ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜ.11ರಿಂದ 18ರವರೆಗೆ ವಸತಿ ಶಾಲೆಗಳೂ ಸೇರಿದಂತೆ ಎಲ್ಲ ಮಾಧ್ಯಮಗಳ 1ರಿಂದ 9ನೇ ತರಗತಿ ಶಾಲೆಗಳನ್ನು ಬಂದ್ ಮಾಡುವಂತೆ ಸೋಮವಾರ ಆದೇಶ ಹೊರಡಿಸಿದ್ದೇನೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು.
ಅಧಿಕಾರಿಗಳ ಸಭೆಯ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕೊರೊನಾ ಹರಡುವಿಕೆ ತಡೆಗಟ್ಟುವ ಉದ್ದೇಶದಿಂದ ಮತ್ತು ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಶಾಲೆಗಳನ್ನು ತೆರೆಯದಂತೆ ತೀರ್ಮಾನ ಕೈಗೊಳ್ಳಲಾಗಿದೆ. ಡಿಎಚ್‍ಒ, ಡಿಡಿಪಿಐ ಮೊದಲಾದವರೊಂದಿಗೆ ಚರ್ಚಿಸಿ ಮುಖ್ಯ ಕಾರ್ಯದರ್ಶಿ ಗಮನಕ್ಕೆ ತರಲಾಗಿದೆ ಎಂದು ಮಾಹಿತಿ ನೀಡಿದರು.
ಪೋಷಕರು ಸಾಕಷ್ಟು ಜಾಗರೂಕತೆ ವಹಿಸಬೇಕು. ಮಕ್ಕಳಲ್ಲಿ ಕೋವಿಡ್ ಲಕ್ಷಣಗಳು ಕಂಡುಬಂದರೆ ತಕ್ಷಣವೇ ಪರೀಕ್ಷೆ ಮಾಡಿಸಬೇಕು. ತುರ್ತು ಚಿಕಿತ್ಸೆ ಒದಗಿಸಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ. ಹೀಗಾಗಿ ಪೋಷಕರು ಮತ್ತು ಸಾರ್ವಜನಿಕರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಜಿಲ್ಲಾಡಳಿತ ಕೈಗೊಳ್ಳುವ ಕ್ರಮಗಳಿಗೆ ಎಲ್ಲರೂ ಸಹಕಾರ ನೀಡಬೇಕು ಎಂದು ಕೋರಿದರು.
ಆದೇಶ ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ 188ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.