ಮೈಸೂರು: ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಗರದಲ್ಲಿ ಸೆಸ್ಕ್ ವತಿಯಿಂದ ಮಾಡಲಾಗಿರುವ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ರಾತ್ರಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಮಹೋತ್ಸವದ ಪ್ರಮುಖ ಆಕರ್ಷಣೆಯಾದ ವಿಜಯದಶಮಿ ಮೆರವಣಿಗೆಯ ಮುನ್ನಾದಿನ ಪ್ರವಾಸೋದ್ಯಮ ಇಲಾಖೆಯ ಅಂಬಾರಿ ಬಸ್‌ನಲ್ಲಿ ಸಂಚರಿಸಿ ಅವರು ವಿದ್ಯುತ್ ದೀಪಾಲಂಕಾರ ವೀಕ್ಷಿಸಿದರು.
ಇಂಧನ ಸಚಿವ ಕೆ.ಜೆ ಜಾರ್ಜ್, ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ ಮಹದೇವಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಅಂಗವಿಕಲರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ, ಉನ್ನತ ಶಿಕ್ಷಣ ಸಚಿವ ಎಂ. ಸಿ ಸುಧಾಕರ್, ಚಾಮುಂಡೇಶ್ವರಿ ವಿದ್ಯುತ್ ನಿಗಮ ನಿಯಮಿತದ ಅಧ್ಯಕ್ಷ ಎ. ಬಿ.ರಮೇಶ್ ಬಂಡಿಸಿದ್ದೇಗೌಡ, ಗುಂಡ್ಲುಪೇಟೆ ಕ್ಷೇತ್ರದ ಶಾಸಕ ಎಚ್.ಎಂ. ಗಣೇಶ್ ಪ್ರಸಾದ್, ಮುಡಾ ಅಧ್ಯಕ್ಷ ಕೆ. ಮರೀಗೌಡ ಹಾಗೂ ಅಧಿಕಾರಿಗಳೊಂದಿಗೆ ನಗರ ಪ್ರದಕ್ಷಿಣೆ ಹಾಕಿದರು.
ಅಂಬಾರಿ ಬಸ್‌ನಲ್ಲಿಯೇ ಕುಳಿತು, ಬನ್ನಿಮಂಟಪದಲ್ಲಿ ನಡೆದ ಡ್ರೋನ್ ಶೋ ವೀಕ್ಷಿಸಿದರು.
ರಾಮಸ್ವಾಮಿ ವೃತ್ತದಿಂದ ಆರಂಭವಾದ ದೀಪಾಲಂಕಾರ ವೀಕ್ಷಣೆಯು ಬಸವೇಶ್ವರ ವೃತ್ತ, ಜೆಎಸ್ಎಸ್ ಮಹಾವಿದ್ಯಾಪೀಠ ವೃತ್ತ, ಹಾರ್ಡಿಂಜ್ ಸರ್ಕಲ್, ಕೆ.ಆರ್.ಸರ್ಕಲ್, ಆಯುರ್ವೇದ ಕಾಲೇಜು ವೃತ್ತ, ಹೈವೆ ವೃತ್ತದ ಮೂಲಕ ಸಾಗಿ ಎಲ್ಐಸಿ ವೃತ್ತದಲ್ಲಿ ಮುಕ್ತಾಯಗೊಂಡಿತು.
ತಮ್ಮ ಜೊತೆಗಿದ್ದ ಸಚಿವರಿಗೆ ಮೈಸೂರಿನ ಅರಮನೆ ಹಾಗೂ ಮಾರ್ಗ ಮಧ್ಯದ ಸ್ಥಳಗಳ ಬಗ್ಗೆ ಸ್ವತಃ ಸಿದ್ದರಾಮಯ್ಯ ಅವರೇ ವಿವರಿಸಿ, ಅದರ ಹಿನ್ನೆಲೆ ಹಾಗೂ ಮಹತ್ವವನ್ನು ತಿಳಿಸಿಕೊಟ್ಟಿದ್ದು ವಿಶೇಷವಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.