ADVERTISEMENT

ಬಳ್ಳಾರಿ | ತೈಲ ತೆರಿಗೆ ಏರಿಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ

ಕತ್ತೆ, ಎತ್ತಿನ ಗಾಡಿಯೊಂದಿಗೆ ಅಣಕ

​ಪ್ರಜಾವಾಣಿ ವಾರ್ತೆ
Published 18 ಜೂನ್ 2024, 16:21 IST
Last Updated 18 ಜೂನ್ 2024, 16:21 IST
ತೈಲದ ಮೇಲಿನ ತೆರಿಗೆ ಏರಿಸಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. 
ತೈಲದ ಮೇಲಿನ ತೆರಿಗೆ ಏರಿಸಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.    

ಬಳ್ಳಾರಿ: ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಏರಿಸಿದ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಬಿಜೆಪಿ ಜಿಲ್ಲಾ ಘಟಕದ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ನಗರದ ಈಡಿಗ ಹಾಸ್ಟೆಲ್ ಬಳಿ ಜಮಾಯಿಸಿದ ನೂರಾರು ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ನಾನಾ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕತ್ತೆಗಳಿಗೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಭಾವಚಿತ್ರ ಅಂಟಿಸಿ,  ದ್ವಿಚಕ್ರ ವಾಹನಗಳ ಶವಯಾತ್ರೆ ಮಾಡಿದರು. ಎತ್ತಿನ ಬಂಡಿಗಳ ಮೆರವಣಿಗೆ ನಡೆಸಲಾಯಿತು.

ದ್ವಿಚಕ್ರ ವಾಹನ ಹಾಗೂ ಎತ್ತಿನ ಬಂಡಿಗಳೊಂದಿಗೆ ಗಡಿಗಿ ಚೆನ್ನಪ್ಪ (ರಾಯಲ್‌) ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಮಾನವ ಸರಪಳಿ ರಚಿಸಿ ರಾಜ್ಯ ಸರ್ಕಾರದ ವಿರುದ್ಧ ನಾನಾ ಘೋಷಣೆಗಳನ್ನು ಕೂಗಿದರು. 

ADVERTISEMENT

ಮಾನವ ಸರಪಳಿ ನಿರ್ಮಿಸಲು ಮುಂದಾದಾಗ ಪೋಲೀಸ್ ಹಾಗೂ ಪಾಲಿಕೆ ಸದಸ್ಯ ಹನುಮಂತ ಹಾಗೂ ಇತರರ ಮಧ್ಯೆ ವಾಗ್ವಾದ ನಡೆಯಿತು. ನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಕಾರ್ಯಕರ್ತರು, ಮುಖಂಡರು ನಾನಾ ಬೇಡಿಕೆಗಳ ಮನವಿ ಪತ್ರವನ್ನು ಅಧಿಕಾರಿಗಳ ಮೂಲಕ ಸರ್ಕಾರಕ್ಕೆ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಅನಿಲ್ ಕುಮಾರ್ ಮೊಕಾ, ‘ಸಿ.ಎಂ.ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿಗಳನ್ನು ಮುಂದುವರೆಸಲು ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಹೆಚ್ಚಿಸಿದ್ದಾರೆ. ಇದರೆ ಜತೆಗೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ, ಬಡ ಜನರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ. ಸರ್ಕಾರದ ಈ ಕ್ರಮ ಸರಿಯಲ್ಲ, ಸರ್ಕಾರ ಕೂಡಲೇ ಅಗತ್ಯ ವಸ್ತುಗಳ ಬೆಲೆ ಇಳಿಸಬೇಕು, ನಿರ್ಲಕ್ಷ್ಯ ವಹಿಸಿದರೆ ಪ್ರತಿಭಟನೆ ಉಗ್ರ ಸ್ವರೂಪ ತಾಳಲಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿರುಗುಪ್ಪ ಮಾಜಿ ಶಾಸಕ ಎಂ.ಎಸ್.ಸೋಮಲಿಂಗಪ್ಪ, ಯುವ ಘಟಕದ ಜಿಲ್ಲಾ ಅಧ್ಯಕ್ಷ ಎಂ.ಎಸ್.ಸಿದ್ದಪ್ಪ, ರೈತ ಮೋರ್ಚಾ ಅಧ್ಯಕ್ಷ ಐನಾಥ್ ರೆಡ್ಡಿ, ಪಾಲಿಕೆ ಸದಸ್ಯ ಶ್ರೀನಿವಾಸ್, ಹನುಮಂತ, ಸುರೇಖಾ ಎಸ್.ಮಲ್ಲನಗೌಡ, ಮಹಿಳಾ ಘಟಕದ ಸುಮಾ ರೆಡ್ಡಿ, ಸುಗುಣ, ರಾಜ್ಯ ಕಾರ್ಯಕಾರಿ ಸದಸ್ಯೆ ವಿಜಯಲಕ್ಷ್ಮಿ, ಕೆ.ರಾಮಲಿಂಗಪ್ಪ, ರಾಮಾಂಜಿನಿ, ಮಲ್ಲನಗೌಡ, ಡಾ.ಮಹಿಪಾಲ, ವಿರೂಪಾಕ್ಷಗೌಡ, ಅಡವಿಸ್ವಾಮಿ, ಕೆ.ಮಲ್ಲೇಶ್‌ ಮತ್ತಿತರರು ಇದ್ದರು. 

