ಬಳ್ಳಾರಿ: ‘ತಮ್ಮ ಆಡಳಿತದಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೈಯೆಲ್ಲ ಕಪ್ಪು’ ಎಂದು ಮಾಜಿ ಸಂಸದ ಮುನಿಸ್ವಾಮಿ ವ್ಯಂಗ್ಯವಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿ ಅವರು, ‘ಮುಡಾದಲ್ಲಿ ಅಕ್ರಮವಾಗಿ ನಿವೇಶನ ಪಡೆಯಲಾಗಿದೆ. ವಾಲ್ಮೀಕಿ ನಿಗಮದಲ್ಲಿ ₹185 ಕೋಟಿ ಅವ್ಯವಹಾರವಾಗಿದೆ. ಆದರೆ ₹80 ಕೋಟಿ ಮಾತ್ರ ಅಕ್ರಮವಾಗಿದೆ ಎಂದು ವಿಧಾನಸಭೆಯಲ್ಲಿ ಸ್ವತಃ ಸಿದ್ದರಾಮಯ್ಯ ಅವರೇ ಒಪ್ಪಿಕೊಂಡಿದ್ದಾರೆ’ ಎಂದು ಅವರು ಆರೋಪಿಸಿದರು.
‘ರಾಜ್ಯಪಾರನ್ನು ಟೀಕಿಸುವ ಭರದಲ್ಲಿ ಅವರ ತೇಜೋವಧೆ ಮಾಡಿರುವ ಸಚಿವ ಕೃಷ್ಣಬೈರೇಗೌಡ, ದಿನೇಶ್ ಗುಂಡೂರಾವ್, ಐವಾನ್ ಡಿಸೋಜಾ ವಿರುದ್ಧ ದೂರು ನೀಡಲಾಗಿದೆ. ಕಾನೂನಿನ ಅಡಿ ಕ್ರಮ ಕೈಗೊಳ್ಳುವುದಾಗಿ ಪೊಲೀಸ್ ಇಲಾಖೆ ಹೇಳಿದೆ’ ಎಂದರು.
ಪಕ್ಷದ ನಾಯಕರ ವಿರುದ್ಧ ಟೀಕಾ ಪ್ರಹಾರ ನಡೆಸುತ್ತಿರುವ ಬಸನಗೌಡ ಪಾಟೀಲ ಯತ್ನಾಳ ಕುರಿತು ಮಾತನಾಡಿದ ಅವರು, ‘ಪಕ್ಷಕ್ಕಿಂತ ದೊಡ್ಡವರು ಯಾರೂ ಇಲ್ಲ. ದೊಡ್ಡ ಗಂಟಲಿನಲ್ಲಿ ಮಾತನಾಡಿದರೆ ದೊಡ್ಡವರಾಗಬಹುದು ಎಂದು ಕೆಲವರು ಭಾವಿಸಿದ್ದಾರೆ’ ಎಂದು ವ್ಯಂಗ್ಯವಾಡಿದರು.
’ಬಳ್ಳಾರಿ ಪಾದಯಾತ್ರೆಗೆ ಸಂಬಂಧಿಸಿದಂತೆ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.