ADVERTISEMENT

ಹೊರಗುತ್ತಿಗೆ ನೌಕರರನ್ನು ಕಾಯಂಗೊಳಿಸಲು ಆಗ್ರಹ

ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪ.ಪಂ. ನೌಕರರ ಸಂಘದಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2023, 14:48 IST
Last Updated 16 ನವೆಂಬರ್ 2023, 14:48 IST
ಬಾಗಲಕೋಟೆಯಲ್ಲಿ ಬುಧವಾರ ಹೊರಗುತ್ತಿಗೆ ನೌಕರರನ್ನು ಕಾಯಂಗೊಳಿಸಬೇಕು ಎಂದು ಆಗ್ರಹಿಸಿ ಹೊರಗುತ್ತಿಗೆ ನೌಕರರು ಪ್ರತಿಭಟನೆ ಮಾಡಿದರು
ಬಾಗಲಕೋಟೆಯಲ್ಲಿ ಬುಧವಾರ ಹೊರಗುತ್ತಿಗೆ ನೌಕರರನ್ನು ಕಾಯಂಗೊಳಿಸಬೇಕು ಎಂದು ಆಗ್ರಹಿಸಿ ಹೊರಗುತ್ತಿಗೆ ನೌಕರರು ಪ್ರತಿಭಟನೆ ಮಾಡಿದರು   

ಬಾಗಲಕೋಟೆ: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರನ್ನು ಪೌರಕಾರ್ಮಿಕರ ಮಾದಿಯಲ್ಲಿ ಕಾಯಗೊಳಿಸಬೇಕು ಎಂದು ಆಗ್ರಹಿಸಿ ಬುಧವಾರ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ನೌಕರರ ಸಂಘದಿಂದ ಜಿಲ್ಲಾಧಿಕಾರಿ ಕಚೇರಿಗೆ ಎದುರು ಪ್ರತಿಭಟನೆ ಮಾಡಲಾಯಿತು.

ಕಾಂಗ್ರೆಸ್‌ ಪಕ್ಷ ಪ್ರಣಾಳಿಕೆಯಲ್ಲಿ ಘೋಷಿಸಿರುವಂತೆ ಹೊರಗುತ್ತಿಗೆ ನೌಕರರನ್ನು ಕಾಯಂಗೊಳಿಸಲು ಕೂಡಲೇ ಮುಂದಾಗಬೇಕು ಎಂದು ಆಗ್ರಹಿಸಿದರು.

ಹೊರಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಾಹನ ಚಾಲಕರು, ನೀರು ಸರಬರಾಜು ಸಹಾಯಕರು, ಕ್ಲಿನರ್ಸ್ ಹಾಗೂ ಯುಜಿಡಿ ಕಾರ್ಮಿಕರು ಸೇರಿದಂತೆ 15 ಸಾವಿರಕ್ಕೂ ಹೆಚ್ಚು ಜನರಿದ್ದು, ಅವರನ್ನು ಕಾಯಂಗೊಳಿಸುವ ಮೂಲಕ ಸರ್ಕಾರ ಅವರಿಗೆ ಬದುಕು ಕಟ್ಟಿಕೊಡಬೇಕು ಎಂದು ಒತ್ತಾಯಿಸಿದರು.

ADVERTISEMENT

ನಗರಗಳ ಸ್ವಚ್ಛತೆ ಹಾಗೂ ಕುಡಿಯುವ ನೀರು ಸರಬರಾಜಿನಲ್ಲಿ ಹೊರಗುತ್ತಿಗೆ ನೌಕರರ ಪಾತ್ರ ಮಹತ್ವದ್ದಾಗಿದೆ. 2017ರಲ್ಲಿ ಪೌರಕಾರ್ಮಿಕರನ್ನು ನೇರ ನೇಮಕಾತಿಗೊಳಿಸಲಾಯಿತು. ಆದರೆ, ಹೊರಗುತ್ತಿಗೆ ನೌಕರರನ್ನು ಪರಿಗಣಿಸಲಿಲ್ಲ. ಪೌರಾಡಳಿತ ಕಾಯ್ದೆ ಪ್ರಕಾರ ಕಸ ಸಾಗಿಸುವ ವಾಹನ ಚಾಲಕರು, ಯುಜಿಡಿ ಕಾರ್ಮಿಕರು ಸೇರಿದಂತೆ ಅನೇಕರನ್ನು ಪೌರ ಕಾರ್ಮಿಕರು ಎಂದು ಗುರುತಿಸಲಾಗಿದೆ. ಆದರೆ, ಅಧಿಕಾರಿಗಳು ತಾರತಮ್ಯ ಮಾಡುವ ಮೂಲಕ ನಮಗೆ ಅನ್ಯಾಯ ಮಾಡಿದ್ದಾರೆ ಎಂದು ದೂರಿದರು.

ಹೊರಗುತ್ತಿಗೆ ನೌಕರರಿಗೆ ನೇರ ವೇತನ ಪಾವತಿಗೆ ಕ್ರಮಕೈಗೊಳ್ಳಲಾಗುವುದು ಎಂದು ಚುನಾವಣೆ ಸಂದರ್ಭದಲ್ಲಿ ಭರವಸೆ ನೀಡಲಾಗಿತ್ತು. ಅದನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಘಟಕದ ಅಧ್ಯಕ್ಷ ಎಸ್‌.ನಾಗರಾಜ, ಮಹಾಂತೇಶ ಗಡ್ಡಿ, ಕುಮಾರ ಮೈತ್ರಿ, ರವಿ ಗೋಳಪ್ಪನವರ, ರವಿ ಬಲಕುಂದಿ, ಯಲ್ಲಪ್ಪ ಚಲವಾದಿ, ಪರಶುರಾಮ ನಡುಲಮನಿ ಮತ್ತಿತರರು ಪಾಲ್ಗೊಂಡಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.