ADVERTISEMENT

ಎಸ್‍ಸಿಎಸ್‍ಪಿ, ಟಿಎಸ್‍ಪಿ ಹಣ ಸಮರ್ಪಕ ಬಳಕೆಯಾಗಲಿ: ಜಿಲ್ಲಾಧಿಕಾರಿ

ವಿವಿಧ ಇಲಾಖೆಗಳಡಿಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ

​ಪ್ರಜಾವಾಣಿ ವಾರ್ತೆ
Published 30 ಜೂನ್ 2024, 6:26 IST
Last Updated 30 ಜೂನ್ 2024, 6:26 IST
2024-25ನೇ ಸಾಲಿನ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಅನುಸೂಚಿತ ಬುಡಕಟ್ಟು ಉಪಯೋಜನೆಯ ವಿವಿಧ ಇಲಾಖೆಗಳಡಿಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯುಲ್ಲಿ ಮಾತನಾಡುತ್ತಿರುವ ಜಿಲ್ಲಾಧಿಕಾರಿ 
2024-25ನೇ ಸಾಲಿನ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಅನುಸೂಚಿತ ಬುಡಕಟ್ಟು ಉಪಯೋಜನೆಯ ವಿವಿಧ ಇಲಾಖೆಗಳಡಿಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯುಲ್ಲಿ ಮಾತನಾಡುತ್ತಿರುವ ಜಿಲ್ಲಾಧಿಕಾರಿ    

ಬಳ್ಳಾರಿ: ಜಿಲ್ಲೆಯ ವಿವಿಧ ಇಲಾಖೆಗಳಡಿಯ ಕಾರ್ಯಕ್ರಮಗಳಿಗೆ ಎಸ್‍ಸಿಎಸ್‍ಪಿ ಮತ್ತು ಟಿಎಸ್‍ಪಿ ಅನುದಾನವನ್ನು ಸಮಪರ್ಕವಾಗಿ ಬಳಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

2024-25ನೇ ಸಾಲಿನ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಅನುಸೂಚಿತ ಬುಡಕಟ್ಟು ಉಪಯೋಜನೆಯ ವಿವಿಧ ಇಲಾಖೆಗಳಡಿಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯುಲ್ಲಿ ಮಾತನಾಡಿದ ಅವರು, ‘ಎಸ್‍ಸಿಎಸ್‍ಪಿ ಮತ್ತು ಟಿಎಸ್‍ಪಿ ಅನುದಾನವನ್ನು ಪರಿಶಿಷ್ಟ ಜಾತಿಯ ಮತ್ತು ಪರಿಶಿಷ್ಟ ಪಂಗಡದವರ ಅಭಿವೃದ್ಧಿಗಾಗಿ ಉಪಯೋಗಿಸುತ್ತಿದ್ದು, ಪ್ರಗತಿಯಲ್ಲಿ ಹಿನ್ನಡೆಯಾಗಬಾರದು ಮತ್ತು ಉದ್ದೇಶಿತ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು’ ಎಂದರು.

‘ಜಿಲ್ಲೆಗೆ ₹39.77 ಕೋಟಿ ಎಸ್‍ಸಿಎಸ್‍ಪಿ, ₹56.09 ಕೋಟಿ ಟಿಎಸ್‍ಪಿ ಅನುದಾನ ಬಿಡುಗಡೆಯಾಗಿದೆ. ಇದನ್ನು ಪರಿಶಿಷ್ಟರ ಅಭಿವೃದ್ಧಿಗೆ ಮೀಸಲಿಡಬೇಕು. ಯಾವುದೇ ರೀತಿಯಲ್ಲಿ ಹಣ ಪೋಲಾಗುವಂತಿಲ್ಲ‘ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ADVERTISEMENT

‘ವಿವಿಧ ಇಲಾಖೆಗಳಡಿಯ ಕಾರ್ಯಕ್ರಮಗಳ ಅನುಷ್ಠಾನದ ಪರಿಣಾಮ ಮತ್ತು ಗುಣಮಟ್ಟದ ಬಗ್ಗೆ ಸಾಮಾಜಿಕ ಪರಿಶೋಧನೆ ಮತ್ತು ಮೌಲ್ಯಮಾಪನವನ್ನು ಸಹ ಮಾಡಿಸಲಾಗುತ್ತದೆ’ ಎಂದು ಅವರು ತಿಳಿಸಿದರು.

