ADVERTISEMENT

ಚಾಲುಕ್ಯ ಉತ್ಸವಕ್ಕೆ ಪ್ರಸ್ತಾವ ಸಲ್ಲಿಸಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಿವಯೋಗಿ ಕಳಸದ ಸೂಚನೆ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2022, 7:07 IST
Last Updated 29 ನವೆಂಬರ್ 2022, 7:07 IST
ಬಾಗಲಕೋಟೆಯಲ್ಲಿ ಸೋಮವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಿವಯೋಗಿ ಕಳಸದ ಮಾತನಾಡಿದರು
ಬಾಗಲಕೋಟೆಯಲ್ಲಿ ಸೋಮವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಿವಯೋಗಿ ಕಳಸದ ಮಾತನಾಡಿದರು   

ಬಾಗಲಕೋಟೆ: ಜಿಲ್ಲೆಯಲ್ಲಿ ಚಾಲುಕ್ಯ ಉತ್ಸವ ಆಯೋಜಿಸಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಿವಯೋಗಿ ಕಳಸದ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ವಿವಿಧ ಇಲಾಖೆಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಪ್ರವಾಸಿಗರನ್ನು ಸೆಳೆಯಲು ಚಾಲುಕ್ಯ ಉತ್ಸವ ಒಂದು ಉತ್ತಮ ವೇದಿಕೆ. ಕೋವಿಡ್ ಕಾರಣದಿಂದ ನಿಲ್ಲಿಸಲಾಗಿತ್ತು. ಈ ವರ್ಷ ಆಯೋಜಿಸಬಹುದಾಗಿದೆ’ ಎಂದರು.

‘ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿಗೆ ಬಿತ್ತನೆ ಬೀಜದ ಕೊರತೆ ಇಲ್ಲ. ಅಕ್ಟೋಬರ್‌ನಿಂದ ಇಲ್ಲಿವರೆಗೆ 79,488 ಮೆಟ್ರಿಕ್ ಟನ್ ರಸಗೊಬ್ಬರ ಹಂಚಿಕೆಯಾಗಿದೆ. ರಸಗೊಬ್ಬರದ ಕೊರತೆ ಇಲ್ಲ’ ಎಂದು ಅಧಿಕಾರಿಗಳು ತಿಳಿಸಿದರು.

ADVERTISEMENT

‘ಕಂದಾಯ ಹಾಗೂ ಇತರೆ ಇಲಾಖೆಗಳ ಸಹಕಾರದೊಂದಿಗೆ ಶೇ73ರಷ್ಟು ಫಲಾನುಭವಿಗಳ ಇ–ಕೆವೈಸಿ ಮಾಡಿಸಲಾಗಿದೆ. ಮುಂದಿನ ಸಭೆಯೊಳಗಾಗಿ ಶೇ100ರಷ್ಟು ಮಾಡಿಸಲಾಗುವುದು’ ಎಂದು ಜಿಲ್ಲಾ ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ ಮಾಹಿತಿ ನೀಡಿದರು.

ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಡಾ.ಶಶಿಧರ ನಾಡಗೌಡ ಮಾತನಾಡಿ, ‘ಜಿಲ್ಲೆಯಲ್ಲಿ ಚರ್ಮಗಂಟು ರೋಗ ನಿಯಂತ್ರಣಕ್ಕಾಗಿ ಈಗಾಗಲೇ ಲಸಿಕಾ ಕಾರ್ಯ ಕೈಗೊಳ್ಳಲಾಗುತ್ತಿದೆ. ಜಿಲ್ಲಾ ಪಂಚಾಯಿತಿ ಅನುದಾನದಡಿ ಔಷಧ ಖರೀದಿಸಿ, ಚಿಕಿತ್ಸೆ ನೀಡಲಾಗುತ್ತಿದೆ’ ಎಂದರು.

‘ಗ್ರಾಮ ಪಂಚಾಯಿತಿಗಳ ಮೂಲಕ ಪ್ರತಿಯೊಂದು ಹಳ್ಳಿಯಲ್ಲೂ ಫಾಗಿಂಗ್ ಮತ್ತು ಸ್ಯಾನಿಟೈಸೇಷನ್ ಮಾಡಲಾಗುತ್ತಿದೆ. ರೋಗ ನಿಯಂತ್ರಣದಲ್ಲಿದೆ. ಮರಣ ಹೊಂದಿದ ಜಾನುವಾರುಗಳಿಗೆ ಸರ್ಕಾರ ನಿಗದಿಪಡಿಸಿದ ಪರಿಹಾರ ಧನ ನೀಡಲು ಕ್ರಮಕೈಗೊಳ್ಳಲಾಗುತ್ತಿದೆ’ ಎಂದು ಹೇಳಿದರು.

ಅರಣ್ಯ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ,ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸಲಾಯಿತು.

ಜಿಲ್ಲಾಧಿಕಾರಿ ಪಿ. ಸುನೀಲ್‌ಕುಮಾರ್ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಟಿ. ಭೂಬಾಲನ್, ಕೃಷ್ಣಾ ಮೆಲ್ದಂಡೆ ಯೋಜನಾ ಪ್ರಾಧಿಕಾರದ ವ್ಯವಸ್ಥಾಪಕ ನಿರ್ದೇಶಕ ರಾಹುಲ್ ಪಾಂಡೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.