ADVERTISEMENT

ದೌರ್ಜನ್ಯ ಪ್ರಕರಣ: ಶೀಘ್ರ ಕ್ರಮಕ್ಕೆ ಡಿ.ಸಿ ಸೂಚನೆ

​ಪ್ರಜಾವಾಣಿ ವಾರ್ತೆ
Published 28 ಜೂನ್ 2024, 15:52 IST
Last Updated 28 ಜೂನ್ 2024, 15:52 IST
ದೇವನಹಳ್ಳಿಯ ಜಿಲ್ಲಾಡಳಿತ ಭವನದಲ್ಲಿ ನಡೆದ ಪ್ರಸಕ್ತ ಸಾಲಿನ 2ನೇ ತ್ರೈಮಾಸಿಕ ಜಿಲ್ಲಾ ಮಟ್ಟದ ಜಾಗೃತಿ ಉಸ್ತುವಾರಿ ಸಮಿತಿ ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು.
ದೇವನಹಳ್ಳಿಯ ಜಿಲ್ಲಾಡಳಿತ ಭವನದಲ್ಲಿ ನಡೆದ ಪ್ರಸಕ್ತ ಸಾಲಿನ 2ನೇ ತ್ರೈಮಾಸಿಕ ಜಿಲ್ಲಾ ಮಟ್ಟದ ಜಾಗೃತಿ ಉಸ್ತುವಾರಿ ಸಮಿತಿ ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು.   

ದೇವನಹಳ್ಳಿ: ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರ ಮೇಲಿನ ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ವಿಳಂಬ ಮಾಡದೇ ಸಂಬಂಧಿಸಿದ ಅಧಿಕಾರಿಗಳು ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎನ್. ಶಿವಶಂಕರ್ ಸೂಚನೆ ನೀಡಿದರು.

ತಾಲ್ಲೂಕಿನ ಬೀರಸಂದ್ರದಲ್ಲಿರುವ ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ನಡೆದ ಪ್ರಸಕ್ತ ಸಾಲಿನ 2ನೇ ತ್ರೈಮಾಸಿಕ ಜಿಲ್ಲಾ ಮಟ್ಟದ ಜಾಗೃತಿ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಯಾವುದೇ ರೀತಿಯ ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ಶೀಘ್ರವಾಗಿ ಪ್ರಕರಣ ದಾಖಲಿಸಬೇಕು. ಆರೋಪಿಗಳ ವಿರುದ್ಧ ಕ್ರಮ ಕೈಗೊಂಡು, ಮುನ್ನೆಚ್ಚರಿಕಾ ಕ್ರಮವಾಗಿ ಇಂತಹ ಘಟನೆಗಳು ಸಂಭವಿಸದಂತೆ ಅಧಿಕಾರಿಗಳು ಎಚ್ಚರವಹಿಸಬೇಕು ಎಂದು ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ADVERTISEMENT

ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ಕಾಯ್ದೆಯಲ್ಲಿ ಪ್ರಕರಣಗಳು ದಾಖಲಾದ ಕೂಡಲೇ ಎಫ್ಐಆರ್ ದಾಖಲಿಬೇಕು. ಎಫ್‌ಐಆರ್‌ ಆಧಾರದ ಮೇಲೆ ಪರಿಹಾರ ಧನವನ್ನು ಮಂಜೂರು ಮಾಡಬೇಕಾಗಿರುವುದರಿಂದ ಪ್ರಥಮ ವರ್ತಮಾನ ವರದಿ ಹಾಗೂ ಇತರ ದಾಖಲಾತಿಗಳನ್ನು ಜಿಲ್ಲಾ ತಾಲ್ಲೂಕು ಕಚೇರಿಗಳಿಗೆ ಇ-ಮೇಲ್ ಮೂಲಕ ಕಳುಹಿಸಬೇಕು ಎಂದು ತಿಳಿಸಿದರು.

ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ದಾಖಲಾದ ಪ್ರಕರಣ ತನಿಖೆಯಲ್ಲಿ ಒಳ್ಳೆಯ ಪ್ರಗತಿಯಾಗಿದೆ ಎಂದರು.

ಎಲ್ಲಾ ತಾಲ್ಲೂಕುಗಳಲ್ಲಿ ತಾಲ್ಲೂಕುಮಟ್ಟದ ಕುಂದುಕೊರತೆ ಸಭೆಯನ್ನು ಪ್ರತಿ 3 ತಿಂಗಳಿಗೊಮ್ಮೆ ವರ್ಷದಲ್ಲಿ ಒಟ್ಟು 4 ಸಭೆಗಳನ್ನು ನಡೆಸಬೇಕು. ಈ ವರ್ಷದಲ್ಲಿ  ಬಾಕಿ ಉಳಿದಿರುವ ಸಭೆಗಳನ್ನು ಶೀಘ್ರವಾಗಿ ನಡೆಸಬೇಕು. ಉಪವಿಭಾಗದ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಗಳನ್ನು ಕಡ್ಡಾಯವಾಗಿ ಮೂರು ತಿಂಗಳಿಗೊಮ್ಮೆ ವರ್ಷದಲ್ಲಿ ಒಟ್ಟು ನಾಲ್ಕು ಸಭೆಗಳನ್ನು ನಡೆಸಬೇಕು. ಈಗಾಗಲೇ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಒಂದು ಸಭೆಯನ್ನು ನಡೆಸಲಾಗಿದ್ದು, ಇನ್ನು ಬಾಕಿ ಇರುವ 3 ಸಭೆಗಳು ನಡೆಸಲು ಸೂಚಿಸಿದರು.

ಜಿಲ್ಲೆಯಲ್ಲಿ ದೌರ್ಜನ್ಯ ಪ್ರಕರಣಗಳು ಹಾಗೂ ಗಲಭೆ/ಗುಂಪು ಗಲಭೆಗಳು ಹೆಚ್ಚಾಗಿ ಕಂಡುಬಂದ ಹಳ್ಳಿಗಳನ್ನು ಗುರುತಿಸಿ ತಹಶೀಲ್ದಾರ್ ಅವರ ಅಧ್ಯಕ್ಷತೆಯಲ್ಲಿ ಶಾಂತಿಸಭೆ ನಡೆಸಲು ನಿರ್ದೇಶನ‌ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎನ್. ಅನುರಾಧಾ, ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಾಗಾರಾಜು, ಉಪ ವಿಭಾಗಾಧಿಕಾರಿ ಶ್ರೀನಿವಾಸ್, ದೊಡ್ಡಬಳ್ಳಾಪುರ ತಾಲ್ಲೂಕು ತಹಶೀಲ್ದಾರ್ ವಿದ್ಯಾ ವಿಭಾ ರಾಥೋಡ್, ಹೊಸಕೋಟೆ ತಾಲ್ಲೂಕು ತಹಶೀಲ್ದಾರ್ ವಿಜಯ ಕುಮಾರ್, ನಾಲ್ಕು ತಾಲ್ಲೂಕುಗಳ ಡಿವೈಎಸ್ಪಿಗಳು, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಪ್ರೇಮಾ ಟಿ.ಎಲ್‌.ಎಸ್, ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.