ಬಾದಾಮಿ: ‘ಕಳಸಾ–ಬಂಡೂರಿ ನಾಲಾ ವಿಸ್ತ್ರತ ಯೋಜನಾ ವರದಿಯನ್ನು ಕೇಂದ್ರ ಸರ್ಕಾರ ಸ್ವೀಕರಿಸಿದೆ. ಅತೀ ಶೀಘ್ರದಲ್ಲಿ ಯೋಜನೆಗೆ ಮಂಜೂರಾತಿ ದೊರೆಯಲಿದೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು.
ಬೇಲೂರ ಗ್ರಾಮದ ಅನ್ನದಾನೇಶ್ವರ ವಿದ್ಯಾಸಂಸ್ಥೆಯಲ್ಲಿ ಭಾನುವಾರ ನಡೆದ ದಿವಂಗತ ಬಿ.ಎಂ.ಹೊರಕೇರಿ ಪುತ್ಥಳಿ ಅನಾವರಣ ಸಮಾರಂಭದಲ್ಲಿ ಅವರು ಮಾತನಾಡಿದರು.
‘ಕಳಸಾ ಅರಣ್ಯ ಪ್ರದೇಶದಲ್ಲಿ ಲಕ್ಷಾಂತರ ಮರಗಳಿವೆ. ಅವುಗಳ ತೆರವಿಗೆ ಅರಣ್ಯ ಇಲಾಖೆಯಿಂದ ಅನುಮತಿ ದೊರಕಿದೆ. ಅಲ್ಲಿ ಹುಲಿ ಸಂರಕ್ಷಿತ ಪ್ರದೇಶವೂ ಇದ್ದು ಇವುಗಳ ತೆರವಿಗೆ ಕೇಂದ್ರ ಅರಣ್ಯ ಇಲಾಖೆ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿ ಚರ್ಚಿಸಲಾಗಿದೆ’ ಎಂದರು.
ಸಮಾರಂಭ ಉದ್ಘಾಟಿಸಿ ಮಾತನಾಡಿದ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ‘ಉತ್ತರ ಕರ್ನಾಟಕದ ಜನರಿಗೆ ಕುಡಿಯುವ ಮತ್ತು ಕೃಷಿಗಾಗಿ ಬಿ.ಎಂ. ಹೊರಕೇರಿ ಅವರು 1975 ರಲ್ಲಿ ಶಾಸಕರಿದ್ದಾಗಲೇ ಮಹದಾಯಿಯನ್ನು ಮಲಪ್ರಭಾ ನದಿಗೆ ಸೇರಿಸಲು ವಿಧಾನ ಸಭೆಯಲ್ಲಿ ಪ್ರಸ್ತಾಪ ಮಾಡಿದ್ದರು. ಕೇಂದ್ರ ಸರ್ಕಾರದಲ್ಲಿ ಅನೇಕ ವರ್ಷಗಳಿಂದ ಮಹದಾಯಿ-ಮಲಪ್ರಭಾ ಜೋಡಣೆ ಯೋಜನೆ ನನೆಗುದಿಗೆ ಬಿದ್ದಿದೆ. ಅರ್ಧ ಕಾಮಗಾರಿ ಮುಗಿದಿದೆ. ರಾಜ್ಯ ಸರ್ಕಾರದಲ್ಲಿ ಹಣ ಇದೆ, ಯೋಜನೆ ಆರಂಭಿಸಲು ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ಮುಂದುವರಿಸಲು ರಾಜ್ಯ ಸರ್ಕಾರ ಸಿದ್ಧವಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.