ತೋರಣಗಲ್ಲು : ‘ಬಳ್ಳಾರಿಯಲ್ಲಿ ಈ ಬಾರಿ ನಡೆಯಲಿರುವ ಸಂಡೂರು ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ರಿಪಬ್ಲಿಕ್ ಆಫ್ ಬಳ್ಳಾರಿಯು ಮತ್ತೆ ಮರುಕಳಿಸಲಿದ್ದು, ಸಂಡೂರು ಕ್ಷೇತ್ರದ ಮತದಾರರು ಯಾವುದೇ ಕಾರಣಕ್ಕೂ ಬಿಜೆಪಿಗೆ ಮತ ನೀಡಬಾರದು, ರಿಪಬ್ಲಿಕ್ ಆಫ್ ಬಳ್ಳಾರಿಗೆ ಮತ್ತೆ ಅವಕಾಶ ನೀಡಬಾರದು’ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಜನಾರ್ದನ ರೆಡ್ಡಿ ವಿರುದ್ಧ ವಾಗ್ದಾಳಿ ನಡೆಸಿದರು.
ಹೋಬಳಿಯ ಬನ್ನಿಹಟ್ಟಿ ಗ್ರಾಮದಲ್ಲಿ ಶುಕ್ರವಾರ ಸಂಡೂರು ಕ್ಷೇತ್ರದ ಉಪ ಚುನಾವಣೆಯ ಅಂಗವಾಗಿ ಆಯೋಜಿಸಿದ್ದ ಪ್ರಚಾರದ ಬಹಿರಂಗ ಸಭೆಯಲ್ಲಿ ಮಾತನಾಡಿದರು.
‘ಜನಾರ್ದನ ರೆಡ್ಡಿ ಬಳ್ಳಾರಿಯಲ್ಲಿ ಅಕ್ರಮ ಗಣಿಗಾರಿಕೆ ಮಾಡಿ ಲೂಟಿ ಹೊಡೆದು ಬಳ್ಳಾರಿಯನ್ನು ರಿಪಬ್ಲಿಕ್ ಆಫ್ ಬಳ್ಳಾರಿ ಮಾಡಿದ್ದರು. ಅಂತಹ ವ್ಯಕ್ತಿಗೆ ಬಿಜೆಪಿ ಉಪ ಚುನಾವಣೆಯಲ್ಲಿ ಅಭ್ಯರ್ಥಿ ಗೆಲ್ಲಿಸಲು ಅವಕಾಶ ಕೊಟ್ಟಿದೆ. ಅಕ್ರಮ ಗಣಿಗಾರಿಕೆಯ ವಿರುದ್ಧ ನಾವು ಬೆಂಗಳೂರಿನಿಂದ ಬಳ್ಳಾರಿಯವರೆಗೂ ಪಾದಯಾತ್ರೆ ಮಾಡಿದ್ದೇವೆ. ರೆಡ್ಡಿ ಮತ್ತು ಶ್ರೀರಾಮುಲು ಬಳ್ಳಾರಿಯ ಗಣಿಗಾರಿಕೆಯಲ್ಲಿ ಲೂಟಿ ಮಾಡಿ ಹಫ್ತಾ ವಸೂಲಿ ಮಾಡಿದ್ದರು. ಭಯದ ವಾತಾವರಣ, ಶೋಷಣೆ ಮಾಡಿ ಜಿಲ್ಲೆಯನ್ನು ಹಾಳು ಮಾಡಿದ್ದಾರೆ. ಎಲ್ಲ ಗುಡ್ಡಗಳನ್ನು ನೆಲಸಮ ಮಾಡಿದ್ದಾರೆ. ಇವರ ಕಪಿ ಮುಷ್ಠಿಯಿಂದ ಬಳ್ಳಾರಿಯನ್ನು ತಪ್ಪಿಸಬೇಕು. ಸಂಡೂರಿನ ಜನ ಇವರನ್ನು ಚುನಾವಣೆಯಲ್ಲಿ ತಿರಸ್ಕರಿಸಬೇಕು’ ಎಂದರು.
‘ಸಂಡೂರು ಕ್ಷೇತ್ರಕ್ಕೆ ಬಿಜೆಪಿಯವರ ಕೊಡುಗೆ ಸಂಪೂರ್ಣವಾಗಿ ಶೂನ್ಯವಾಗಿದ್ದು, ಈ ಬಾರಿಯ ಉಪ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಸೋಲಿಸಬೇಕು’ ಎಂದು ಸಚಿವ ಸಂತೋಷ್ ಎಸ್ ಲಾಡ್ ಹೇಳಿದರು.
ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ, ಸಚಿವ ಜಮೀರ್ ಅಹಮ್ಮದ್ ಖಾನ್, ಮಾಜಿ ಸಚಿವ ಪಿ.ಟಿ.ಪರಮೇಶ್ವರನಾಯ್ಕ್, ಸಂಸದ ಇ.ತುಕಾರಾಂ, ಶಾಸಕರಾದ ಜೆ.ಎನ್.ಗಣೇಶ್, ಅಮರೇಗೌಡ ಬಯ್ಯಾಪುರ, ಅಲ್ಲಂಪ್ರಭುಪಾಟೀಲ್, ಅಜಯಸಿಂಗ್, ಪಕ್ಷದ ಮುಖಂಡರು ಕಾರ್ಯಕರ್ತರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.