್ಭದಲ್ಲಿ 775 ಅಂಶ ಇಳಿಕೆ ಕಂಡಿತ್ತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 168 ಅಂಶ ಇಳಿಕೆ ಕಂಡು, 23,349 ಅಂಶಗಳಲ್ಲಿ ಸ್ಥಿರಗೊಂಡಿತು.

ADVERTISEMENT

ಸೆನ್ಸೆಕ್ಸ್‌ ಗುಚ್ಛದಲ್ಲಿನ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ, ಎನ್‌ಟಿಪಿಸಿ, ಐಟಿಸಿ, ಏಷ್ಯನ್‌ ಪೇಂಟ್ಸ್‌, ಬಜಾಜ್‌ ಫೈನಾನ್ಸ್‌ ಷೇರಿನ ಮೌಲ್ಯದಲ್ಲಿ ಇಳಿಕೆಯಾಗಿದೆ. ಪವರ್ ಗ್ರಿಡ್‌, ಅಲ್ಟ್ರಾಟೆಕ್‌ ಸಿಮೆಂಟ್‌, ಎಚ್‌ಸಿಎಲ್‌ ಟೆಕ್ನಾಲಜೀಸ್‌, ಎಕ್ಸಿಸ್‌ ಬ್ಯಾಂಕ್‌ ಷೇರಿನ ಮೌಲ್ಯದಲ್ಲಿ ಏರಿಕೆಯಾಗಿದೆ.

ಮಂಗಳವಾರದ ವಹಿವಾಟಿನಲ್ಲಿ ವಿದೇಶಿ ಸಾಂಸ್ಥಿಕ ಹೂಡಿಕೆದಾರರು ₹3,411 ಕೋಟಿ ಬಂಡವಾಳವನ್ನು ಹಿಂಪಡೆದಿದ್ದಾರೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್‌ ಕಚ್ಚಾ ತೈಲದ ಬೆಲೆಯು ಶೇ 1.13ರಷ್ಟು ಏರಿಕೆಯಾಗಿದ್ದು, ಪ್ರತಿ ಬ್ಯಾರೆಲ್‌ಗೆ 73.71 ಡಾಲರ್‌ ಆಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.