ದೊಡ್ಡಬಳ್ಳಾಪುರ:ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶನಿವಾರ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಆಚರಿಸಲಾಯಿತು.
ತಹಶೀಲ್ದಾರ್ ಮೋಹನಕುಮಾರಿ ಮಾತನಾಡಿ, ಇಡೀ ದೇಶದಲ್ಲಿ ಮೈಸೂರು ಸಂಸ್ಥಾನ ಮಾದರಿಯಾದುದು ಎಂದು ಹೆಸರುವಾಸಿಯಾಗಲು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆ ಅಪಾರವಾಗಿದೆ ಎಂದರು.
ಅವರು ಸಾಮಾಜಿಕ ಕಾನೂನುಗಳ ಹರಿಕಾರರಾಗಿದ್ದರು. ಕಲೆ, ಸಾಹಿತ್ಯ, ಸಂಸ್ಕೃತಿಗೆ ಅವರು ನೀಡಿರುವ ಕೊಡುಗೆ ಅನನ್ಯವಾದುದು. ಸ್ವಾತಂತ್ರ್ಯ ಪೂರ್ವದಲ್ಲಿಯೇ ಮೀಸಲಾತಿ ಪರಿಕಲ್ಪನೆಗೆ ಮುನ್ನುಡಿ ಬರೆದಿದ್ದರು. ಮಹಿಳೆಯರಿಗೆ ನೀಡುತ್ತಿದ್ದ ಸ್ಥಾನಗಳು ಇಡೀ ದೇಶದ ಗಮನ ಸೆಳೆದಿದ್ದವು. ಪ್ರಜಾಪ್ರತಿನಿಧಿ ಸಭೆಯ ಮೂಲಕ
ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಂದೇ ನಾಂದಿ ಹಾಡಿದ್ದರು ಎಂದು ಹೇಳಿದರು.
ಇಂತಹ ದೊರೆಗಳು ನಾಡಿನಲ್ಲಿ ಹುಟ್ಟಿದ್ದು ನಮಗೆಲ್ಲರಿಗೆ ಹೆಮ್ಮೆಯ ಸಂಗತಿ. ಮೈಸೂರು ಪ್ರಾಂತ್ಯದಲ್ಲಿ ಇಂದಿಗೂ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರನ್ನು ಪೂಜನೀಯ ಸ್ಥಾನದಲ್ಲಿ ನೋಡಲಾಗುತ್ತದೆ ಎಂದರು.
ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ)ಯ ರಾಜ್ಯ ಕಾರ್ಯದರ್ಶಿ ರಾಜಘಟ್ಟ ರವಿ ಮಾತನಾಡಿ, ಒಡವೆಗಳನ್ನು ಒತ್ತೆ ಇಟ್ಟು ಕನ್ನಂಬಾಡಿ ಕಟ್ಟೆ ನಿರ್ಮಾಣ ಮಾಡಿದ ಮಹನೀಯರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಮೈಸೂರು ಬ್ಯಾಂಕ್, ಕನ್ನಡ ಸಾಹಿತ್ಯ ಪರಿಷತ್, ಸಹಕಾರ ಸಂಘಗಳನ್ನು ಸ್ಥಾಪಿಸಿದರು ಎಂದು ಸ್ಮರಿಸಿದರು.
ಮಹಾತ್ಮ ಗಾಂಧೀಜಿ ಅವರಿಂದಲೆ ‘ಇದೇ ನನ್ನ ಕನಸಿನ ರಾಮರಾಜ್ಯ’ ಎಂಬ ಪ್ರಶಂಸೆಗೆ ಒಳಗಾದ, ಬ್ರಿಟಿಷರಿಂದ ಇಡೀ ದೇಶಕ್ಕೆ ಮಾದರಿ ಸಂಸ್ಥಾನ ಎಂದು ಹಿರಿಮೆಗಳಿಸಿದ್ದು ಅವರ ಹೆಗ್ಗಳಿಕೆ. ಏಷ್ಯಾ ಖಂಡ ಹಾಗೂ ದೇಶದ ಹಲವು ಪ್ರಥಮಗಳಿಗೆ ಸಾಕ್ಷಿಯಾದ ಮಹನೀಯರಲ್ಲಿ ಅವರು ಅಗ್ರಸ್ಥಾನದಲ್ಲಿ ನಿಲ್ಲುತ್ತಾರೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕನ್ನಡ ಪಕ್ಷದ ಅಧ್ಯಕ್ಷ ಸಂಜೀವ್ ನಾಯಕ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಕಾರ್ಯದರ್ಶಿ ಕೆ.ಆರ್. ರವಿಕಿರಣ್, ಮುಖಂಡ ರಂಗಸ್ವಾಮಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.