ADVERTISEMENT

ಪ್ರವಾಹ ನಿರ್ವಹಣೆಗೆ ಸಿದ್ಧರಾಗಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ

​ಪ್ರಜಾವಾಣಿ ವಾರ್ತೆ
Published 15 ಜೂನ್ 2024, 14:29 IST
Last Updated 15 ಜೂನ್ 2024, 14:29 IST
<div class="paragraphs"><p>ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಶನಿವಾರ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ವಿಭಾಗ ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು</p></div>

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಶನಿವಾರ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ವಿಭಾಗ ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು

   

ಬೆಳಗಾವಿ: ‘ಸಂಭವನೀಯ ಪ್ರವಾಹ ನಿರ್ವಹಣೆಗೆ ಎಲ್ಲ ಜಿಲ್ಲಾಡಳಿತಗಳು ಸಿದ್ಧತೆ ಮಾಡಿಕೊಳ್ಳಬೇಕು. ನದಿಯ ಒಳಹರಿವು ಹಾಗೂ ಮಳೆಯ ಪ್ರಮಾಣದ ಮೇಲೆ ನಿರಂತರ‌ ನಿಗಾ ವಹಿಸಬೇಕು. ಜನ, ಜಾನುವಾರಿಗಳ ಜೀವಹಾನಿ ತಡೆಯಲು ಮುನ್ನೆಚ್ಚರಿಕೆ ವಹಿಸಬೇಕು’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಶನಿವಾರ ನಡೆದ ಬೆಳಗಾವಿ ವಿಭಾಗದ ಜಿಲ್ಲಾಧಿಕಾರಿಗಳು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ‘ಅನಾಹುತ ಸಂಭವಿಸಿದಾಗ ರಕ್ಷಣಾ ತಂಡಗಳು ಯಾವ ರೀತಿ ಕಾರ್ಯಾಚರಣೆ ಕೈಗೊಳ್ಳಬೇಕು ಎಂಬುದರ ಕುರಿತು ಕಂದಾಯ, ಪೊಲೀಸ್, ಅಗ್ನಿಶಾಮಕ ಸೇರಿದಂತೆ ಸಂಬಂಧಿಸಿದ ಇಲಾಖೆಗಳು ಮುಂಚಿತವಾಗಿಯೇ ಸಮನ್ವಯತೆ ಸಾಧಿಸಬೇಕು’ ಎಂದು ತಾಕೀತು ಮಾಡಿದರು.

ADVERTISEMENT

‘ಜಿಲ್ಲಾ ಮಟ್ಟದಲ್ಲಿ ಮಾತ್ರವಲ್ಲ; ಪ್ರವಾಹಬಾಧಿತ ಆಗುವ ತಾಲ್ಲೂಕು ಕೇಂದ್ರಗಳಲ್ಲೂ ಸಿದ್ಧತೆ ಮಾಡಿಕೊಳ್ಳಬೇಕು. ಕೇವಲ ಪ್ರವಾಹ ಬಂದಾಗ ಮಾತ್ರವಲ್ಲ; ಮನೆಕುಸಿತ ಮತ್ತಿತರ ತುರ್ತು ಸಂದರ್ಭಗಳಲ್ಲಿ ರಕ್ಷಣಾ ವ್ಯವಸ್ಥೆ ಮತ್ತು ತಂಡಗಳು ಸಜ್ಜಾಗಿರಬೇಕು’ ಎಂದರು.

ಪ್ರವಾಹ ನಿರ್ವಹಣೆ ಪೂರ್ವಸಿದ್ಧತೆ ಕುರಿತು ಮಾತನಾಡಿದ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ‘ಕೊಯ್ನಾದಿಂದ‌ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಟ್ಟಾಗ ಪ್ರವಾಹ ಪರಿಸ್ಥಿತಿ ತಲೆದೋರುತ್ತದೆ. ಆದ್ದರಿಂದ ನೀರು ಬಿಡುಗಡೆ ಕುರಿತು ಮಹಾರಾಷ್ಟ್ರ ಸರ್ಕಾರದ ಜತೆ ಸಮನ್ವಯ ಸಾಧಿಸಿಕೊಂಡು ಉಭಯ ರಾಜ್ಯಗಳ ಉನ್ನತಮಟ್ಟದ ಸಮಿತಿ ರಚಿಸಲಾಗಿದೆ. ಜಲಾಶಯಗಳ ನೀರಿನ ಮಟ್ಟ ನಿರ್ವಹಣೆ ಮಾಡುವುದರಿಂದ ಪ್ರವಾಹ ಪರಿಸ್ಥಿತಿ ತಡೆಗಟ್ಟಬಹುದು’ ಎಂದರು.

ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಮಾತನಾಡಿ, ‘ಜಿಲ್ಲೆಯಲ್ಲಿ ಬೆಣ್ಣಿಹಳ್ಳ ಹಾಗೂ ತುಪ್ಪರಿ ಹಳ್ಳದ ವ್ಯಾಪ್ತಿಯಲ್ಲಿ ಮಾತ್ರ ಪ್ರವಾಹ ಪರಿಸ್ಥಿತಿ ಉಂಟಾಗುತ್ತದೆ. ಪ್ರವಾಹ ಬಾಧೆ ಅನುಭವಿಸುವ ಪ್ರದೇಶ ಹಾಗೂ ಜನಸಂಖ್ಯೆಯನ್ನು ಈಗಾಗಲೇ‌ ಸಮೀಕ್ಷೆ ಮೂಲಕ ಗುರುತಿಸಲಾಗಿದೆ. ಗರಿಷ್ಠ ಪ್ರವಾಹ ಉಂಟಾದರೆ 85 ಸಾವಿ ಹೆಕ್ಟೇರ್ ಕೃಷಿ ಜಮೀನಿನಲ್ಲಿ ನೀರು ನಿಲ್ಲಬಹುದು. ಈ ಎಲ್ಲ ಸಾಧ್ಯತೆಗಳನ್ನು ಗಮನಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ’ ಎಂದು ವಿವರಿಸಿದರು.

ಬಾಗಲಕೋಟೆ ಜಿಲ್ಲಾಧಿಕಾರಿ ಜಾನಕಿ, ಉತ್ತರ ಕನ್ನಡ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಹಾಗೂ ಹಾವೇರಿ ಜಿಲ್ಲಾ ಮಟ್ಟದ ಅಧಿಕಾರಿಗಳು ಚರ್ಚಿಸಿದರು.

ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಖಟಾರಿಯಾ, ನೋಂದಣಿ ಮತ್ತು ಸಾಮಾಜಿಕ‌ ಭದ್ರತೆ ಕಾರ್ಯದರ್ಶಿ ವಿ.ರಶ್ಮಿ ಮಹೇಶ್, ಆಯುಕ್ತ ಪೊಮ್ಮಲ ಸುನೀಲ್ ಕುಮಾರ್, ಮುದ್ರಾಂಕ ಇಲಾಖೆಯ ಆಯುಕ್ತೆ ಬಿ‌.ಆರ್.ಮಮತಾ, ಪ್ರಾದೇಶಿಕ ಆಯುಕ್ತ ಸಂಜಯ ಶೆಟ್ಟೆಣ್ಣವರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.