ಹೊಸಪೇಟೆ (ವಿಜಯನಗರ): ‘ಮಹಿಳಾ ಸ್ವಸಹಾಯ ಸಂಘದವರ ವಿವಿಧ ಉತ್ಪನ್ನಗಳನ್ನು ಆನ್‌ಲೈನ್‌ನಲ್ಲಿ ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಲು ಕ್ರಮ ಜರುಗಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಪಿ. ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಭಾಗಿತ್ವದಲ್ಲಿ ಗುರುವಾರ ನಗರದಲ್ಲಿ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ, ಸ್ತ್ರೀ ಸಮಾವೇಶ, ಸ್ವಸಹಾಯ ಸಂಘಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಉದ್ಘಾಟಿಸಿ ಮಾತನಾಡಿದರು.
ಮಹಿಳಾ ಸ್ವಸಹಾಯ ಸಂಘಗಳ ಸದಸ್ಯೆಯರು ಗುಂಪು ಚಟುವಟಿಕೆಗಳ ಮೂಲಕ ವಿವಿಧ ರೀತಿಯ ಉತ್ಪನ್ನಗಳನ್ನು ತಯಾರಿಸುತ್ತಿದ್ದಾರೆ. ಅವುಗಳಿಗೆ ಇಂತಹ ಸಮಾರಂಭದಲ್ಲಿ ಮಾತ್ರ ವೇದಿಕೆ ಸಿಗುತ್ತಿದೆ. ಆನ್‌ಲೈನ್‌ನಲ್ಲೂ ವೇದಿಕೆ ಸಿಕ್ಕರೆ ವಿಸ್ತಾರವಾಗುತ್ತದೆ ಎಂದು ಹೇಳಿದರು.
ಮಲಪನಗುಡಿ ಗ್ರಾಮ ಪಂಚಾಯಿತಿಯ ಸೂರ್ಯಕಾಂತಿ ಸಂಜೀವಿನಿ ಒಕ್ಕೂಟದ ಮಹಿಳೆಯರು ಘನತ್ಯಾಜ್ಯ ವಿಲೇವಾರಿ ಘಟಕವನ್ನು ಉತ್ತಮ ರೀತಿಯಲ್ಲಿ ನಿರ್ವಹಣೆ ಮಾಡುತ್ತಿದ್ದಾರೆ. ನಗರಸಭೆ ವ್ಯಾಪ್ತಿಯಲ್ಲಿ ಅದೇ ಮಾದರಿಯಲ್ಲಿ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಸಾಹಿತಿ ಪದ್ಮಾ ವಿಠ್ಠಲ್ ಮಾತನಾಡಿ, ಮಹಿಳೆಯರು ಅವರಿಗೆ ಸಿಗುವ ಅವಕಾಶಗಳನ್ನು ಯಾವ ರೀತಿ ಬಳಸಿಕೊಳ್ಳುತ್ತಾರೆ ಎಂಬುದರ ಮೇಲೆ ಅವರ ಸಾಧನೆ ಅವಲಂಬಿಸಿದೆ. ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರು ದಾಪುಗಾಲು ಇಡುತ್ತಿದ್ದರೂ ಇದುವರೆಗೆ ಶೋಷಣೆ ನಿಂತಿಲ್ಲ ಎಂದರು.
ಸಮಾರಂಭದಲ್ಲಿ ಗರ್ಭಿಣಿಯರಿಗೆ ಉಡಿ ತುಂಬಲಾಯಿತು. ನಂತರ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರಿಗೆ ಗೌರವಿಸಲಾಯಿತು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್ ನಾರಾಯಣರಾವ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಆರ್.ನಾಗರಾಜ್, ಯೋಜನಾ ನಿರ್ದೇಶಕ ಸಮೀರ್ ಮುಲ್ಲಾ, ನಗರಸಭೆ ಅಧ್ಯಕ್ಷೆ ಸುಂಕಮ್ಮ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿಂಧು ಯಲಿಗಾರ್, ರಂಗ ಕಲಾವಿದೆ ಕೆ.ನಾಗರತ್ನಮ್ಮ ಇದ್ದರು.
ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ವಿವಿಧ ಸ್ವಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ಆಹಾರ, ಗೃಹಾಲಂಕಾರ, ವಸ್ತ್ರಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗೆ ಡಿಸಿ, ಸಿಇಒ ಭೇಟಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.