ಬಳ್ಳಾರಿ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಳ್ಳಾರಿ ನಗರದಲ್ಲಿ ಬಿಜೆಪಿ ಶುಕ್ರವಾರ ಆರಂಭಿಸಿದ ಧರಣಿ ಶನಿವಾರವೂ ಮುಂದುವರಿದಿದೆ.
ಮಾಜಿ ಸಚಿವ ಶ್ರೀರಾಮುಲು ಅವರ ನೇತೃತ್ವದಲ್ಲಿ ಬಿಜೆಪಿ ನಾಯಕರು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಕುಳಿತಿದ್ದಾರೆ.
ಶುಕ್ರವಾರ ಬೆಳಗ್ಗೆ ನಗರದಲ್ಲಿ ಮೆರವಣಿ ನಡೆಸಿದ್ದ ಬಿಜೆಪಿ ನಾಯಕರು, ಮಧ್ಯಾಹ್ನದ ಹೊತ್ತಿಗೆ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಆರಂಭಿಸಿದ್ದರು. ಧರಣಿಯನ್ನು ಆಹೋರಾತ್ರಿ ಮುಂದುವರಿಸಲು ಪಕ್ಷದ ನಾಯಕರು ನಿರ್ಧರಿಸಿದರು. ಅದರಂತೆ, ಶುಕ್ರವಾರ ರಾತ್ರಿಯಿಡೀ ನಾಯಕರು ಜಿಲ್ಲಾಧಿಕಾರಿ ಕಚೇರಿ ಎದುರೇ ಠಿಕಾಣಿ ಹೂಡಿದರು. ಶ್ರೀರಾಮುಲು ಧರಣಿ ಸ್ಥಳದಲ್ಲೇ ರಾತ್ರಿಯ ಭೋಜನ ಸ್ವೀಕರಿಸಿದರು.
ಶನಿವಾರ ಬೆಳಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಶ್ರೀರಾಮುಲು, ‘ವಾಲ್ಮೀಕಿ ನಿಗಮದಲ್ಲಿ ಸರ್ಕಾರದ ಪಾತ್ರ ಇರುವುದರಿಂದ ಸಿಎಂ ರಾಜೀನಾಮೆ ನೀಡಬೇಕು. ಶಾಸಕ ಬಿ.ನಾಗೇಂದ್ರ ಅವರನ್ನು ಕೂಡಲೇ ಬಂಧಿಸಬೇಕು. ಹಗರಣದ ಪ್ರತಿ ಪೈಸೆಯನ್ನೂ ವಸೂಲಿ ಮಾಡಬೇಕು. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು‘ ಎಂದು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.