ಆನೇಕಲ್ : ತಾಲ್ಲೂಕಿಗೆ ಟ್ರಾಫಿಕ್ ಪೊಲೀಸ್ ಠಾಣೆ ಮಂಜೂರು ಮಾಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಶಾಸಕ ಬಿ.ಶಿವಣ್ಣ ಹೇಳಿದರು.
ತಾಲ್ಲೂಕಿನ ದೊಮ್ಮಸಂದ್ರ ಸಮೀಪದ ಮುತ್ತಾನಲ್ಲೂರು ಕ್ರಾಸ್‌ನಲ್ಲಿ ಅಳವಡಿಸಲಾಗಿರುವ ಸಂಚಾರ ದೀಪ ವ್ಯವಸ್ಥೆಗೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು.
ತಾಲ್ಲೂಕಿನಲ್ಲಿ ಐದು ಕೈಗಾರಿಕ ಪ್ರದೇಶಗಳಿವೆ. ತಾಲ್ಲೂಕಿನ ಚಂದಾಪುರ, ಹೆಬ್ಬಗೋಡಿ, ಅತ್ತಿಬೆಲೆ, ಸರ್ಜಾಪುರ, ದೊಮ್ಮಸಂದ್ರ ಪ್ರದೇಶಗಳಲ್ಲಿ ಪ್ರತಿನಿತ್ಯ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ. ಸಂಚಾರ ಸಮಸ್ಯೆಗೆ ಶಾಶ್ವತವಾದ ಪರಿಹಾರ ಕಲ್ಪಿಸಲು ಪ್ರಾಮಾಣಿಕವಾಗಿ ಸ್ಪಂದಿಸಲಾಗುವುದು ಎಂದು ಹೇಳಿದರು.
ರಸ್ತೆ ನಿಯಮ ಪಾಲಿಸುವುದರಿಂದ ಅಪಘಾತ ಕಡಿಮೆಯಾಗುತ್ತದೆ. ರಸ್ತೆಯಲ್ಲಿ ಸಂಚರಿಸುವ ಪ್ರತಿಯೊಬ್ಬರ ರಸ್ತೆ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು. ದೊಮ್ಮಸಂದ್ರ ರಸ್ತೆ ಇತ್ತೀಚಿನ ದಿನಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಸಂಚಾರ ದೀಪ ಅಳವಡಿಸಿರುವುದರಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.
ಪೊಲೀಸ್ ಇಲಾಖೆ ಅವಶ್ಯಕತೆಯಿರುವೆಡೆ ಪೊಲೀಸ್ ಚೌಕಿಯನ್ನು ಸ್ಥಾಪಿಸಿ ಸಾರ್ವಜನಿಕರ ಸುಗಮ ಸಂಚಾರ ಮತ್ತು ಕಾನೂನು ಸುವ್ಯವಸ್ಥೆ ಪಾಲನೆಗೆ ಹೆಚ್ಚಿನ ಒತ್ತು ನೀಡಬೇಕು ಎಂದರು.
ಸರ್ಜಾಪುರ ಪೊಲೀಸ್ ಠಾಣೆ ಸರ್ಕಲ್ ಇನ್‌ಸ್ಪೆಕ್ಟರ್ ನವೀನ್ ಕುಮಾರ್, ದೊಮ್ಮಸಂದ್ರ ಗ್ರಾಮ ಪಂಚಾಯಿತಿ ಅಧ್ಯಕ್ಷ ನರೇಶ್, ಉಪಾಧ್ಯಕ್ಷೆ ಜಯಲಕ್ಷ್ಮೀ ನಾಗರಾಜು, ಮಹಿಳಾ ಕಾಂಗ್ರೆಸ್ ತಾಲ್ಲೂಕು ಅಧ್ಯಕ್ಷ ಟಿ.ಸಿ.ಹಳ್ಳಿ ಸುಶೀಲಮ್ಮ, ನಾರಾಯಣಸ್ವಾಮಿ ಮೊದಲಿಯಾರ್, ವಿಕಾಸ್ ಇದ್ದರು.
ದೊಮ್ಮಸಂದ್ರದವರೆಗೆ ಮೆಟ್ರೊ ವಿಸ್ತರಣೆ
ದೊಮ್ಮಸಂದ್ರ ಬೆಂಗಳೂರು ನಗರಕ್ಕೆ ಹೊಂದಿಕೊಂಡಿದ್ದು ಮುಂದಿನ ದಿನಗಳಲ್ಲಿ ನಗರಗಳಲ್ಲಿ ದೊರೆಯುವ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ದೊಮ್ಮಸಂದ್ರದವರೆಗೆ ಮೆಟ್ರೊ ವಿಸ್ತರಣೆ ಚರ್ಚೆಯಲ್ಲಿದೆ. ಇದರಿಂದಾಗಿ ಈ ಪ್ರದೇಶ ಮತ್ತಷ್ಟು ಅಭಿವೃದ್ಧಿಯಾಗಲಿದೆ ಎಂದು ಶಾಸಕ ಬಿ.ಶಿವಣ್ಣ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.