ಆನೇಕಲ್: ಪ್ರೇಯಸಿ ತಾಯಿಯ ಚಿಕಿತ್ಸೆ ಮತ್ತು ವಿಲಾಸಿ ಜೀವನಕ್ಕಾಗಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಜಿಗಣಿ ಪೊಲೀಸರು, 50 ಗ್ರಾಂ ಚಿನ್ನ ಹಾಗೂ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತನನ್ನು ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನ ಹುಲ್ಲೂರು ನಿವಾಸಿ ಸೈಯದ್ ಬಾಳಾಸಾಬ್ ನದಾಫ್ (25) ಎಂದು ಗುರುತಿಸಲಾಗಿದೆ.
ಸೈಯದ್ ಡ್ಯಾನ್ಸ್ ಮಾಸ್ಟರ್ ಆಗಿದ್ದ ಎನ್ನಲಾಗಿದೆ.
ಆಗಸ್ಟ್ ತಿಂಗಳಿನಲ್ಲಿ ಜಿಗಣಿಯ ಸತ್ತಾರ್ ಸಾಬ್ ದಿಣ್ಣೆಯಲ್ಲಿ ಮಹಿಳೆಯೊಬ್ಬರು ತನ್ನ ಚಿನ್ನದ ಸರ ಕಳ್ಳತನವಾಗಿದೆ ಎಂದು ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ದೂರು ಆಧರಿಸಿ ಜಿಗಣಿ ಸರ್ಕಲ್ ಇನ್‌ಸ್ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ ತನಿಖೆ ಪ್ರಾರಂಭಿಸಲಾಗಿತ್ತು. ಸಿಸಿ ಟಿವಿ ದೃಶ್ಯ ಆಧರಿಸಿ ಪೊಲೀಸರು ಆರೋಪಿಯ ಬಂಧನಕ್ಕೆ ಕಾರ್ಯಾಚರಣೆ ಕೈಗೊಂಡಿದ್ದರು.
ಸೈಯದ್ ವಿರುದ್ಧ ಬೆಂಗಳೂರು ನಗರ, ತುಮಕೂರು, ರಾಮನಗರ, ದಾವಣಗೆರೆ ಜಿಲ್ಲೆಗಳ ವಿವಿಧ ಪೊಲೀಸ್ ಠಾಣೆಗಳಲ್ಲಿ ಕಳ್ಳತನ ಪ್ರಕರಣಗಳು ದಾಖಲಾಗಿವೆ. ಸೈಯದ್ ವಿಲಾಸಿ ಜೀವನ ನಡೆಸಲು ಮತ್ತು ತನ್ನ ಪ್ರೇಯಸಿಯ ಖರ್ಚುಗಳನ್ನು ನೋಡಿಕೊಳ್ಳಲು ಕಳವು ಮಾಡುತ್ತಿದ್ದ ಎನ್ನಲಾಗಿದೆ. ಈತನ ಪ್ರೇಯಸಿ ತಾಯಿಗೆ ಹೃದಯ ಸಂಬಂಧಿ ಕಾಯಿಲೆಯಿದ್ದು, ಚಿಕಿತ್ಸೆಗಾಗಿ ಸರಗಳ್ಳತನ ಮಾಡುತ್ತಿದ್ದ ಎಂದು ವಿಚಾರಣೆ ವೇಳೆ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಗಣಿ ಪೊಲೀಸ್ ಇನ್‌ಸ್ಪೆಕ್ಟರ್ ಬಿ.ಎಸ್.ಮಂಜುನಾಥ್, ಸಬ್ ಇನ್‌ಸ್ಪೆಕ್ಟರ್‌ಗಳಾದ ಶಿವಲಿಂಗ ನಾಯಕ್, ಶಬಾನಾ ಯಾಸೀನ್, ಸಿಬ್ಬಂದಿ ಆನಂದ್, ಪರ್ವೇಜ್, ವೆಂಕಟೇಶ್, ಚನ್ನಬಸವ ನಾಯಕ್, ಮಂಜುನಾಥ್, ಗುರುರಾಜ ತಂಡದಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.