ADVERTISEMENT

ರಾಜ್ಯಸಭೆ ಚುನಾವಣೆ: ನಾಸೀರ್ ಹುಸೇನ್‌ಗೆ 2ನೇ ಬಾರಿ ಅವಕಾಶ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2024, 15:33 IST
Last Updated 27 ಫೆಬ್ರುವರಿ 2024, 15:33 IST
ನಾಸೀರ್‌ ಹುಸೇನ್‌ 
ನಾಸೀರ್‌ ಹುಸೇನ್‌    

ಬಳ್ಳಾರಿ: ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಸೈಯದ್ ನಾಸೀರ್ ಹುಸೇನ್ ಅವರು 47 ಮತಗಳನ್ನು ಪಡೆದು ಮರು ಆಯ್ಕೆಯಾಗಿದ್ದಾರೆ. ಈ ಮೊದಲು 2018ರ ಮಾರ್ಚ್‌ನಲ್ಲಿ ಮೊದಲ ಬಾರಿಗೆ ರಾಜ್ಯಸಭೆ ಪ್ರವೇಶಿಸಿದ್ದರು.

ನಾಸೀರ್ ಹುಸೇನ್ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಪೂರ್ಣಾವಧಿ ಸದಸ್ಯರಾಗಿದ್ದು, ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲಿಕಾರ್ಜುನ್ ಖರ್ಗೆ ಅವರ ಕಚೇರಿ ನಿರ್ವಹಿಸುವ ಪ್ರಮುಖ ಜವಾಬ್ದಾರಿಯನ್ನೂ ನಿಭಾಯಿಸುತ್ತಿದ್ದಾರೆ.

ಜಲಸಂಪನ್ಮೂಲ, ಮಾಹಿತಿ ತಂತ್ರಜ್ಞಾನ ಮತ್ತು ಸಾರ್ವಜನಿಕ ಉದ್ಯಮಗಳ ಸಂಸತ್ ಸ್ಥಾಯಿ ಸಮಿತಿ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಕೇಂದ್ರ ಸಚಿವಾಲಯದ ಸಮಾಲೋಚನಾ ಸಮಿತಿಯಲ್ಲೂ ಸೇವೆ ಸಲ್ಲಿಸಿದ್ದಾರೆ. 2019ನೇ ಸಾಲಿನಲ್ಲಿ ನಾಸೀರ್ ಹುಸೇನ್ ಅವರನ್ನು ರಾಜ್ಯಸಭೆಯ ಸಂಸದೀಯ ಪಕ್ಷದ ವಿಪ್ ಆಗಿ ನೇಮಿಸಲಾಗಿತ್ತು. 

ADVERTISEMENT

ಮೈಸೂರು ವಿಶ್ವವಿದ್ಯಾಲಯದಲ್ಲಿ ರಾಜ್ಯಶಾಸ್ತ್ರ ಪದವಿ ಪಡೆದಿದ್ದಾರೆ. ವಿದ್ಯಾರ್ಥಿ ದಿಸೆಯಿಂದಲೂ ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿದ್ದ ಇವರು, ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಕ್ಕೂಟದ ಕಾರ್ಯದರ್ಶಿ, ಉಪಾಧ್ಯಕ್ಷ ಮತ್ತು ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ನಂತರ ಕಾಂಗ್ರೆಸ್‌ ಸೇರಿದ್ದ ಇವರನ್ನು 2014ರಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿಯು ರಾಷ್ಟ್ರೀಯ ವಕ್ತಾರರನ್ನಾಗಿ ನೇಮಿಸಿತ್ತು.

ನಾಸೀರ್ ಹುಸೇನ್ ಅವರು 2018 ಮತ್ತು 2023ರಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆಗಳ ಪ್ರಣಾಳಿಕೆ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ ಮತ್ತು ರಾಷ್ಟ್ರೀಯ ಚುನಾವಣೆಗಳಿಗೆ ವಾರ್ ರೂಮ್‌ನ ಮುಖ್ಯಸ್ಥರಾಗಿದ್ದರು. ಕೆಪಿಸಿಸಿ ಮತ್ತು ಎಐಸಿಸಿ ಸದಸ್ಯರಾಗಿದ್ದರು. ನಂತರ ಕೆಪಿಸಿಸಿ ಉಪಾಧ್ಯಕ್ಷರೂ ಆಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.