ಆನೇಕಲ್: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿರುವ ಬಾಂಬ್ ಸ್ಫೋಟ ಪ್ರಕರಣವನ್ನು ರಾಜ್ಯ ಸರ್ಕಾರ ಲಘುವಾಗಿ ಪರಿಗಣಿಸಬಾರದು ಎಂದು ಕೇಂದ್ರ ಸಾಮಾಜಿಕ ನ್ಯಾಯ ಸಬಲೀಕರಣ ಖಾತೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಹೇಳಿದರು.
ಶನಿವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಂಬ್ ಸ್ಫೋಟ ಸಂಭವಿಸಿ 24 ಗಂಟೆಯಾದರೂ ಸರ್ಕಾರದ ಬಳಿ ಆರೋಪಿಗಳು ಮತ್ತು ಘಟನೆ ಬಗ್ಗೆ ಸಮರ್ಪಕ ಮಾಹಿತಿ ಇಲ್ಲ. ಇಂತಹ ಘಟನೆ ಭಯೋತ್ಪಾದನಾ ಕೃತ್ಯಗಳಿಗೆ ದಾರಿ ಮಾಡಿಕೊಡುತ್ತವೆ. ಇದು ದೇಶದ ಭದ್ರತೆಯ ವಿಚಾರ. ಹಾಗಾಗಿ ಯಾವುದೇ ರಾಜೀ ಮಾಡಿಕೊಳ್ಳಬಾರದು. ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.
ಕಾಂಗ್ರೆಸ್ ಸರ್ಕಾರ ದೇಶದ ಭದ್ರತೆ ಮತ್ತು ಕಾನೂನು ಸುವ್ಯವಸ್ಥೆಯಲ್ಲಿ ಯಾವುದೇ ಮುಲಾಜಿಲ್ಲದೇ ಕ್ರಮ ಕೈಗೊಳ್ಳಬೇಕು. ಬೆಂಗಳೂರು ಐ.ಟಿ ನಗರವಾಗಿದೆ. ಈ ಹೆಸರಿಗೆ ಧಕ್ಕೆ ಬಾರದಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿ. ಮುಖ್ಯಮಂತ್ರಿಗ, ಗೃಹ ಸಚಿವರು ಈ ಪ್ರಕರಣವನ್ನು ಲಘುವಾಗಿ ಪರಿಗಣಿಸಬಾರದು ಎಂದರು.
ವಿಧಾನಸೌಧದಲ್ಲಿ ನೆರೆಯ ದೇಶದ ಪರ ಘೋಷಣೆ ಕೂಗಿರುವುದು ಖಂಡನೀಯ. ಇಂತಹ ವರ್ತನೆಯನ್ನು ಖಂಡಿಸುವುದು ಪ್ರತಿಯೊಬ್ಬ ಭಾರತೀಯರ ಕರ್ತವ್ಯವಾಗಿದೆ. ಇಂತಹ ನಡವಳಿಕೆಗಳನ್ನು ಸಹಿಸುವುದಿಲ್ಲ ಎಂಬ ಸಂದೇಶವನ್ನು ರಾಜ್ಯ ಸರ್ಕಾರ ನೀಡಬೇಕು ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.