ADVERTISEMENT

ನ. 2ರಿಂದ ಪಿಡಿಒಗಳ ಧರಣಿ

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ

​ಪ್ರಜಾವಾಣಿ ವಾರ್ತೆ
Published 30 ಅಕ್ಟೋಬರ್ 2022, 4:46 IST
Last Updated 30 ಅಕ್ಟೋಬರ್ 2022, 4:46 IST
ದೊಡ್ಡಬಳ್ಳಾಪುರ ತಾಲ್ಲೂಕಿನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಇಇಒ ಶ್ರೀನಾಥಗೌಡ ಅವರಿಗೆ ಮನವಿ ಸಲ್ಲಿಸಿದರು
ದೊಡ್ಡಬಳ್ಳಾಪುರ ತಾಲ್ಲೂಕಿನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಇಇಒ ಶ್ರೀನಾಥಗೌಡ ಅವರಿಗೆ ಮನವಿ ಸಲ್ಲಿಸಿದರು   

ದೊಡ್ಡಬಳ್ಳಾಪುರ: ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನ. 2ರಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದಲ್ಲಿ ತಾಲ್ಲೂಕಿನ ಎಲ್ಲಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಭಾಗವಹಿಸಲಿದ್ದು, ತಾಲ್ಲೂಕಿನಲ್ಲಿ ಪಂಚಾಯಿತಿ ಸೇವೆಗಳಲ್ಲಿ ವ್ಯತ್ಯಯವಾಗಲಿದೆ.

ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸುವ ಕುರಿತು ಹಾಗೂ ಪಿಡಿಒಗಳ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ಗಮನಕ್ಕೆ ತರುವಂತೆ ಸಂಘದ ತಾಲ್ಲೂಕು ಘಟಕದ ಪದಾಧಿಕಾರಿಗಳು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥಗೌಡ ಅವರಿಗೆ ಮನವಿ ಸಲ್ಲಿಸಿದರು.

ನ.2 ಒಳಗಾಗಿ ಸರ್ಕಾರ ಬೇಡಿಕೆಗಳನ್ನು ಈಡೇರಿಸದಿದ್ದರೆ ಧರಣಿ ಸತ್ಯಾಗ್ರಹದಲ್ಲಿ ಅಭಿವೃದ್ಧಿ ಅಧಿಕಾರಿಗಳು ಭಾಗವಹಿಸಿ ಕುಡಿಯುವ ನೀರು ಮತ್ತು ಬೀದಿದೀಪ ನಿರ್ವಹಣೆ ಹೊರತು ಪಡಿಸಿ ಉಳಿದೆಲ್ಲಾ ಸೇವೆಗಳಲ್ಲಿ ವ್ಯತ್ಯಯವಾಗಲಿದೆ. 8 ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಪಿಡಿಒಗಳ ಹುದ್ದೆಯನ್ನು ಗ್ರೂಪ್ ‘ಬಿ’ಗೆ ಮೇಲ್ದರ್ಜೆಗೇರಿಸುವುದು, ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ನೌಕರರ ಮೇಲೆ ನಡೆಯುತ್ತಿರುವ ನಿರಂತರ ಹಲ್ಲೆಗಳನ್ನು ಖಂಡಿಸಿ ಮತ್ತು ಹಲ್ಲೆ ನಡೆಸಿದವರ ಮೇಲೆ ಗೂಂಡಾ ಕಾಯ್ದೆ ಜಾರಿ ಮಾಡಲು, ಕೋವಿಡ್‍ನಿಂದ ಮೃತಪಟ್ಟಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ತಕ್ಷಣ ಪರಿಹಾರ ಧನ ಒದಗಿಸುವುದು, ಮನರೇಗಾ ಕೂಲಿಕಾರರ ಹಾಜರಾತಿ ಪಡೆಯಲು ಬಯೋಮೆಟ್ರಿಕ್ ಜಾರಿ ಮಾಡುವುದು ಮೊದಲಾದ ಬೇಡಿಕೆಗಳ ಈಡೇರಿಕೆ ಮನವಿ ಸಲ್ಲಿಸಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.