ಪೂರ್ಣಗೊಳ್ಳದೇ ಇರುವ ಕಾಮಗಾರಿಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಜಿಲ್ಲಾಧಿಕಾರಿ, ತಮಗೆ ನೀಡಿದ ಕಾಮಗಾರಿಗಳನ್ನು ಸಕಾಲದಲ್ಲಿ ಪೂರ್ಣಗೊಳಿಸಬೇಕು ಮತ್ತು ಆ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ತಪ್ಪಿದಲ್ಲಿ ಅಧಿಕಾರಿಗಳೇ ಹೊಣೆ ಹೊರಬೇಕಾಗುತ್ತದೆ ಎಂದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆ, ಕೌಶಲ್ಯ ಅಭಿವೃದ್ಧಿ ಇಲಾಖೆಗಳ ಎಸ್‍ಸಿಎಸ್‍ಪಿ ಹಾಗೂ ಟಿಎಸ್‍ಪಿ ಅನುದಾನ ಬಗ್ಗೆ ಮಾಹಿತಿ ಪಡೆದುಕೊಂಡರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Cut-off box - ‘ಗ್ಯಾರಂಟಿ ಯೋಜನೆ ಸಮರ್ಪಕ ಜಾರಿಯಾಗಲಿ’ ಬಳ್ಳಾರಿ: ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಜಾರಿಯಲ್ಲಿ ಯಾವುದೇ ತಾಂತ್ರಿಕ ಸಮಸ್ಯೆಗಳು ಕಂಡುಬಂದಲ್ಲಿ ಕೂಡಲೇ ಸರಿಪಡಿಸಬೇಕು ಎಂದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಮೊಹಮ್ಮದ್ ಎನ್.ಝುಬೇರ ಅಧಿಕಾರಿಗಳಿಗೆ ತಾಕೀತು ಮಾಡಿದರು.  ಶನಿವಾರ ನಡೆದ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಸಮಿತಿಯ ಅಧ್ಯಕ್ಷ ಮತ್ತು ಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು. ‘ಶಕ್ತಿ ಗೃಹ ಲಕ್ಷ್ಮಿ ಗೃಹ ಜ್ಯೋತಿ ಅನ್ನ ಭಾಗ್ಯ ಯುವನಿಧಿ ಯೋಜನೆಗಳನ್ನು ಜಿಲ್ಲೆಯ ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಸಮಿತಿ ರಚಿಸಲಾಗಿದೆ. ಯೋಜನೆ ಜಾರಿಯಲ್ಲಿ ಲೋಪದೋಷ ವಿಳಂಬ ಕಂಡುಬಂದಲ್ಲಿ ಅಧ್ಯಕ್ಷರು ಹಾಗೂ ಸದಸ್ಯರ ಗಮನಕ್ಕೆ ತರಬೇಕು’ ಎಂದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಮಾತನಾಡಿ ‘ಗ್ಯಾರಂಟಿಗಳಿಂದಾಗಿ ಜಿಲ್ಲೆಯ ಸಹಸ್ರಾರು ಕುಟುಂಬಗಳು ಏಳಿಗೆ ಕಾಣುತ್ತಿವೆ. ಅನುಷ್ಠಾನ ಸಮಿತಿಯ ಕಾರ್ಯಕರ್ತರು ಪ್ರತಿಯೊಬ್ಬರ ಮನೆ ಬಾಗಿಲಿಗೆ ತೆರಳಿ ಯೋಜನೆ ತಲುಪಿದ ಬಗ್ಗೆ ಖಾತರಿ ಪಡಿಸಿಕೊಳ್ಳಬೇಕು. ತಾಂತ್ರಿಕ ಸಮಸ್ಯೆಯಿಂದ ಯೋಜನೆಯ ಸದುಪಯೋಗ ಪಡೆಯದ ಜನರಿಂದ ದಾಖಲೆ ಪಡೆದು ಯೋಜನೆ ಫಲಾನುಭವಿಗಳಿಗೆ ಮುಟ್ಟುವಂತೆ ನೋಡಿಕೊಳ್ಳಬೇಕು’ ಎಂದು ಹೇಳಿದರು. ಗ್ಯಾಂರಟಿ ಯೋಜನೆಗಳಾದ ಶಕ್ತಿ ಗೃಹ ಜ್ಯೋತಿ ಅನ್ನ ಭಾಗ್ಯ ಹಾಗೂ ಯುವನಿಧಿ ಯೋಜನೆಗಳ ಅನುಷ್ಠಾನ ಮತ್ತು ಪ್ರಗತಿಯ ವಿವರಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಸಭೆಯಲ್ಲಿ ಗ್ಯಾರಂಟಿ ಯೋಜನೆ ಸಂಬಂಧಿಸಿದ ಜಿಲ್ಲಾ ಮಟ್ಟದ ಪದಾಧಿಕಾರಿಗಳು ಹಾಗೂ ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲ್ಲೂಕು ಮಟ್ಟದ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.