ಬೆಳಗಾವಿ: ಖಾನಾಪುರದ ಮಾಜಿ ಶಾಸಕ ಅರವಿಂದ ಪಾಟೀಲ ಬಿಜೆಪಿಗೆ ಅಧಿಕೃತವಾಗಿ ಬೆಂಗಳೂರಿನಲ್ಲಿ ಸೋಮವಾರ ಸೇರ್ಪಡೆಯಾಗಿದ್ದಾರೆ.
ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಮೊದಲಾದವರು ಪಕ್ಷದ ಧ್ವಜ ನೀಡಿ ಬರಮಾಡಿಕೊಂಡಿದ್ದಾರೆ.
ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಬೆಂಬಲಿತ ಅಭ್ಯರ್ಥಿಯಾಗಿ (ಪಕ್ಷೇತರ) ಸ್ಪರ್ಧಿಸಿ ಅವರು ಒಮ್ಮೆ ಶಾಸಕರಾಗಿದ್ದರು. ಹೋದ ವಿಧಾನಸಭೆ ಚುನಾವಣೆಯಲ್ಲಿ ಸೋತ ಬಳಿಕ ಎಂಇಎಸ್ ಜೊತೆಗೆ ಅಂತರ ಕಾಯ್ದುಕೊಂಡಿದ್ದರು. ಬಿಜೆಪಿ ಕಾರ್ಯಕ್ರಮಗಳಲ್ಲಿ ಹಾಗೂ ಆ ಪಕ್ಷದ ಮುಖಂಡರೊಂದಿಗೆ ಗುರುತಿಸಿಕೊಂಡಿದ್ದರು. ಬಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲೂ ಬಿಜೆಪಿ ಬೆಂಬಲಿತರ ಪರವಾಗಿ ಕೆಲಸ ಮಾಡಿದ್ದರು. ಅವರಿಗೆ ಬಿಜೆಪಿ ನಾಯಕರು ಬೆಂಬಲ ನೀಡಿದ್ದರು. ಅವರನ್ನು ಬಿಜೆಪಿಗೆ ಕರೆತರಲಾಗುವುದು ಎಂದು ನಾಯಕರು ಹಿಂದೆಯೇ ಘೋಷಿಸಿದ್ದರು.
ಅರವಿಂದ, ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಹಾಗೂ ಶಾಸಕ ರಮೇಶ ಜಾರಕಿಹೊಳಿ ಬೆಂಬಲಿಗರಾಗಿದ್ದಾರೆ. ಆದರೆ, ಸವದಿ ಸಮ್ಮುಖದಲ್ಲಿ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಶಾಸಕರಾದ ಮಹಾಂತೇಶ ದೊಡ್ಡಗೌಡರ, ದುರ್ಯೋಧನ ಐಹೊಳೆ, ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ, ಮುಖಂಡ ಮಹಾಂತೇಶ ಕವಟಗಿಮಠ ಹಾಜರಿದ್ದರು.
ಅರವಿಂದ ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ ಎನ್ನಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.