ADVERTISEMENT

ಬೆಳಗಾವಿ | ಬಾಣಂತಿ ಸಾವಿನ ಪ್ರಕರಣದ ಬಗ್ಗೆ ತನಿಖೆ: ಸತೀಶ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2024, 13:23 IST
Last Updated 20 ನವೆಂಬರ್ 2024, 13:23 IST
<div class="paragraphs"><p>ಸತೀಶ ಜಾರಕಿಹೊಳಿ</p></div>

ಸತೀಶ ಜಾರಕಿಹೊಳಿ

   

– ಪ್ರಜಾವಾಣಿ ಚಿತ್ರ

ಬೆಳಗಾವಿ: ‘ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆಗೆ ದಾಖಲಾಗಿದ್ದ ಬಾಣಂತಿ ಕಲ್ಪನಾ ರಾಠೋಡ ಮೃತಪಟ್ಟ ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುತ್ತಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ADVERTISEMENT

ಇಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವೈದ್ಯರ ನಿರ್ಲಕ್ಷ್ಯದಿಂದ ಕಲ್ಪನಾ ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಮತ್ತು ಸಂಬಂಧಿಕರು ಆರೋಪಿಸಿದ್ದಾರೆ. ಹಾಗಾಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳುತ್ತಿದ್ದಾರೆ. ಅವರು ನೀಡುವ ವರದಿ ಆಧರಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದರು.

‘ಜಿಲ್ಲಾಸ್ಪತ್ರೆಯ ಎನ್‌ಐಸಿಯು ವಾರ್ಡ್‌ನಲ್ಲಿ 160ಕ್ಕೂ ಅಧಿಕ ಶಿಶು ಸಾವನ್ನಪ್ಪಿದ ಬಗ್ಗೆ ಉನ್ನತಮಟ್ಟದ ಸಮಿತಿ ತನಿಖೆ ನಡೆಸುತ್ತಿದೆ. ಅವರು ನೀಡುವ ವರದಿ ಆಧರಿಸಿ, ವೈದ್ಯಕೀಯ ಶಿಕ್ಷಣ ಇಲಾಖೆಯು ಸಂಬಂಧಿತರ ವಿರುದ್ಧ ಕ್ರಮ ಕೈಗೊಳ್ಳಲಿದೆ’ ಎಂದು ತಿಳಿಸಿದರು.

‘ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಡಿ.9ರಿಂದ ವಿಧಾನಮಂಡಲ ಚಳಿಗಾಲದ ಅಧಿವೇಶನ ನಡೆಯಲಿದೆ. ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದಿದ್ದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವವನ್ನೂ ಆಯೋಜಿಸಿದ್ದು, ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಹಾಗಾಗಿ ನಗರದಲ್ಲಿನ ರಸ್ತೆಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಹಣ ಬಿಡುಗಡೆಗೊಳಿಸಲಾಗುವುದು’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ಈ ವರ್ಷ ಹೆಚ್ಚಿನ ಮಳೆ ಸುರಿದಿದ್ದರಿಂದ ರಾಜ್ಯದಾದ್ಯಂತ ರಸ್ತೆಗಳು ಹಾಳಾಗಿವೆ. ಆ ರಸ್ತೆಗಳ ಗುಂಡಿಗಳನ್ನು ಮುಚ್ಚುವ ಕೆಲಸ ಆರಂಭವಾಗಿದೆ. ಡಿ.15ರವರೆಗೂ ಈ ಕೆಲಸ ನಡೆಯಲಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.