ಹೊಸಕೋಟೆ: ಪ್ರತಿಯೊಬ್ಬ ನಾಗರಿಕರು ಮತದಾನದ ಹಕ್ಕನ್ನು ಕಡ್ಡಾಯವಾಗಿ ಚಲಾಯಿಸಬೇಕು ಎಂದು ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಆರ್.ಬಿ. ಗಿರೀಶ್ ಹೇಳಿದರು.
ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ತಾಲ್ಲೂಕು ಆಡಳಿತದಿಂದ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪ್ರಜಾಪ್ರಭುತ್ವ ವ್ಯವಸ್ಥೆ ಯಶಸ್ವಿಯಾಗಲು ಚುನಾವಣೆಗಳ ಘನತೆಯನ್ನು ಎತ್ತಿ ಹಿಡಿಯಬೇಕಿದೆ. ನಿರ್ಭೀತರಾಗಿ ಧರ್ಮ, ಜನಾಂಗ, ಜಾತಿ, ಮತ, ಭಾಷೆಯನ್ನು ಪರಿಗಣಿಸದೆ ಆಮಿಷಗಳಿಗೆ ಒಳಗಾಗದೆ ಮತ ಚಲಾಯಿಸುವ ಮೂಲಕ ಉತ್ತಮ ಜನಪ್ರತಿನಿಧಿಯನ್ನು ಆಯ್ಕೆ ಮಾಡಬೇಕು. ಇದರಿಂದ ಮಾತ್ರ ಸಂವಿಧಾನದ ಮೂಲ ಆಶಯ ಈಡೇರಲು ಸಾಧ್ಯ. ಜೊತೆಗೆ, ರಾಷ್ಟ್ರದ ಅಭಿವೃದ್ಧಿಗೂ ಸಹಕಾರಿಯಾಗಲಿದೆ ಎಂದರು.
ತಹಶೀಲ್ದಾರ್ ವಿ. ಗೀತಾ ಮಾತನಾಡಿದರು. ಸಹಾಯಕ ಸರ್ಕಾರಿ ಅಭಿಯೋಜಕಿ ಎ.ಎಂ. ಚಂದ್ರಕಲಾ, ಎಚ್.ಎಂ. ಆನಂದಕುಮಾರ್, ವಕೀಲ ಬಿ.ಎಂ. ಅನಂತಪ್ರಭಾಕರ್ ಮಾತನಾಡಿದರು. ವಕೀಲರ ಸಂಘದ ಅಧ್ಯಕ್ಷ ಕೆ.ವಿ. ಸುಬ್ರಮಣಿ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು. ವಕೀಲರ ಸಂಘದ ಪದಾಧಿಕಾರಿಗಳಾದ ಕೆ. ರಮೇಶ್, ಟಿ.ವಿ. ಆಂಜಿನಪ್ಪ, ಎಸ್. ಶ್ರೀನಿವಾಸ್, ಗ್ರೇಡ್-2 ತಹಶೀಲ್ದಾರ್ ಟಿ. ಪ್ರಭಾಕರ್, ಲಕ್ಷ್ಮಿನಾರಾಯಣ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.