ದೇವನಹಳ್ಳಿ: ಮುಂಗಾರು ಪೂರ್ವ ಮಳೆಯಿಂದಾಗುವ ವಿಪತ್ತು ನಿರ್ವಹಿಸಲು ಜಿಲ್ಲಾಡಳಿತ ವತಿಯಿಂದ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಶಿವಶಂಕರ ಹೇಳಿದರು.
ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಸೋಮವಾರ ನಡೆದ ಬರ ನಿರ್ವಹಣೆ ಹಾಗೂ ಪೂರ್ವ ಮುಂಗಾರು ಮಳೆ ಸಿದ್ಧತೆ ಕುರಿತ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಾದ್ಯಂತ ಮುಂಗಾರು ಪೂರ್ವ ಉತ್ತಮ ಮಳೆಯಾಗುತ್ತಿದೆ. ರೈತರ ಜಮೀನು ಹಾಗೂ ಜನ ನಿಬಿಡ ಪ್ರದೇಶಗಳಿಗೆ ನೀರು ನುಗ್ಗುವುದನ್ನು ತಪ್ಪಿಸಲು ಮಳೆ ನೀರು ಸರಾಗವಾಗಿ ಹರಿದು ಹೋಗಲು ಜಿಲ್ಲೆಯ ನಗರ ಪ್ರದೇಶ ಹಾಗೂ ಗ್ರಾಮೀಣ ಪ್ರದೇಶದಲ್ಲಿನ ಚರಂಡಿ, ರಾಜ ಕಾಲುವೆ ತ್ಯಾಜ್ಯ ಒಂದು ವಾರದೊಳಗೆ ತೆರವುಗೊಳಿಸಿ ವರದಿ ನೀಡಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಗ್ರಾಮ ಹಾಗೂ ನಗರ ಪ್ರದೇಶಗಳಲ್ಲಿ ಖಾಸಗಿ ಕೊಳವೆ ಬಾವಿಗಳನ್ನು ಗುರುತಿಸಿ ನೀರು ಪೂರೈಸಲು ಮೊದಲ ಆದ್ಯತೆ ನೀಡಲಾಗಿದೆ. ಅವಶ್ಯವಿದ್ದಲ್ಲಿ ಖಾಸಗಿ ಟ್ಯಾಂಕರ್ ಮೂಲಕ ನೀರು ಪೂರೈಸಲು ಕ್ರಮ ವಹಿಸಬೇಕಾಗಿದೆ. ಕುಡಿಯುವ ನೀರು ಸಮಸ್ಯೆ ಕಂಡುಬಂದಲ್ಲಿ ತಕ್ಷಣ ಜಿಲ್ಲಾಡಳಿತ ಗಮನಕ್ಕೆ ತರಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಕ್ರಮವಹಿಸಿ ಎಂದು ಹೇಳಿದರು.
ರೈತರು ಕೃಷಿ ಚಟುವಟಿ ಆರಂಭಿಸಿದ್ದು ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಸಮರ್ಪಕವಾಗಿ ರೈತರಿಗೆ ಸಿಗುವಂತೆ ಕ್ರಮ ಕೈಗೊಳ್ಳಬೇಕೆಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಮುಂಗಾರು ಪೂರ್ವ ಮಳೆಯಿಂದ 14.92 ಹೆಕ್ಟೇರ್ ತೋಟಗಾರಿಕೆ ಬೆಳೆ ನಾಶವಾಗಿದೆ. ಪ್ರಮುಖವಾಗಿ ಬಾಳೆ, ಮಾವು, ತರಕಾರಿ ಬೆಳೆ ಹಾಳಾಗಿದೆ ಎಂದು ತೋಟಗಾರಿಕೆ ಇಲಾಖೆ ನಿರ್ದೇಶಕರು ಮಾಹಿತಿ ನೀಡಿದರು.
ಬರ ಪರಿಹಾರ ಹಣ ಅರ್ಹ ರೈತರಿಗೆ ನೀಡಲಾಗಿದೆ. ಬೆಳೆ ನಷ್ಟ ಆಗಿರುವ ಪ್ರದೇಶಗಳಲ್ಲಿ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ವರದಿ ಸಿದ್ಧಪಡಿಸಿದ ನಂತರ ಶೀಘ್ರ ಪರಿಹಾರ ನೀಡಲು ಕ್ರಮವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಶ್ರೀನಿವಾಸ್ ಎಂ, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.