ದೇವನಹಳ್ಳಿ: ಸಚಿವ ಜಮೀರ್ ಅಹಮ್ಮದ್ ಖಾನ್ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಅಹೇಳನಕಾರಿಯಾಗಿ ಮಾತನಾಡಿರುವುದನ್ನು ಖಂಡಿಸಿ, ಅವರ ರಾಜೀನಾಮೆಗೆ ಒತ್ತಾಯಿಸಿ ತಾಲ್ಲೂಕಿನ ಜಿಲ್ಲಾಡಳಿತ ಭವನದ ಆವರಣದಲ್ಲಿ ಬುಧವಾರ ಜಿಲ್ಲಾ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಮಾತನಾಡಿ, ರಾಜಕೀಯವಾಗಿ ಗುರುತಿಸಿಕೊಳ್ಳಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಕುಟುಂಬದ ಆಸರೆ ಪಡೆದ ರಾಜ್ಯ ಸಚಿವ ಜಮೀರ್ ಅಹಮ್ಮದ್ ಖಾನ್, ಕುಮಾರಣ್ಣರ ಬಗ್ಗೆ ಲಘುವಾಗಿ ಮಾತನಾಡುವುದು ಖಂಡನೀಯ ಕೂಡಲೇ ಆತ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಜೆಡಿಎಸ್ ವರಿಷ್ಠ ದೇವೇಗೌಡ ಅವರ ಕುಟುಂಬ ಜೀತದ ಆಳುಗಳಲ್ಲ, ಅವರನ್ನು ಜಮೀರ್ ಚಂದ ಸಂಗ್ರಹಿಸಿ ಕೊಂಡುಕೊಳ್ಳಲು ಈ ಕುಟುಂಬವೂ ರಾಷ್ಟ್ರ, ರಾಜ್ಯಕ್ಕೆ ಸೇವೆ ಸಲ್ಲಿಸಿರುವ ಕುಟುಂಬವಾಗಿದೆ. ಒಬ್ಬ ರಾಜ್ಯ ಸಂಪುಟ ಸಚಿವರ ಈ ನಡೆಯನ್ನು ಖಂಡಿಸಿ ಕೂಡಲೇ ರಾಜ್ಯ ಸರ್ಕಾರವೂ ಅವರನ್ನು ವಜಾ ಮಾಡಬೇಕು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ ಆಗ್ರಹಿಸಿದರು.
ಪ್ರತಿಭಟನೆಗೂ ಮುನ್ನ ಚಪ್ಪರದಕಲ್ಲು ಸರ್ಕಲ್ ನಿಂದ ಜಿಲ್ಲಾಧಿಕಾರಿಗಳ ಆವರಣವರೆಗೂ ನೂರಾರು ಕಾರ್ಯಕರ್ತರು ಪ್ರತಿಭಟನಾ ರ‍್ಯಾಲಿ ನಡೆಸಿದರು. ಸಚಿವ ಜಮೀರ್ ಅಹಮ್ಮದ್ ಖಾನ್ ವಿರುದ್ಧ ಘೋಷಣೆ ಕೂಗಿ ಅವರ ಪ್ರತಿಕೃತಿ ದಹಿಸಿ ಆಕ್ರೋಶ ಹೊರಹಾಕಿದರು.
ಉಪವಿಭಾಗಾಧಿಕಾರಿ ದುರ್ಗಶ್ರೀ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಆರ್.ಮುನೇಗೌಡ, ಪ್ರಧಾನ ಕಾರ್ಯದರ್ಶಿ ಜಿ.ಎ. ರವೀಂದ್ರ, ಮುಖಂಡರಾದ ಅಪ್ಪಯ್ಯಣ್ಣ, ದೊಡ್ಡಸಣ್ಣೆ ಮುನಿರಾಜು, ಮಾರೇಗೌಡ, ವಕೀಲರು ಮುನಿರಾಜು, ಯುವ ಘಟಕದ ಅಧ್ಯಕ್ಷ ಟಿ .ಹೊಸಹಳ್ಳಿ ರವಿ, ಪುರಸಭೆ ಸದಸ್ಯರಾದ ನಾಗೇಶ್ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕಿನ ಜೆಡಿಎಸ್ ಕಾರ್ಯಕರ್ತರು ಭಾಗಿಯಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.