ಬಳ್ಳಾರಿ: ‘ಉಪಚುನಾವಣೆಗಳ ಫಲಿತಾಂಶದ ಬಳಿಕ ರಾಜ್ಯದಲ್ಲಿ ಅತಂತ್ರ ರಾಜಕೀಯ ಪರಿಸ್ಥಿತಿ ನಿರ್ಮಾಣವಾಗಲಿದೆ’ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಭವಿಷ್ಯ ನುಡಿದರು.
‘ಉಪಚುನಾವಣೆಯಲ್ಲಿ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಲ್ಲಿ ಕಾಂಗ್ರೆಸ್ ಆಸಕ್ತಿ ತೋರಿಸಿಲ್ಲ. ಸಂಸದೆ ಶೋಭಾ ಕರಂದ್ಲಾಜೆ ಬಗ್ಗೆ ಏಕವಚನದಲ್ಲಿ ಮಾತನಾಡಿರುವ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ವಿರುದ್ಧ ಕ್ರಮ ಕೈಗೊಳ್ಳಬೇಕಾದ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಕೇವಲ ಕಾಗದದ ಹುಲಿಯಷ್ಟೇ’ ಎಂದು ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ವ್ಯಂಗ್ಯವಾಡಿದರು.
‘ಕಾಂಗ್ರೆಸ್‌ನಲ್ಲಿ ಗುಂಪುಗಾರಿಕೆ ಮಿತಿಮೀರಿದೆ. ಸಚಿವ ಸ್ಥಾನ ಕೊಡಿ ಎಂದವರಿಗೆ ಮೊದಲು ಹೆಚ್ಚು ಮತಗಳನ್ನು ತನ್ನಿ ಎಂದು ಹೇಳಲಾಗುತ್ತಿದೆ. ಯಾರೇ ಬಂದರೂ ಕಾಂಗ್ರೆಸ್ ಅನ್ನು ಉಳಿಸುವ ಸ್ಥಿತಿ ಇಲ್ಲ. ಇಂಥ ಸನ್ನಿವೇಶದಲ್ಲಿ ದಕ್ಷಿಣ ಭಾರತದ ಹೆಬ್ಬಾಗಿಲಾದ ಬಿಜೆಪಿಯನ್ನು ಮುಚ್ಚುತ್ತೇವೆ ಎಂದು ಆ ಪಕ್ಷದ ಮುಖಂಡರು ಹೇಳುತ್ತಿದ್ದಾರೆ’ ಎಂದು ಟೀಕಿಸಿದರು.
‘ಸಿದ್ದರಾಮಯ್ಯ ಜಾತಿ ರಾಜಕಾರಣ ಮಾಡುತ್ತಿದ್ದಾರೆ. ಅವರಿಂದ ಕುರುಬರಿಗೂ ಒಳ್ಳೆಯದಾಗಲಿಲ್ಲ. ಅಲ್ಪಸಂಖ್ಯಾತ ಮತ್ತು ದಲಿತರಿಗೂ ಒಳ್ಳೆಯದಾಗಲಿಲ್ಲ’ ಎಂದು ದೂರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.