ಹೊಸಪೇಟೆ: ಹೈದರಾಬಾದ್ ಕರ್ನಾಟಕ ವಿಮೋಚನಾ ದಿನದ ಪ್ರಯುಕ್ತ ಇಲ್ಲಿನ ತಾಲ್ಲೂಕು ಕಚೇರಿಯಲ್ಲಿ ಸೋಮವಾರ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.
ಉಪವಿಭಾಗಾಧಿಕಾರಿ ಎನ್.ವಿ. ಲೋಕೇಶ್ ಅವರು ಮಹಾತ್ಮ ಗಾಂಧಿ ಹಾಗೂ ಸರ್ದಾರ ವಲ್ಲಭಬಾಯಿ ಪಟೇಲ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಬಳಿಕ ಧ್ವಜಾರೋಹಣ ನೆರವೇರಿಸಿದರು.
ನಂತರ ಮಾತನಾಡಿ, ‘ಬಳ್ಳಾರಿ ಒಳಗೊಂಡಂತೆ ಹೈದರಾಬಾದ್ ಕರ್ನಾಟಕದ ಜಿಲ್ಲೆಗಳು ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ನಂತರವೂ ನಿಜಾಮನ ಆಳ್ವಿಕೆಯಲ್ಲಿತ್ತು. ಅಂದಿನ ಗೃಹ ಮಂತ್ರಿ ಸರ್ದಾರ ಪಟೇಲ ಅವರ ದಿಟ್ಟ ಕ್ರಮದಿಂದ 1948 ಸೆ. 17ರಂದು ಭಾರತದಲ್ಲಿ ವಿಲೀನಗೊಂಡವು. ಈ ಕಾರಣಕ್ಕಾಗಿ ಈ ದಿನಕ್ಕೆ ವಿಶೇಷ ಮಹತ್ವವಿದೆ’ ಎಂದು ವಿವರಿಸಿದರು.
ತಹಶೀಲ್ದಾರ್ ಎಚ್. ವಿಶ್ವನಾಥ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಟಿ. ವೆಂಕೋಬಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಎಲ್.ಡಿ. ಜೋಶಿ, ವಾಲ್ಮೀಕಿ ನಾಯಕ ಸಮಾಜದ ಮುಖಂಡ ತಾಯಪ್ಪ ನಾಯಕ, ದಲಿತ ಮುಖಂಡ ವೆಂಕಟೇಶ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.