ಬೆಳಗಾವಿ: ‘ದೇಶದಲ್ಲಿ ಎಲ್ಲ ಪ್ರಜೆಗಳಿಗೂ ಸಮಾನವಾದ ಹಕ್ಕು ಕಲ್ಪಿಸಲು ಸಂವಿಧಾನ ರಚಿಸಿದ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರನ್ನು ಒಂದೇ ಜಾತಿಗೆ ಸೀಮಿತಗೊಳಿಸುತ್ತಿರುವುದು ಸರಿಯಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಇಲ್ಲಿನ ಬಿ.ಆರ್.ಅಂಬೇಡ್ಕರ್ ಉದ್ಯಾನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಭಾರತದ ಸಂವಿಧಾನ ಪ್ರತಿಯೊಬ್ಬರಿಗೂ ಸಮಾನತೆ ಮತ್ತು ನ್ಯಾಯ ಒದಗಿಸಿದೆ. ವಿಶ್ವದ ಶ್ರೇಷ್ಠ ಸಂವಿಧಾನಗಳಲ್ಲಿ ಇದೂ ಒಂದು ಎಂದು ಪರಿಗಣಿಸಲಾಗಿದೆ. ವಿದ್ಯಾರ್ಥಿಗಳು ಪ್ರತಿದಿನ ಸಂವಿಧಾನದ ಪೀಠಿಕೆ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.
‘ಸಂವಿಧಾನ ರಚನೆಯಾಗುವ ಮುನ್ನ, ದೇಶದ ಪರಿಸ್ಥಿತಿ ಕಷ್ಟಕರವಾಗಿತ್ತು. ಎಲ್ಲರಿಗೂ ಸಮಾನವಾದ ಹಕ್ಕು ಸಿಕ್ಕಿರಲಿಲ್ಲ. ಈ ತಾರತಮ್ಯ ಹೋಗಲಾಡಿಸಲು ಅಂಬೇಡ್ಕರ್, ಸಂವಿಧಾನವೆಂಬ ಮಹಾನ್ ಗ್ರಂಥ ರಚಿಸಿದರು. ಇಂದು ಅದು ನಮಗೆ ಎಲ್ಲ ರೀತಿಯ ಸ್ವಾತಂತ್ರ್ಯ ತಂದುಕೊಟ್ಟಿದೆ. ನವೆಂಬರ್ 26ರಂದು ಎಲ್ಲ ಸರ್ಕಾರಿ ಕಚೇರಿಗಳು, ಶಾಲಾ–ಕಾಲೇಜುಗಳಲ್ಲಿ ಭಾರತದ ಸಂವಿಧಾನ ದಿನ ಆಚರಿಸಲಾಗುತ್ತಿದೆ. ಸಂವಿಧಾನದಲ್ಲಿರುವ ಅಂಶಗಳನ್ನು ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಹೇಳಿದರು.
ಇದಕ್ಕೂ ಮುನ್ನ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸಂವಿಧಾನ ಪೀಠಿಕೆ ಭೋದಿಸಿದರು.
ಶಾಸಕ ಆಸೀಫ್ ಸೇಠ್, ಮೇಯರ್ ಶೋಭಾ ಸೋಮನಾಚೆ, ಉಪಮೇಯರ್ ರೇಷ್ಮಾ ಪಾಟೀಲ, ನಗರ ಪೊಲೀಸ್ ಆಯುಕ್ತ ಎಸ್.ಎನ್.ಸಿದ್ರಾಮಪ್ಪ, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೊಯರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಹೆಚ್ಚುವರಿ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಬೆಳಗಾವಿ ಉಪವಿಭಾಗಾಧಿಕಾರಿ ಶ್ರವಣ ನಾಯಕ, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ ಕಲಾದಗಿ, ಮಲ್ಲೇಶ ಚೌಗಲೆ, ಮಹಾದೇವ ತಳವಾರ ಇತರರಿದ್ದರು. ಸಮಾಜಕಲ್ಯಾಣ ಇಲಾಖೆ ಜಂಟಿನಿರ್ದೇಶಕ ಲಕ್ಷ್ಮಣ ಬಬಲಿ ಸ್ವಾಗತಿಸಿದರು. ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಸವರಾಜ ಕುರಿಹುಲಿ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.