‘ಗ್ಯಾರಂಟಿ ಹೆಸರಲ್ಲಿ ಜನರಿಗೆ ವಂಚನೆ’

ಹೊಸಪೇಟೆ (ವಿಜಯನಗರ): ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಬಿಜೆಪಿ ಜಿಲ್ಲಾ ಸಮಿತಿಯ ಮುಖಂಡರು ಹಾಗೂ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಬೆಳಿಗ್ಗೆ ಪಟೇಲ್ ನಗರದಲ್ಲಿನ ಜಿಲ್ಲಾ ಬಿಜೆಪಿ ಕಚೇರಿಯಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಗಾಂಧಿನಗರದ ಮೂಲಕ ಸಾಗಿ ಅಂಬೇಡ್ಕರ್ ವೃತ್ತ ಬಳಸಿಕೊಂಡು ತಾಲ್ಲೂಕು ಕಚೇರಿಯವರೆಗೆ ನಡೆಸಿದರು.

ಮೆರವಣಿಗೆಯಲ್ಲಿ ಎತ್ತಿನ ಬಂಡಿಯಲ್ಲಿ ಮತ್ತು ತಳ್ಳುವ ಗಾಡಿಯಲ್ಲಿ ದ್ವಿಚಕ್ರ ವಾಹನಗಳನ್ನು ಮೆರವಣಿಗೆ ಮಾಡುವುದರ ಮೂಲಕ ಪ್ರತಿಭಟನೆ ನಡೆಸಿದರೆ, ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದರು.

ಹಿಂದೆ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ಅವರು ತೈಲ ಬೆಲೆ ಏರಿಕೆ ಖಂಡಿಸಿ ಹೇಳಿದ್ದ ಹೇಳಿಕೆಯನ್ನು ಮೈಕ್ ಮೂಲಕ ಮಿಮಿಕ್ರಿ ಧ್ವನಿ ಹೊರಡಿಸಿ, ಸಿದ್ದರಾಮಯ್ಯ ಅವರ ವಿರುದ್ಧ ಘೋಷಣೆ ಕೂಗಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಚೆನ್ನಬಸವನಗೌಡ ಪಾಟೀಲ್ ಮಾತನಾಡಿ, ರಾಜ್ಯದ ಜನರಿಗೆ ನೀಡಿದ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲಾಗದೆ ಸಂಪೂರ್ಣ ವಿಫಲವಾಗಿದೆ. ಈಗ ತೈಲ ಬೆಲೆ ಹೆಚ್ಚಳ ಮಾಡಿ ರಾಜ್ಯದ ಜನರಿಗೆ ವಂಚಿಸುತ್ತಿದ್ದಾರೆ ಎಂದು ಆರೋಪಿಸಿದರು.

ಅಲ್ಲದೆ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆಯಿಂದ ನಿತ್ಯದ ಬಳಕೆಯ ಆಹಾರ ಪದಾರ್ಥ, ತರಕಾರಿ ಸೇರಿದಂತೆ ಇತರೆ ವಸ್ತುಗಳ ಬೆಲೆ ಮತ್ತು ಪ್ರಯಾಣ ದರ ಹೆಚ್ಚಾಗಿ ಜನಸಾಮಾನ್ಯರಿಗೆ ಜೀವನ ನಡೆಸುವುದು ಕಷ್ಟಕರವಾಗಿದೆ. ಆದ್ದರಿಂದ ಕೂಡಲೇ ತೈಲ ಬೆಲೆ ಏರಿಕೆ ಹಿಂಪಡೆಯಬೇಕೆಂದು ಒತ್ತಾಯಿಸಿದರು.

