ಬೆಳಗಾವಿ ತಾಲ್ಲೂಕಿನ ಹಲಗಾದಲ್ಲಿ ಬುಧವಾರ ಗೃಹಲಕ್ಷ್ಮಿ ಯೋಜನೆ ಅದಾಲತ್‍ಗೆ ಚಾಲನೆ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಯೋಜನೆ ಫಲಾನುಭವಿಗಳ ಸಮಸ್ಯೆ ಆಲಿಸಿದರು
ಬೆಳಗಾವಿ: ‘ಗೃಹಲಕ್ಷ್ಮಿ ಯೋಜನೆಯಿಂದ ಯಾವ ಫಲಾನುಭವಿಯೂ ವಂಚಿತರಾಗಬಾರದು ಎಂದು ರಾಜ್ಯದ ಎಲ್ಲ ಗ್ರಾಮ ಪಂಚಾಯ್ತಿಗಳಲ್ಲಿ ಇದೇ 27ರಿಂದ 29ರವರೆಗೆ ಅದಾಲತ್ ಹಮ್ಮಿಕೊಳ್ಳಲಾಗಿದೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.
ತಾಲ್ಲೂಕಿನ ಹಲಗಾದಲ್ಲಿ ಗೃಹಲಕ್ಷ್ಮಿ ಯೋಜನೆಯ ಅದಾಲತ್‍ಗೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು.
‘ಗೃಹಲಕ್ಷ್ಮಿ ಯೋಜನೆ ಅನುಷ್ಠಾನದಲ್ಲಿ ಉಂಟಾಗಿರುವ ತಾಂತ್ರಿಕ ಸಮಸ್ಯೆ ನಿವಾರಿಸಿ, ಸ್ಥಳದಲ್ಲೇ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಅದಾಲತ್ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ಸೂಚನೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಯಾವುದೇ ಸಮಸ್ಯೆಗಳಿದ್ದರೆ, ಫಲಾನುಭವಿಗಳು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯ್ತಿ ಕಚೇರಿಗೆ ತೆರಳಿ ಪರಿಹಾರ ಕಂಡುಕೊಳ್ಳಬೇಕು’ ಎಂದು ಸೂಚಿಸಿದರು.
‘ಗೃಹಲಕ್ಷ್ಮಿ ಯೋಜನೆಯಡಿ ಬೆಳಗಾವಿ ಜಿಲ್ಲೆಯಲ್ಲಿ ಸುಮಾರು 11 ಲಕ್ಷ ಫಲಾನುಭವಿಗಳಿದ್ದಾರೆ. ಅವರಿಗೆ ತಿಂಗಳಿಗೆ ₹202 ಕೋಟಿ ನೀಡಲಾಗುತ್ತಿದೆ. ಹಲಗಾದಲ್ಲಿ 1,600 ಫಲಾನುಭವಿಗಳಿದ್ದು, ತಮಗೆ ಮೂರು ತಿಂಗಳಿಂದ ಹಣ ಬಂದಿಲ್ಲ ಕೆಲವರು ಎಂದು ಸಮಸ್ಯೆ ಹೇಳಿಕೊಂಡಿದ್ದಾರೆ. ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯಾಗದಿರುವುದು ಮತ್ತಿತರ ತಾಂತ್ರಿಕ ಕಾರಣಗಳಿಂದ ಅವರಿಗೆ ಹಣ ಹೋಗಿಲ್ಲ. ಅದಾಲತ್‌ನಲ್ಲಿ ಈ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುವುದು’ ಎಂದರು.
ಫಲಾನುಭವಿಗಳ ಸಮಸ್ಯೆ ಆಲಿಸಿದ ಸಚಿವೆ, ಕೆಲವೊಂದಕ್ಕೆ ಸ್ಥಳದಲ್ಲೇ ಪರಿಹಾರ ಒದಗಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಭಾರ ಉಪನಿರ್ದೇಶಕಿ ರೇವತಿ ಇತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.