ADVERTISEMENT

ಬೆಳಗಾವಿ: ಸುವರ್ಣಸೌಧ ಸಮರ್ಪಕ ನಿರ್ವಹಣೆಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2024, 13:08 IST
Last Updated 19 ಮಾರ್ಚ್ 2024, 13:08 IST
<div class="paragraphs"><p>ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ವಿಧಾನಸಭೆ ಅಧ್ಯಕ್ಷ ಯು.ಟಿ.ಖಾದರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಂಗಳವಾರ ಭೇಟಿ ನೀಡಿ, ನಿರ್ವಹಣೆ ಪರಿಶೀಲಿಸಿದರು</p></div>

ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ವಿಧಾನಸಭೆ ಅಧ್ಯಕ್ಷ ಯು.ಟಿ.ಖಾದರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಂಗಳವಾರ ಭೇಟಿ ನೀಡಿ, ನಿರ್ವಹಣೆ ಪರಿಶೀಲಿಸಿದರು

   

ಬೆಳಗಾವಿ: ‘ಇಲ್ಲಿನ ಸುವರ್ಣ ವಿಧಾನಸೌಧದ ನಿರ್ವಹಣೆಗೆ ಸಂಬಂಧಿಸಿ, ವಿಧಾನಮಂಡಲ ಚಳಿಗಾಲದ ಅಧಿವೇಶನ ವೇಳೆ ನೀಡಿದ್ದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು’ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸೂಚಿಸಿದರು.

ಇಲ್ಲಿನ ಸುವರ್ಣ ವಿಧಾನಸೌಧಕ್ಕೆ ಮಂಗಳವಾರ ಭೇಟಿ ನೀಡಿದ ಅವರು, ‘ಸೌಧದಲ್ಲಿರುವ ವಿಧಾನಸಭೆ ಮತ್ತು ಪರಿಷತ್ ಸಭಾಂಗಣದ ನಿರ್ವಹಣೆ ವಿಚಾರವಾಗಿ ಕೆಲವು ನ್ಯೂನತೆಗಳನ್ನು ಸರಿಪಡಿಸುವಂತೆ ಸೂಚಿಸಲಾಗಿತ್ತು. ಅವುಗಳನ್ನು ಪಾಲಿಸುವ ಜತೆಗೆ, ಇಡೀ ಸೌಧದ ಸಮರ್ಪಕ ನಿರ್ವಹಣೆಗೆ ಕ್ರಮ ವಹಿಸಬೇಕು’ ಎಂದರು.

ADVERTISEMENT

‘2023ರ ಡಿಸೆಂಬರ್‌ನಲ್ಲಿ ನಡೆದ ವಿಧಾನಮಂಡಲ ಅಧಿವೇಶನದ ಯಶಸ್ಸಿಗೆ ವಿವಿಧ ಸಮಿತಿಗಳ ಮುಖ್ಯಸ್ಥರು ಹಾಗೂ ಸದಸ್ಯರು ಶ್ರಮಿಸಿದ್ದಾರೆ. ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಯಾವುದೇ ಅನನುಕೂಲ ಉಂಟಾಗದಂತೆ ಅಧಿವೇಶನವನ್ನು ಅಚ್ಚುಕಟ್ಟಾಗಿ ನಡೆಸಿದ್ದಾರೆ. ಇವರೆಲ್ಲರೂ ಅಭಿನಂದನೆಗೆ ಅರ್ಹರು. ಬೆಳಗಾವಿಯಲ್ಲಿ ಪ್ರತಿವರ್ಷ ಇದೇ ರೀತಿ ಅಧಿವೇಶನ ಯಶಸ್ವಿಯಾಗಿ ನಡೆಯಬೇಕು ಎಂಬುದು ನಮ್ಮ ಆಶಯ’ ಎಂದು ತಿಳಿಸಿದರು.

ಹೆಚ್ಚು ಮಸೂದೆ ಅಂಗೀಕಾರ:

ವಿಧಾನಸಭೆ ಅಧ್ಯಕ್ಷ ಯು.ಟಿ.ಖಾದರ್, ‘ಬೆಳಗಾವಿಯಲ್ಲಿ ಈ ಸಲದ ಅಧಿವೇಶನದಲ್ಲಿ ಹೆಚ್ಚಿನ ಅವಧಿ ಚರ್ಚೆ ನಡೆದಿದೆ. ಅಲ್ಲದೆ, ಹೆಚ್ಚು ಮಸೂದೆಗಳನ್ನು ಅಂಗೀಕರಿಸಲಾಗಿದೆ. ಜಿಲ್ಲಾಧಿಕಾರಿ ನಿತೇಶ್ ಪಾಟೀಲ ನೇತೃತ್ವದಲ್ಲಿ ಎಲ್ಲ ಅಧಿಕಾರಿಗಳು ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ್ದೀರಿ’ ಎಂದರು.

ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ ಕಲಾದಗಿ, ಆಹಾರ ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕಿ ವಿದ್ಯಾವತಿ ಭಜಂತ್ರಿ ತಮ್ಮ ಅಭಿಪ್ರಾಯ ಹಂಚಿಕೊಂಡರು.

ವಿಧಾನಸಭೆ ಕಾರ್ಯದರ್ಶಿಗಳಾದ ಎಂ.ಕೆ.ವಿಶಾಲಾಕ್ಷಿ, ಮಹಾಲಕ್ಷ್ಮೀ, ಲೋಕೋಪಯೋಗಿ ಇಲಾಖೆ ಅಧೀಕ್ಷಕ ಎಂಜಿನಿಯರ್ ಅರುಣಕುಮಾರ್ ಪಾಟೀಲ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.