ADVERTISEMENT

ಹೊಸಕೋಟೆ | ಜೆಜೆಎಂ ಕಾಮಗಾರಿ ಕಳಪೆ ಸಹಿಸಲ್ಲ: ಶಾಸಕ ಶರತ್‌ ಬಚ್ಚೇಗೌಡ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2023, 4:44 IST
Last Updated 6 ಡಿಸೆಂಬರ್ 2023, 4:44 IST
ಹೊಸಕೋಟೆ ತಾಲ್ಲೂಕಿನ ತಿರುವರಂಗ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆಗೆ ಶಾಸಕ ಶರತ್ ಬಚ್ಚೇಗೌಡ ಭೂಮಿಪೂಜೆ ನೆರವೇರಿಸಿದರು.
ಹೊಸಕೋಟೆ ತಾಲ್ಲೂಕಿನ ತಿರುವರಂಗ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆಗೆ ಶಾಸಕ ಶರತ್ ಬಚ್ಚೇಗೌಡ ಭೂಮಿಪೂಜೆ ನೆರವೇರಿಸಿದರು.   

ಹೊಸಕೋಟೆ: ‘ಪ್ರತಿಯೊಂದು ಮನೆಗೂ ನೀರಿನ ಸಂಪರ್ಕ ಕಲ್ಪಸುವ ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿ ನಡೆಸುವ ಗುತ್ತಿಗೆದಾರರು ಗುಣಮಟ್ಟ ಕಾಯ್ದುಕೊಳ್ಳದಿದ್ದರೆ ನಾನು ಸಹಿಸುವುದಿಲ್ಲ’ ಎಂದು ಶಾಸಕ ಶರತ್ ಬಚ್ಚೇಗೌಡ ಎಚ್ಚರಿಕೆ ನೀಡಿದರು.

ತಾಲ್ಲೂಕಿನ ತಿರುವರಂಗ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.

ಕಾಮಗಾರಿ ಗುಣಮಟ್ಟ ಕಾಯ್ದುಕೊಳ್ಳುವಲ್ಲಿ ವಿಫಲವಾದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ತಾಲ್ಲೂಕಿನಲ್ಲಿ ಜೆಜೆಎಂ ಕಾಮಗಾರಿ ಪೂರ್ಣಗೊಂಡಿರುವ ಕೆಲವು ಗ್ರಾಮಗಳಲ್ಲಿ ಕಾಮಗಾರಿಯು ಕಳಪೆಯಾಗಿದ್ದು, ಸಾರ್ವಜನಿಕರಿಂದಲೂ ದೂರುಗಳು ಬಂದಿವೆ. ಆದ್ದರಿಂದ ಕಾಮಗಾರಿ ನಡೆಸುವಾಗ ಸ್ಥಳೀಯ ಮುಖಂಡರಲ್ಲಿ ಸಮನ್ವಯತೆ ಸಾಧಿಸಿ ಗುಣಮಟ್ಟದ ಕಾಮಗಾರಿ ನಡೆಸಬೇಕು’ ಎಂದು ಸೂಚಿಸಿದರು.

ADVERTISEMENT

ಗುತ್ತಿಗೆದಾರರ ನಿರ್ಲಕ್ಷ್ಯದಿಂದ ರಸ್ತೆ, ಚರಂಡಿಗಳು ಹಾಳಾಗಿವೆ. ಎಲ್ಲೆಂದರಲ್ಲೆ ಕಾಂಕ್ರಿಟ್ ತ್ಯಾಜ್ಯ ಗುಡ್ಡೆ ಹಾಕಲಾಗಿದೆ. ಕಾಮಗಾರಿ ವಿಳಂಬದ ಜೊತೆಗೆ ಕಾಮಗಾರಿಗಳಿಗೆ ಬಳಸುತ್ತಿರುವ ಸಾಮಗ್ರಿಗಳು ಸಹ ಕಳಪೆಯಿಂದ ಕೂಡಿವೆ. ಅಧಿಕಾರಿಗಳು ಕಂಡು ಕಾಣದಂತೆ ವರ್ತಿಸುತ್ತಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ. ಕಳಪೆ ಕಾಮಗಾರಿ ಕಂಡು ಬಂದಲ್ಲಿ ಗುತ್ತಿಗೆದಾರರ ವಿರುದ್ಧ ಸಾರ್ವಜನಿಕರು ದೂರು ಸಲ್ಲಿಸಿದರೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದರು.

ಮೀಟರ್ ಆತಂಕ ಬೇಡ: ಗ್ರಾಮದ ಎಲ್ಲಾ ಮನೆಗಳಿಗೂ ಸಮಾನವಾಗಿ ನೀರು ಹಂಚಿಕೆ ಮಾಡುವ ನಿಟ್ಟಿನಲ್ಲಿ ಮೀಟರ್ ಅಳವಡಿಸಲಾಗಿದೆ. ಮೀಟರ್ ಅಳವಡಿಕೆ ಮಾಡಿರುವ ಬಗ್ಗೆ ಗ್ರಾಮಸ್ಥರು ಆತಂಕ ಬೇಡ. ಅದಕ್ಕೆ ಯಾವುದೇ ಹೆಚ್ಚುವರಿ ಹಣ ಕಟ್ಟುವ ಅಗತ್ಯವಿಲ್ಲ ಎಂದರು.

ಗ್ರಾ.ಪಂ ಅಧ್ಯಕ್ಷ ಯಲ್ಲಪ್ಪ, ಉಪಾಧ್ಯಕ್ಷೆ ಸಂಧ್ಯಾರಾಣಿ, ಬಿ.ಎಂ.ಪ್ರಕಾಶ್, ತತ್ತನೂರು ಮಂಜುನಾಥ್, ಟಿಕೆಆರ್ ಕೃಷ್ಣಾರೆಡ್ಡಿ, ಮಾಜಿ ಗ್ರಾ.ಪಂ ಅಧ್ಯಕ್ಷ ಬ್ಯಾಲಹಳ್ಳಿ ಶ್ರೀನಿವಾಸ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.