ನಂತರ ತಹಶೀಲ್ದಾರ್ ವಿಶ್ವಜಿತ್‌ ಮೆಹತಾ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಸಿದರು. ರಾಜ್ಯ ಎಸ್‍ಟಿ ಘಟಕದ ಅಧ್ಯಕ್ಷ ಬಂಗಾರು ಹನುಮಂತ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಕೆ.ಎಸ್.ರಾಘವೇಂದ್ರ, ಮುಖಂಡರಾದ ಸಂಜೀವ ರೆಡ್ಡಿ, ಓದೋ ಗಂಗಪ್ಪ, ನಂಜನಗೌಡ, ಸಾಲಿಸಿದ್ದಯ್ಯಸ್ವಾಮಿ ಸೇರಿದಂತೆ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಕೊಟ್ಟು ಕಸಿಯುತ್ತಿರುವ ಸರ್ಕಾರ: ಆರೋಪ

ಬಳ್ಳಾರಿ: ‘ಗ್ಯಾರಂಟಿಗಳ ಮೂಲಕ ಜನಸಾಮಾನ್ಯರ ಬದುಕು ಹಸನು ಮಾಡುತ್ತೇವೆ ಎಂದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಈಗ ಅದೇ ಜನರ ಮೇಲೆ ತೆರಿಗೆಯ ಭಾರ ಹೊರಿಸುತ್ತಿದೆ. ಒಂದು ಕಡೆ ಕೊಟ್ಟು ಇನ್ನೊಂದು ಕಡೆ ಕಸಿದುಕೊಳ್ಳುವ ರಾಜ್ಯ ಸರ್ಕಾರದ ಈ ನೀತಿಯ ವಿರುದ್ಧ ಜನಸಾಮಾನ್ಯರು ಧ್ವನಿ ಎತ್ತಬೇಕು‘ ಎಂದು ಎಸ್‌ಯುಸಿಐ ಕಮ್ಯುನಿಸ್ಟ್‌ ಪಕ್ಷದ ಜಿಲ್ಲಾ ಸಮಿತಿ ಸದಸ್ಯ ಎ ದೇವದಾಸ್‌ ಹೇಳಿದರು. 

ಪೆಟ್ರೋಲ್‌ ಮತ್ತು ಡಿಸೇಲ್ ಮೇಲಿನ ತೆರಿಗೆ ಹೆಚ್ಳಳ ಮಾಡಿರುವ ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಎಸ್‌ಯುಸಿಐ ಸಂಘಟನೆ ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿತು. 

ಈ ವೇಳೆ ಮಾತನಾಡಿದ ಅವರು ‘ಚುನಾವಣೆಗಳು ಮುಗಿಯುತ್ತಿದ್ದಂತೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸೆಸ್ ಹೆಚ್ಚಳ ಮಾಡಲಾಗಿದೆ.  ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆಯನ್ನು ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷವು ತೀವ್ರವಾಗಿ ಖಂಡಿಸುತ್ತದೆ. ಪೆಟ್ರೋಲ್ಡೀಸೆಲ್ ಬೆಲೆ ಹೆಚ್ಚಳವಾಗುವುದರಿಂದ ಎಲ್ಲಾ ಸರಕು ಸಾಗಣೆ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತದೆ’ ಎಂದು ಆತಂಕ ವ್ಯಕ್ತಪಡಿಸಿದರು. 

ಜಿಲ್ಲಾ ಸಮಿತಿ ಸದಸ್ಯೆ ಎಂ.ಎನ್.ಮಂಜುಳಾ ಮಾತನಾಡಿ ‘ಈಗಾಗಲೇ ಪ್ರತಿ ಲೀಟರ್ ಬೆಲೆಯಲ್ಲಿ ಅರ್ಧದಷ್ಟು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಧಿಸಿರುವ ತೆರಿಗೆಯೇ ಇದೆ. ಲೋಕಸಭಾ ಚುನಾವಣೆಗೆ ಸ್ವಲ್ಪ ಮುಂಚೆ ಕೇಂದ್ರ ಬಿಜೆಪಿ ಸರ್ಕಾರವು ಮತದಾರರನ್ನು ಓಲೈಸಲು ₹2 ಕಡಿತ ಮಾಡಿತ್ತು. ರಷ್ಯಾ - ಉಕ್ರೇನ್ ಯುದ್ಧದ ಲಾಭ ಪಡೆದು ಭಾರತ ಸರ್ಕಾರವು ಜಾಗತಿಕ ದರಕ್ಕಿಂತ ಸುಮಾರು ಶೇ. 35ರಷ್ಟು ಕಡಿಮೆ ಬೆಲೆಗೆ ಕಚ್ಚಾ ತೈಲವನ್ನು ಖರೀದಿ ಮಾಡಿದರೂ ಅದರ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸಲಿಲ್ಲ‘ ಎಂದು ಆರೋಪಿಸಿದರು.

ಜಿಲ್ಲಾ ಸಮಿತಿ ಸದಸ್ಯ ಡಾಕ್ಟರ್ ಎನ್. ಪ್ರಮೋದ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸಮಿತಿ ಸದಸ್ಯೆ ಶಾಂತಾ ಗೋವಿಂದ್ ಹಾಗೂ ಸದಸ್ಯರಾದ ನಾಗರತ್ನ ಪಂಪಾಪತಿ ಈಶ್ವರಿ ರಾಜಾ ರವಿಕಿರಣ್ ಮುಂತಾದವರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.