ADVERTISEMENT

ದೊಮ್ಮಸಂದ್ರವರೆಗೂ ಮೆಟ್ರೊ ವಿತರಣೆ: ಶಾಸಕ ಬಿ.ಶಿವಣ್ಣ ಭರವಸೆ

ಆನೇಕಲ್‌ ಶಾಸಕ ಬಿ.ಶಿವಣ್ಣ ಭರವಸೆ

​ಪ್ರಜಾವಾಣಿ ವಾರ್ತೆ
Published 26 ಜನವರಿ 2024, 13:13 IST
Last Updated 26 ಜನವರಿ 2024, 13:13 IST
ಆನೇಕಲ್‌ನ ಎಎಸ್‌ಬಿ ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಆಯೋಜಿಸಿದ್ದ ಗಣರಾಜ್ಯೋತ್ಸವವನ್ನು ಶಾಸಕ ಬಿ.ಶಿವಣ್ಣ ಮತ್ತು ತಹಶೀಲ್ದಾರ್ ಶಶಿಧರ್ ಮಾಡ್ಯಾಳ್ ಉದ್ಘಾಟಿಸಿದರು
ಆನೇಕಲ್‌ನ ಎಎಸ್‌ಬಿ ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಆಯೋಜಿಸಿದ್ದ ಗಣರಾಜ್ಯೋತ್ಸವವನ್ನು ಶಾಸಕ ಬಿ.ಶಿವಣ್ಣ ಮತ್ತು ತಹಶೀಲ್ದಾರ್ ಶಶಿಧರ್ ಮಾಡ್ಯಾಳ್ ಉದ್ಘಾಟಿಸಿದರು   

ಆನೇಕಲ್ : ತಾಲ್ಲೂಕಿನ ದೊಮ್ಮಸಂದ್ರವರೆಗೂ ಮೆಟ್ರೊ ವಿಸ್ತರಣೆ ಮಾಡಲು ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದ್ದು, ಅದು ಈಗ ಡಿಪಿಆರ್‌ ಹಂತದಲ್ಲಿದೆ ಎಂದು ಶಾಸಕ ಬಿ.ಶಿವಣ್ಣ ಹೇಳಿದರು.

ಪಟ್ಟಣದ ಎಎಸ್‌ಬಿ ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಯೋಜಿಸಿದ್ದ ಗಣರಾಜ್ಯೋತ್ಸವದಲ್ಲಿ ಅವರು ಮಾತನಾಡಿದರು.

ಬೆಂಗಳೂರು ನಗರಕ್ಕೆ ಹೊಂದಿಕೊಂಡಿರುವ ಆನೇಕಲ್‌ ತಾಲ್ಲೂಕಿಗೆ ಮೆಟ್ರೋ ಸೌಲಭ್ಯ ಕಲ್ಪಿಸುವುದರಿಂದ ಟ್ರಾಫಿಕ್‌ ಸಮಸ್ಯೆಗೆ ಪರಿಹಾರ ದೊರೆಯಲಿದೆ. ಈ ಭಾಗದಿಂದ ಐಟಿ ಬಿಟಿ ಉದ್ಯೋಗಿಗಳು, ಕಾರ್ಖಾನೆ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹಾಗಾಗಿ ಪ್ರತಿಯೊಬ್ಬರಿಗೂ ಅನುಕೂಲ ಮಾಡಿಕೊಡುವಂತೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ADVERTISEMENT

ಆನೇಕಲ್‌ ಪಟ್ಟಣದಲ್ಲಿ ನಿರ್ಮಿಸುತ್ತಿರುವ ಅಂಬೇಡ್ಕರ್‌ ಭವನ ಕಾಮಗಾರಿಗೆ ರಾಜ್ಯ ಸರ್ಕಾರ ಹೆಚ್ಚಿನ ಅನುದಾನ ನೀಡಿದ್ದು, ಸುಸಜ್ಜಿತ ಅಂಬೇಡ್ಕರ್‌ ಭವನ ನಿರ್ಮಿಸಲಾಗುವುದು. ಶೀಘ್ರದಲ್ಲಿ ಉದ್ಘಾಟಿಸಲಾಗುವುದು. ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳು ಮತ್ತು ಸರ್ಕಾರಿ ಆಸ್ಪತ್ರೆಗಳ ಅಭಿವೃದ್ಧಿ ಮೊದಲ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.

ಭಾರತ ಸಂವಿಧಾನ ಸಹೋದರತೆ, ಸಮಾನತೆಗೆ ಹೆಚ್ಚಿನ ಮಹತ್ವ ನೀಡಿದೆ. ಅಂಬೇಡ್ಕರ್‌ ಅವರ ಕನಸು ನನಸು ಮಾಡಲು ಪ್ರತಿಯೊಬ್ಬರು ಶ್ರಮಿಸಬೇಕು. ಅವರ ಆದರ್ಶ ಮತ್ತು ಚಿಂತನೆ ಸಮಾಜಕ್ಕೆ ಮಾದರಿಯಾಗಿವೆ ಎಂದರು.

ತಹಶೀಲ್ದಾರ್‌ ಶಶಿಧರ್‌ ಮಾಡ್ಯಾಳ್‌ ಮಾತನಾಡಿ, ಪ್ರಜಾಪ್ರಭುತ್ವ ದೇಶದ ಶಕ್ತಿಯಾಗಿದೆ. ಪ್ರಜಾಪ್ರಭುತ್ವದ ರೂವಾರಿ ಆಗಿರುವ ಅಂಬೇಡ್ಕರ್‌ ಅವರನ್ನು ಗೌರವಿಸಿ ಅವರ ತತ್ವ, ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ್‌, ವಿಶೇಷ ತಹಶೀಲ್ದಾರ್‌ ಕರಿಯ ನಾಯಕ, ಸರ್ಕಲ್‌ ಇನ್‌ಸ್ಪೆಕ್ಟರ್‌ ಚಂದ್ರಪ್ಪ, ಪುರಸಭೆ ಸದಸ್ಯರಾದ ಎನ್.ಎಸ್.ಪದ್ಮನಾಭ, ರಾಜೇಂದ್ರ ಪ್ರಸಾದ್, ರಾಜಪ್ಪ, ಕವಿತಾ, ಭಾರತಿ, ಭುವನ, ಅನಿತಾ, ಕ್ಷೇತ್ರ ಶಿಕ್ಷಣಾಧಿಕಾರಿ ಜೆ.ಎಂ.ಜಯಲಕ್ಷ್ಮೀ, ಸಿಡಿಪಿಓ ಕವಿತಾ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರವಿ, ಎಇಇ ಚಿನ್ನಪ್ಪ ಇದ್ದರು.

ಸಂವಿಧಾನದ ಪೀಠಿಕೆಯನ್ನು ಸಾಮೂಹಿಕವಾಗಿ ಓದುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.

ವಿದ್ಯಾರ್ಥಿಗಳು ಆಕರ್ಷಕ ಪಥಸಂಚಲನ ನಡೆಸಿ, ಅತಿಥಿಗಳಿಗೆ ಗೌರವ ವಂದನೆ ಸಲ್ಲಿಸಿದರು. ವಿವಿಧ ಶಾಲೆಗಳ ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗಳಿಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

ವಿದ್ಯಾರ್ಥಿಗಳ ಧ್ವಜ ವಂದನೆ
ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶಿಸಿದರು
ವಿದ್ಯಾರ್ಥಿಗಳು ನೃತ್ಯ
ವಿದ್ಯಾರ್ಥಿಗಳ ನೃತ್ಯ ವೈಭವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.