ADVERTISEMENT

ಕಾರ್ಯಕರ್ತನೂ ನಾಯಕನಾಗಲಿ: ನಳೀನ್ ಕುಮಾರ್ ಕಟೀಲ್

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2020, 14:12 IST
Last Updated 3 ಡಿಸೆಂಬರ್ 2020, 14:12 IST
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಸ್ವರಾಜ್ಯ ಸಮಾವೇಶವನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಉದ್ಘಾಟಿಸಿದರು
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಸ್ವರಾಜ್ಯ ಸಮಾವೇಶವನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಉದ್ಘಾಟಿಸಿದರು   

ಹೊಸಕೋಟೆ: ‘ನಮ್ಮನ್ನು ಚುನಾವಣೆಗಳಲ್ಲಿ ಗೆಲ್ಲಿಸುವ ನಮ್ಮ ಸಾಮಾನ್ಯ ಕಾರ್ಯಕರ್ತರು ಗ್ರಾಮ ಪಂಚಾಯತಿಗಳಲ್ಲಿ ಗೆದ್ದು ನಾಯಕನಾಗಬೇಕು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್‍ ಕಟೀಲ್ ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಸ್ವರಾಜ್ಯ ಸಮಾವೇಶದಲ್ಲಿ ಭಾಗವಹಿಸಲು ನಗರಕ್ಕೆ ಬಂದಾಗ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.

‘ಮೂರು ತಿಂಗಳಿನಿಂದ ಆರು ತಂಡಗಳಲ್ಲಿ ರಾಜ್ಯದಾದ್ಯಂತ ಪ್ರವಾಸ ಮಾಡಿ ಗ್ರಾಮ ಪಂಚಾಯತಿ ಚುನಾವಣೆಗೆ ಸಿದ್ಧತೆ ಮಾಡಿಕೊಂಡಿದ್ದೇವೆ. ಲೋಕಸಭೆ, ವಿಧಾನಸಭೆ ಚುನಾವಣೆಗಳಲ್ಲಿ ಪಕ್ಷಕ್ಕಾಗಿ ದುಡಿಯುವ ಕಾರ್ಯಕರ್ತರು ಜನ ಪ್ರತಿನಿಧಿಗಳಾಗಬೇಕು’ ಎಂದರು.

ADVERTISEMENT

‘ಪ್ರಧಾನ ಮಂತ್ರಿ ನರೇಂದ್ರ ಮೋದಿ 14ನೇ ಹಣಕಾಸು ಯೋಜನೆಯಲ್ಲಿ ದೇಶದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ನೇರವಾಗಿ ಹಣವನ್ನು ಬಿಡುಗಡೆ ಮಾಡುವ ಮೂಲಕ ಗ್ರಾಮ ಪಂಚಾಯಿತಿ
ಗಳನ್ನು ಅಭಿವೃದ್ಧಿ ಮಾಡುವ ಕೆಲಸವನ್ನು ಮಾಡಿದ್ದಾರೆ’ ಎಂದರು.

‘ಗಾಂಧಿ ಕನಸಿನ ಗ್ರಾಮ ಸ್ವರಾಜ್ಯವನ್ನು ಪ್ರಧಾನ ಮಂತ್ರಿ ನನಸು ಮಾಡುತ್ತಿದ್ದಾರೆ. ಆತ್ಮನಿರ್ಭರ್‌ ಭಾರತದ ಕಲ್ಪನೆಯಲ್ಲಿ ಗ್ರಾಮಗಳಲ್ಲಿ ಉದ್ಯೋಗ ಸೃಷ್ಟಿಮಾಡಿ ಯುವಕರು ಉದ್ಯೋಗಕ್ಕಾಗಿ ಗ್ರಾಮಗಳಿಂದ ವಲಸೆ ಬರುವುದನ್ನು ತಡೆಯುವ ಪ್ರಯತ್ನ ಮಾಡುತ್ತಿದ್ದಾರೆ. ಗ್ರಾಮಗಳು ಈಗ ವೃದ್ದಾಶ್ರಮಗಳಾಗುತ್ತಿದ್ದು ಯುವಕರು ಪಟ್ಟಣದತ್ತ ಮುಖಮಾಡುತ್ತಿರುವುದನ್ನು ಮುಂದಿನ ದಿನಗಳಲ್ಲಿ ತಪ್ಪಿಸಲಾಗುತ್ತದೆ’ ಎಂದರು.

ಪ್ರಾರಂಭೋತ್ಸವ: ‘ಇಂದಿನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಸ್ವರಾಜ್ಯ ಸಮಾವೇಶವು ಗ್ರಾಮ ಪಂಚಾಯಿತಿ ಚುನಾವಣೆಗಳಿಗೆ ಪ್ರಾರಂಭೋತ್ಸವವಾಗಿದೆ. ಜಿಲ್ಲೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲುವುದಕ್ಕೆ ಪ್ರಯತ್ನಿಸಲಾಗುತ್ತದೆ’ ಎಂದು ವಿಧಾನ ಪರಿಷತ್ ಸದಸ್ಯ ಎಂ.ಟಿ.ಬಿ. ನಾಗರಾಜ್ ತಿಳಿಸಿದರು.

‘ಗ್ರಾಮ ಪಂಚಾಯಿತಿ ಚುನಾವಣೆಗಳು ರಾಜಕೀಯ ಪಕ್ಷಕ್ಕೆ ಅಡಿಪಾಯವಿದ್ದಂತೆ. ಅಲ್ಲಿ ನಮ್ಮ ಬೆಂಬಲಿತ ಅಭ್ಯರ್ಥಿಗಳು ಗೆದ್ದರೆ ಮುಂದಿನ ದಿನಗಳಲ್ಲಿ ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಮತ್ತು ವಿಧಾನ ಸಭಾ ಚುನಾವಣೆಗಳನ್ನು ಗೆಲ್ಲಬಹುದು’ ಎಂದರು.

ಸಂಸದೆ ಶೋಭ ಕರಂದ್ಲಾಜೆ ಮಾತನಾಡಿ, ‘ಪ್ರತಿ ಮನೆಗೆ ಶೌಚಾಲಯ, ಗೃಹಿಣಿಯರಿಗೆ ಅನಿಲ ಭಾಗ್ಯ, ಆಯುಷ್ಮಾನ್ ಭಾರತ್ ನಂತರ ಜನಪರ ಯೋಜನೆಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಅದನ್ನು ಗ್ರಾಮಗಳ ಪ್ರತಿ ಮನೆಗೆ ತಿಳಿಸಿ ತಮ್ಮ ಬೆಂಬಲಿತ ಅಭ್ಯರ್ಥಿಗಳು ಗೆಲ್ಲುವಂತೆ ಮಾಡಬೇಕು’ ಎಂದು ಕರೆ ನೀಡಿದರು.

ಉಪ ಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ್, ಕೊಲಾರ ಸಂಸದ ಮುನಿಸ್ವಾಮಿ, ರಾಜ್ಯ ಕಾರ್ಯದರ್ಶಿ ಮಹೇಶ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಎ.ವಿ.ಎನ್. ನಾರಾಯಣಸ್ವಾಮಿ, ಹೊಸಕೋಟೆ ನಗರ ಅಧ್ಯಕ್ಷ ಜಯರಾಜ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.