ವಿಜಯಪುರ (ದೇವನಹಳ್ಳಿ): ಪಟ್ಟಣದ ಮೂವರು ವಿದ್ಯಾರ್ಥಿಗಳು ಶನಿವಾರ ಚಿಕ್ಕನಹಳ್ಳಿ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವುದು ವಿಷಾದನೀಯ. ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ ₹10 ಲಕ್ಷ ಪರಿಹಾರ ಹಾಗೂ ಎರಡು ಎಕರೆ ಭೂಮಿ ನೀಡಬೇಕೆಂದು ಕರ್ನಾಟಕ ದಲಿತ ಸೇನೆ ರಾಜ್ಯ ಘಟಕದ ಅಧ್ಯಕ್ಷ ಟಿ.ಭರತ್ ಸರ್ಕಾರವನ್ನು ಒತ್ತಾಯಿಸಿ ಮನವಿ ಪತ್ರ ಸಲ್ಲಿಸಿದ್ದಾರೆ.
ವಿಧಾನಸೌಧದಲ್ಲಿ ಸೋಮವಾರ ಕಂದಾಯ ಸಚಿವರ ಕಚೇರಿಗೆ ಮನವಿ ಪತ್ರ ಸಲ್ಲಿಸಿರುವ ಅವರು, ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಚಿಕ್ಕನಹಳ್ಳಿ ಸಮೀಪದ ಕೆರೆಯಲ್ಲಿ ಕಂದಾಯ ಇಲಾಖೆ ಅಧಿಕಾರಿಗಳ ಅನುಮತಿಯಿಲ್ಲದೆ, ಅವೈಜ್ಞಾನಿಕವಾಗಿ ತುಂಬಾ ಆಳಕ್ಕೆ ಮಣ್ಣು ತೆಗೆದಿದ್ದಾರೆ. ಇದರ ಅರಿವಿಲ್ಲದೆ ವಿದ್ಯಾರ್ಥಿಗಳು ನೀರಿಗೆ ಇಳಿದು ಮೃತಪಟ್ಟಿದ್ದಾರೆ. ವಿದ್ಯಾರ್ಥಿಗಳ ಸಾವಿಗೆ ಕಂದಾಯ ಇಲಾಖೆಯ ಅಧಿಕಾರಿಗಳು ಕೂಡಾ ಕಾರಣರಾಗಿದ್ದಾರೆ ಎಂದು ಆರೋಪಿಸಿದ್ದಾರೆ.
ವಿದ್ಯಾರ್ಥಿಗಳ ಕುಟುಂಬಸ್ಥರು ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಆರ್ಥಿಕವಾಗಿ ದುರ್ಬಲರಾಗಿದ್ದಾರೆ. ಅವರ ನೆರವಿಗೆ ಸರ್ಕಾರ ಧಾವಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವರು ಮೃತರ ಕುಟುಂಬಕ್ಕೆ ಸಾಂತ್ವನ ಹೇಳುವ ಜೊತೆಗೆ, ಆರ್ಥಿಕವಾಗಿ ನೆರವಾಗಬೇಕು ಎಂದು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.