ಬಳ್ಳಾರಿ: ಜೂನ್‌ನಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ ಆಚರಿಸಲಾಗುತ್ತಿದ್ದು, ಸೊಳ್ಳೆಗಳಿಂದ ಹರಡುವ ರೋಗಗಳ ನಿಯಂತ್ರಣಕ್ಕೆ ಸಮುದಾಯ ಮತ್ತು ಇತರ ಇಲಾಖೆಗಳ ಸಮನ್ವಯದೊಂದಿಗೆ ಸೂಕ್ತ, ನಿರ್ದಿಷ್ಟ ನಿಯಂತ್ರಣಾ ಕ್ರಮ ಜಾರಿಗೊಳಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ವೈದ್ಯಾಧಿಕಾರಿಗಳಿಗೆ ಸೂಚಿಸಿದರು.
ಮಲೇರಿಯಾ ವಿರೋಧಿ ಮಾಸಾಚರಣೆ ಅಂಗವಾಗಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಜೂನ್‌ನಲ್ಲಿ ಜಿಲ್ಲೆಯಾದ್ಯಂತ ಮಳೆಯಾಗುತ್ತಿದೆ. ನಿಂತ ನೀರಿನ ತಾಣಗಳಲ್ಲಿ ಸೊಳ್ಳೆ ಸಾಂದ್ರತೆ ಹೆಚ್ಚಾಗುವುದರಿಂದ ಸಾಂಕ್ರಾಮಿಕ ರೋಗಗಳು ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಈ ಬಗ್ಗೆ ಅರಿವು ಮೂಡಿಸಬೇಕು’ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು ಮಾತನಾಡಿ, ‘ಮಲೇರಿಯಾ ವಿರೋಧಿ ಮಾಸಾಚರಣೆಯ ಅಂಗವಾಗಿ ಸಮುದಾಯಕ್ಕೆ ಜಾಗೃತಿ ಮೂಡಿಸಲು ಆರೋಗ್ಯ ಕೇಂದ್ರದ ಎಲ್ಲಾ ಹಂತಗಳಲ್ಲಿ ಐಇಸಿ, ಬಿಸಿಸಿ ಗುಂಪುಸಭೆ, ಅಡ್ವಕೆಸಿ ಕಾರ್ಯಾಗಾರ, ಮಾಧ್ಯಮಗಳ ಮುಖಾಂತರ ಜಾಗೃತಿ ಮೂಡಿಸಲಾಗುತ್ತಿದೆ. ಜ್ವರ ಪ್ರಕರಣಗಳ ಶೀಘ್ರ ಪತ್ತೆ ಮತ್ತು ಸಂಪೂರ್ಣ ಚಿಕಿತ್ಸೆಯನ್ನು ನೀಡುವಲ್ಲಿ ಕಾರ್ಯೋನ್ಮುಖರಾಗುವಂತೆ ಸೂಚಿಸಲಾಗಿದೆ‘ ಎಂದರು.
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಅಬ್ದುಲ್ಲಾ ಮಾತನಾಡಿ, ‘2025ರ ವೇಳೆಗೆ ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆ ಜಿಲ್ಲೆಯಲ್ಲಿ ಮಲೇರಿಯಾ ರೋಗದ ನಿವಾರಣಾ ಗುರಿಯನ್ನು ಸಾಧಿಸುವ ಉದ್ದೇಶದಿಂದ ಎಲ್ಲಾ ಹಂತಗಳಲ್ಲಿಯೂ ಪರಿಣಾಮಕಾರಿ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಿದ್ದು, ಪ್ರಸ್ತುತ ಜಿಲ್ಲೆಯು ಮಲೇರಿಯಾ ನಿವಾರಣಾ ಹಂತವನ್ನು ತಲುಪಿದೆ’ ಎಂದು ತಿಳಿಸಿದರು.
‘2025ರ ವೇಳೆಗೆ ಮಲೇರಿಯಾ ಮುಕ್ತ ಜಿಲ್ಲೆಯನ್ನಾಗಿಸುವ ನಿಟ್ಟಿನಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆಯ ಮಹತ್ವದ ಬಗ್ಗೆ ಸಮುದಾಯಕ್ಕೆ ಜಾಗೃತಿ ಮೂಡಿಸಲಾಗುವುದು’ ಎಂದರು.
‘ಗ್ರಾಮ, ಪಟ್ಟಣ, ನಗರ ಪ್ರದೇಶಗಳಿಗೆ ವಲಸೆ ಬರುವವರು ಹಾಗೂ ವಲಸೆಯಿಂದ ಹಿಂದುರಿಗಿ ಬರುವವರನ್ನು ಮಲೇರಿಯಾ ತಪಾಸಣೆಗೆ ಒಳಪಡಿಸಲಾಗುವುದು, ಮಲೇರಿಯಾ ದೃಢಪಟ್ಟವರಿಗೆ ಚಿಕಿತ್ಸೆ ನೀಡುವುದು, ಸ್ವಯಂ ರಕ್ಷಣಾ ವಿಧಾನ ಸೇರಿದಂತೆ ಇತರೆ ನಿಯಂತ್ರಣಾ ವಿಧಾನಗಳನ್ನು ಅನುಸರಿಸುವುದು’ ಅಗತ್ಯ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಡಾ.ಮರಿಯಂಬಿ, ಡಾ.ಪೂರ್ಣಿಮಾ ಕಟ್ಟಿಮನಿ, ಡಾ.ವೀರೇಂದ್ರ, ಡಾ.ಹನುಮಂತಪ್ಪ, ಜಿಲ್ಲೆಯ ಎಲ್ಲಾ ತಾಲೂಕು ಆರೋಗ್ಯಾಧಿಕಾರಿಗಳು, ವ್ಶೆದ್ಯಾಧಿಕಾರಿಗಳು, ಜಿಲ್ಲಾ ವಿಬಿಡಿಸಿ ಸಮಾಲೋಚಕ ಪ್ರತಾಪ್.ಎಚ್., ಜಿಲ್ಲಾ ಆರೋಗ್ಯ ಶಿಕ್ಷ್ಷಣಾಧಿಕಾರಿ ಈಶ್ವರ ದಾಸಪ್ಪನವರ ಸೇರಿದಂತೆ ಇತರೆ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಸಿಬ್ಬಂದಿಗಳು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.